ADVERTISEMENT

ಹಾವೇರಿ: ಸಚಿವ ಅಶೋಕ್‌ ಗ್ರಾಮ ವಾಸ್ತವ್ಯ ಡಿ.17ಕ್ಕೆ

ದಲಿತರ ಮನೆಯಲ್ಲಿ ಉಪಾಹಾರ ಸೇವನೆ: ಫಲಾನುಭವಿಗಳಿಗೆ ಸೌಲಭ್ಯ ವಿತರಣೆ

​ಪ್ರಜಾವಾಣಿ ವಾರ್ತೆ
Published 14 ಡಿಸೆಂಬರ್ 2022, 13:14 IST
Last Updated 14 ಡಿಸೆಂಬರ್ 2022, 13:14 IST
ಆರ್. ಅಶೋಕ್, ಕಂದಾಯ ಸಚಿವ 
ಆರ್. ಅಶೋಕ್, ಕಂದಾಯ ಸಚಿವ    

ಹಾವೇರಿ: ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮದ ಅಂಗವಾಗಿ ಕಂದಾಯ ಸಚಿವ ಆರ್.ಅಶೋಕ ಜಿಲ್ಲೆಯ ಶಿಗ್ಗಾವಿ ತಾಲ್ಲೂಕು ಬಾಡ ಗ್ರಾಮದಲ್ಲಿ ಡಿ.17ರಂದು ನಡೆಯುವ ಗ್ರಾಮ ವಾಸ್ತವ್ಯ ಕೈಗೊಂಡು, ಡಿ.18ರಂದು ಗ್ರಾಮ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ರಘುನಂದನ ಮೂರ್ತಿ ತಿಳಿಸಿದ್ದಾರೆ.

ಡಿ.17ರಂದು ಬಾಡ ಗ್ರಾಮಕ್ಕೆ ಆಗಮಿಸಿ ಕಾರ್ಯಕ್ರಮದ ಸ್ಥಳದಲ್ಲಿ ವಿವಿಧ ಇಲಾಖೆಗಳಿಂದ ತೆರೆಯಲಾದ ಮಳಿಗೆಗಳಿಗೆ ಭೇಟಿ ನೀಡಿ, ವಿವಿಧ ಇಲಾಖೆಗಳಿಂದ ಸಾರ್ವಜನಿಕರಿಗೆ ದೊರೆಯುವ ಸೌಲಭ್ಯಗಳು ಕುರಿತು ಪರಿಶೀಲನೆ ನಡೆಸಲಿದ್ದಾರೆ. ವಿವಿಧ ಇಲಾಖೆಗಳಿಂದ ವಿವಿಧ ಯೋಜನೆಗಳಡಿ ಆಯ್ಕೆಯಾದ 20 ಸಾವಿರಕ್ಕೂ ಅಧಿಕ ಫಲಾನುಭವಿಗಳ ಪೈಕಿ ಸಾಂಕೇತಿಕವಾಗಿ 150ಕ್ಕೂ ಹೆಚ್ಚು ಫಲಾನುಭವಿಗಳಿಗೆ ಪ್ರಮಾಣಪತ್ರ, ಸೌಲಭ್ಯಗಳನ್ನು ವಿತರಣೆ ಮಾಡಲಿದ್ದಾರೆ.

ಅದೇ ದಿನ ಸಂಜೆ ಮೂಡಬಿದರಿಯ ಆಳ್ವಾಸ ಶಾಲೆಯ ವಿದ್ಯಾರ್ಥಿಗಳಿಂದ ಆಯೋಜಿಸಲಾದ ‘ಆಳ್ವಾಸ್ ಸಾಂಸ್ಕೃತಿಕ ವೈಭವ’ ಕಾರ್ಯಕ್ರಮ ವೀಕ್ಷಣೆ ಮಾಡಲಿದ್ದಾರೆ. ರಾತ್ರಿ ಬಾಡಾ ಗ್ರಾಮದ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯಲ್ಲಿ ವಸತಿ ಶಾಲೆಯ ಮಕ್ಕಳೊಂದಿಗೆ ರಾತ್ರಿ ಊಟ ಸೇವಿಸಿ ಅದೇ ಶಾಲೆಯಲ್ಲಿ ವಾಸ್ತವ್ಯ ಮಾಡಲಿದ್ದಾರೆ.

ADVERTISEMENT

ದಲಿತರ ಮನೆಯಲ್ಲಿ ಉಪಾಹಾರ:

ಡಿ.18ರಂದು ಬೆಳಿಗ್ಗೆ ಬಾಡಾ ಗ್ರಾಮದ ದಲಿತರ ಮನೆಯಲ್ಲಿ ಉಪಾಹಾರ ಸೇವಿಸಿ, ಗ್ರಾಮ ಸಭೆ ನಡೆಸುವರು. ಗ್ರಾಮ ಸಭೆಯಲ್ಲಿ ಗ್ರಾಮ ಸಭೆಯ ಅನುಮೋದನೆ ಪಡೆದು ಗ್ರಾಮದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಒಂದು ಕೋಟಿ ಅನುದಾನ ಬಿಡುಗಡೆ ಮಾಡಲಿದ್ದಾರೆ ಹಾಗೂ ಗ್ರಾಮ ಪಂಚಾಯಿತಿಯಲ್ಲಿ ಪೌತಿ ಖಾತೆ ಆಂದೋಲನ ನಡೆಸಲಿದ್ದಾರೆ. ಎರಡು ದಿನಗಳ ಕಂದಾಯ ಸಚಿವರ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಜಿಲ್ಲಾಧಿಕಾರಿಗಳು ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.