ಹಾವೇರಿ: ಕಾಂಗ್ರೆಸ್ ಸದಸ್ಯರ ಮೇಲೆ ಸುಳ್ಳು ಪ್ರಕರಣ ದಾಖಲಿಸಿ, ಬಂಧಿಸಲು ಬಿಜೆಪಿಯವರು ಯತ್ನಿಸಿದರು. ಆಸೆ, ಆಮಿಷ ತೋರಿಸಿ,ವಾಮಮಾರ್ಗದಿಂದ ಅಧಿಕಾರ ಹಿಡಿಯಲು ಕುತಂತ್ರ ಮಾಡಿದರು. ಇಂಥವರಿಂದ ಪ್ರಜಾಪ್ರಭುತ್ವಕ್ಕೆ ಅಪಾಯವಿದೆ’ ಎಂದು ವಿಧಾನಸಭಾ ಮಾಜಿ ಸಭಾಧ್ಯಕ್ಷ ಕೆ.ಬಿ.ಕೋಳಿವಾಡ ಕಿಡಿಕಾರಿದರು.
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಬಿಜೆಪಿಯವರ ಕುತಂತ್ರ ಅರಿತು, ನಾವು ಕಾನೂನು ರೀತಿ ಎಲ್ಲ ಕಡೆ ಒತ್ತಡ ತಂದು, ಸದಸ್ಯರು ಚುನಾವಣೆಯಲ್ಲಿ ಭಾಗವಹಿಸುವಂತೆ ನೋಡಿಕೊಂಡೆವು. ಹೀಗಾಗಿ ಅಧಿಕ ಸಂಖ್ಯಾಬಲ ಹೊಂದಿದ್ದ ಕಾಂಗ್ರೆಸ್ ನಗರಸಭೆಯ ಚುಕ್ಕಾಣಿ ಹಿಡಿಯಲು ಸಾಧ್ಯವಾಯಿತು ಎಂದರು.
ಇದು ಎಷ್ಟು ದಿನ ನಡೆಯುತ್ತದೋ ಇಲ್ಲವೋ ಗೊತ್ತಿಲ್ಲ. ಕಾಂಗ್ರೆಸ್‌ನವರು ಒಗ್ಗಟ್ಟಿನಿಂದ ಕೆಲಸ ಮಾಡುತ್ತಾ ಇದ್ದೇವೆ. ಕೆಲವೇ ದಿನಗಳಲ್ಲಿ ಮತ್ತೆ ಚುನಾವಣೆ ಬಂದರೆ ಅಚ್ಚರಿಪಡಬೇಕಿಲ್ಲ ಎಂದು ಪರೋಕ್ಷವಾಗಿ ಮಧ್ಯಂತರ ಚುನಾವಣೆ ಬರುವ ಸಾಧ್ಯತೆ ಬಗ್ಗೆ ಕುರುಹು ನೀಡಿದರು.
ಬಿಜೆಪಿಯಿಂದ ದುರಾಡಳಿತ:
ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿಯ ದುರಾಡಳಿತದಿಂದ ಜನರು ಬೇಸತ್ತಿದ್ದಾರೆ.ಎಲ್ಲ ರಂಗದಲ್ಲೂ ಬಿಜೆಪಿ ವಿಫಲವಾಗಿದೆ. ಕೊರೊನಾ ಪ್ರಕರಣಗಳು ಹೆಚ್ಚಾಗುವುದಕ್ಕೆ ನಿರ್ಲಕ್ಷ್ಯಧೋರಣೆ ಕಾರಣ. ರೈತ ವಿರೋಧಿ ಕಾಯ್ದೆಗಳನ್ನು ಜಾರಿಗೆ ತಂದಿದ್ದಾರೆ. ಹೀಗಾಗಿ ಚುನಾವಣೆಯಲ್ಲಿ ಪಾಠ ಕಲಿಸೋಕೆ ಜನರು ಕಾಯುತ್ತಿದ್ದಾರೆ ಎಂದರು.
ರಾಜರಾಜೇಶ್ವರಿ ಮತ್ತು ಶಿರಾ ಎರಡೂ ಕಡೆ ಕಾಂಗ್ರೆಸ್ ಗೆಲ್ಲುವುದು ಶತಸಿದ್ಧ. ವಿಧಾನ ಪರಿಷತ್ ಚುನಾವಣೆಯಲ್ಲಿ ಕುಬೇರಪ್ಪ ಗೆಲುವು ಸಾಧಿಸಲಿದ್ದಾರೆ. ಬಿಹಾರದಲ್ಲಿ ನಿತೀಶ್‌ಕುಮಾರ್ ಮತ್ತೆ ಮುಖ್ಯಮಂತ್ರಿಯಾಗುವುದಿಲ್ಲ. ಭಾವನಾತ್ಮಕವಾಗಿ ಬಿಜೆಪಿ ರಾಜಕಾರಣ ಮಾಡುತ್ತದೆ ಎಂದು ಟೀಕಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಎಂ.ಹಿರೇಮಠ, ಜಿ.ಪಂ. ಸದಸ್ಯ ಕೊಟ್ರೇಶಪ್ಪ ಬಸೇಗಣ್ಣಿ, ಮಾಜಿ ಸಚಿವ ಬಸವರಾಜ ಶಿವಣ್ಣವರ, ಡಾ.ಸಂಜಯ ಡಾಂಗೆ ಮುಂತಾದವರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.