ಕಲಬುರಗಿ: ಇಲ್ಲಿನ ಜಿಮ್ಸ್ ಆವರಣದಲ್ಲಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನವಜಾತ ಶಿಶು ಅಪಹರಣದ ಹಿನ್ನೆಲೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ ಅವರು ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದರು.
ಬೆಳಿಗ್ಗೆಯೇ ಆಸ್ಪತ್ರೆಗೆ ಧಾವಿಸಿದ ಸಚಿವರು ಮಗುವಿನ ತಾಯಿ ಹಾಗೂ ಕುಟುಂಬ ಸದಸ್ಯರನ್ನು ಭೇಟಿ ಮಾಡಿ ಮಗುವನ್ನು ಪತ್ತೆ ಹಚ್ಚುವ ಅಭಯ ನೀಡಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಮವಾರ ಬೆಳಗಿನ ಜಾವ ಇಬ್ಬರು ಅಪರಿಚಿತ ಮಹಿಳೆಯರು ನರ್ಸ್ ವೇಷದಲ್ಲಿ ಬಂದು ಮಗು ಅಪಹರಿಸಿದ್ದಾರೆ.
ಪೊಲೀಸ್ ಕಮಿಷನರ್ ಅವರು ಒಂದು ತಂಡ ರಚಿಸಿ ತನಿಖೆ ನಡೆಸುತ್ತಿದ್ದಾರೆ. ಇಲಾಖಾ ತನಿಖೆಗೂ ಆದೇಶ ಆದೇಶಿಸುತ್ತಿದ್ದೇನೆ ಎಂದರು.
ಆಸ್ಪತ್ರೆಯ ಸಿ.ಸಿ. ಟಿವಿಗಳನ್ನು ಪರಿಶೀಲನೆ ಮಾಡಲಾಗುತ್ತಿದೆ. ತನಿಖಾ ವರದಿ ಬಳಿಕ ಕ್ರಮ ಕೈಗೊಳ್ಳಲಾಗುವುದು ಎಂದರು.
ಪೊಲೀಸ್ ಕಮಿಷನರ್ ಶರಣಪ್ಪ ಎಸ್.ಡಿ. ಮಾತನಾಡಿ, ಮಗುವಿನ ಹುಡುಕಾಟಕ್ಕಾಗಿ ಮೂರು ತಂಡಗಳನ್ನು ರಚನೆ ಮಾಡಲಾಗಿದೆ. ಮೂರ್ನಾಲ್ಕು ಆಯಾಮದಲ್ಲಿ ತನಿಖೆ ನಡೆಯುತ್ತಿದೆ. ಕೆಲ ಸುಳಿವು ಸಿಕ್ಕಿದೆ , ಅದರ ಆಧಾರದ ಮೇಲೆ ತನಿಖೆ ನಡೆಯುತ್ತಿದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.