ಕಲಬುರ್ಗಿ: ‘ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ತಲಾ 10 ಸಸಿಗಳನ್ನು ಕೊಡಲು ನಿರ್ಧರಿಸಲಾಗಿದ್ದು, ಮೂರು ವರ್ಷ ಅವರು ಅವುಗಳನ್ನು ಆರೈಕೆ ಮಾಡಿದರೆ 10ನೇ ತರಗತಿಗೆ 10 ಅಂಕಗಳನ್ನು ನೀಡುವ ಬಗ್ಗೆ ಚಿಂತನೆ ನಡೆದಿದೆ’ ಎಂದು ಅರಣ್ಯ ಸಚಿವ ಆರ್.ಶಂಕರ ಹೇಳಿದರು.
ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ಏರ್ಪಡಿಸಿದ್ದ ವೃತ್ತ ಮಟ್ಟದ ಕೃಷಿ ಅರಣ್ಯ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
‘8ನೇ ತರಗತಿಗೆ 10 ಸಸಿಗಳನ್ನು ವಿತರಿಸಲಾಗುವುದು. ವಿದ್ಯಾರ್ಥಿಗಳು ಮೂರು ವರ್ಷ ಆರೈಕೆ ಮಾಡಬೇಕು. ಅವರು 10ನೇ ತರಗತಿಗೆ ಬಂದಾಗ ಎಷ್ಟು ಸಸಿಗಳು ಬೆಳೆದಿರುತ್ತವೆಯೋ ಅಷ್ಟು ಅಂಕಗಳನ್ನು ಕೊಡಲಾಗುವುದು. ಈ ಕುರಿತು ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದ್ದು, ಈ ಬಗ್ಗೆ ಪ್ರಸ್ತಾವ ಸಲ್ಲಿಸಲಾಗುವುದು’ ಎಂದು ತಿಳಿಸಿದರು.
ಖಾಲಿ ಹುದ್ದೆ ಭರ್ತಿ: ಇದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಪ್ರಕ್ರಿಯೆ ನಡೆದಿದೆ. ಅರಣ್ಯಭೂಮಿ ಒತ್ತುವರಿ ಮಾಡುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು’ ಎಂದು ಹೇಳಿದರು.
‘ನಾನು ಬಿಜೆಪಿ ಸೇರುತ್ತೇನೆ ಎಂದು ಕೆಲವರು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಕೆ.ಎಸ್.ಈಶ್ವರಪ್ಪ ನನ್ನ ಸಂಬಂಧಿ. ಹೀಗಾಗಿ ವೈಯಕ್ತಿಕವಾಗಿ ಅವರನ್ನು ಭೇಟಿ ಮಾಡಿದ್ದೇನೆ. ಬಿಜೆಪಿ ನಾಯಕರು ಯಾರೂ ನನ್ನನ್ನು ಸಂಪರ್ಕಿಸಿಲ್ಲ. ಐದು ವರ್ಷ ಸಮ್ಮಿಶ್ರ ಸರ್ಕಾರದ ಜತೆಗೇ ಇರುತ್ತೇನೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
* ಇದನ್ನೂ ಓದಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.