ಹಾವೇರಿ: ಗದಗ–ಹಾವೇರಿ ಲೋಕಸಭಾ ಕ್ಷೇತ್ರದ ಸಂಸದ ಶಿವಕುಮಾರ ಉದಾಸಿ ಅವರು ಚುನಾವಣಾ ರಾಜಕೀಯಕ್ಕೆ ವಿದಾಯ ಹೇಳಿರುವುದು ಜಿಲ್ಲೆಯಲ್ಲಿ ಚರ್ಚೆಗೆ ಗ್ರಾಸವಾಗಿದೆ.
2009, 2014 ಮತ್ತು 2019ರ ಮೂರು ಲೋಕಸಭಾ ಚುನಾವಣೆಗಳಲ್ಲೂ ಶಿವಕುಮಾರ ಉದಾಸಿ ಅವರು ಬಿಜೆಪಿಯಿಂದ ಸ್ಪರ್ಧಿಸಿ, ಹ್ಯಾಟ್ರಿಕ್ ಗೆಲುವು ಸಾಧಿಸಿದ್ದರು. 2024ರ ಲೋಕಸಭಾ ಚುನಾವಣೆಗೆ ಒಂದು ವರ್ಷ ಬಾಕಿ ಇರುವ ಸಂದರ್ಭದಲ್ಲಿ ಇವರು ಚುನಾವಣಾ ರಾಜಕೀಯಕ್ಕೆ ಗುಡ್‌ಬೈ ಹೇಳಿರುವುದು ಪಕ್ಷದ ಕಾರ್ಯಕರ್ತರಲ್ಲಿ ಆಘಾತ ಮತ್ತು ಅಚ್ಚರಿ ತಂದಿದೆ.
‘ಕಳೆದ ಒಂದು ವರ್ಷದ ಹಿಂದೆಯೇ ಚುನಾವಣೆಗೆ ನಿಲ್ಲುವುದಿಲ್ಲ ಎಂದು ನಿರ್ಧಾರ ತೆಗೆದುಕೊಂಡಿದ್ದೇನೆ. ಈ ಬಗ್ಗೆ ನಮ್ಮ ಪಕ್ಷದ ಮುಖಂಡರಿಗೆ ತಿಳಿಸಿದ್ದೇನೆ. ನನ್ನ ಖಾಸಗಿ ವ್ಯವಹಾರಗಳ ಜವಾಬ್ದಾರಿ ಮತ್ತು ವೈಯಕ್ತಿಕ ಕಾರಣದಿಂದ ಚುನಾವಣಾ ರಾಜಕೀಯಕ್ಕೆ ವಿದಾಯ ಹೇಳಲು ತೀರ್ಮಾನಿಸಿದ್ದೇನೆ. ಹೀಗಾಗಿ, ನಾನು 2024ರ ಲೋಕಸಭಾ ಚುನಾವಣೆಯ ಆಕಾಂಕ್ಷಿಯಾಗಿಲ್ಲ’ ಎಂದು ಸಂಸದ ಶಿವಕುಮಾರ ಉದಾಸಿ ಸ್ಪಷ್ಟಪಡಿಸಿದರು.
ಮಾಜಿ ಸಚಿವ ದಿ.ಸಿ.ಎಂ. ಉದಾಸಿ ಅವರ ಪುತ್ರರಾಗಿರುವ ಶಿವಕುಮಾರ ಉದಾಸಿ ಅವರಿಗೆ 56 ವರ್ಷವಾಗಿದ್ದು, ಬಿಇ ಪದವೀಧರ. ಜಲಸಂಪನ್ಮೂಲ, ಹಣಕಾಸು, ವಿದೇಶಾಂಗ ವ್ಯವಹಾರಗಳ ಸ್ಥಾಯಿ ಸಮಿತಿಗಳಲ್ಲಿ ಕೆಲಸ ಮಾಡಿದ್ದಾರೆ. ಪ್ರಸ್ತುತ ಜಲಶಕ್ತಿ ಸಚಿವಾಲಯದ ಇಂಧನ ಮತ್ತು ಸಲಹಾ ಸಮಿತಿಯ ಸ್ಥಾಯಿ ಸಮಿತಿಯ ಸದಸ್ಯರಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.