ADVERTISEMENT

ಕಲಬುರಗಿ: ಅಕ್ಷರ ದಾಸೋಹ ನೌಕರರ ಪ್ರತಿಭಟನೆ 20ರಂದು

​ಪ್ರಜಾವಾಣಿ ವಾರ್ತೆ
Published 16 ನವೆಂಬರ್ 2024, 13:20 IST
Last Updated 16 ನವೆಂಬರ್ 2024, 13:20 IST
ಮರಿಯಪ್ಪ ಹಳ್ಳಿ
ಮರಿಯಪ್ಪ ಹಳ್ಳಿ   

ಕಲಬುರಗಿ: ಅಕ್ಷರ ದಾಸೋಹ ಯೋಜನೆಯನ್ನು ಸಂಪೂರ್ಣವಾಗಿ ಶಿಕ್ಷಣ ಇಲಾಖೆ ಅಡಿಯಲ್ಲಿ ನಡೆಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅಖಿಲ ಕರ್ನಾಟಕ ಅಕ್ಷರ ದಾಸೋಹ ನೌಕರರ ಸಂಘದ (ದಲಿತ ಸಂಘರ್ಷ ಸಮಿತಿ ಸಂಯೋಜಿತ) ವತಿಯಿಂದ ನ.20ರಂದು ಬೆಳಿಗ್ಗೆ 10.30ಕ್ಕೆ ನಗರದ ಜಗತ್ ವೃತ್ತದಿಂದ ಮಿನಿವಿಧಾನಸೌಧ ಮಾರ್ಗವಾಗಿ ಡಿಡಿಪಿಐ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಮರಿಯಪ್ಪ ಹಳ್ಳಿ ತಿಳಿಸಿದರು.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಕ್ಷರ ದಾಸೋಹ ನೌಕರರು ಕೇವಲ ₹3,600 ವೇತನದಲ್ಲಿ ಕೆಲಸ ಮಾಡುತ್ತಿದ್ದಾರೆ. ಅಕ್ಷರ ದಾಸೋಹ ಕೈಪಿಡಿಯಲ್ಲಿ ಕೆಲಸದ ಅವಧಿಯನ್ನು 4 ಗಂಟೆಯಿಂದ 6 ಗಂಟೆಗೆ ಬದಲಾಯಿಸಬೇಕು. ಜೊತೆಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು’ ಎಂದು ಆಗ್ರಹಿಸಿದರು.

‘ಈ ಹಿಂದೆ ಅನೇಕ ಹೋರಾಟಗಳನ್ನು ಮಾಡಿದಾಗ ಶಾಲಾ ಶಿಕ್ಷಣ ಇಲಾಖೆ ಆಯುಕ್ತರು, ಮಧ್ಯಾಹ್ನ ಬಿಸಿಯೂಟದ ನಿರ್ದೇಶಕರು ಸಂಘಟನಾ ಮುಖಂಡರೊಂದಿಗೆ ಸಭೆ ನಡೆಸಿದ್ದು ಮತ್ತು ಶಿಕ್ಷಣ ಸಚಿವರು ಕೂಡ ನಮ್ಮ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ಶೀಘ್ರದಲ್ಲಿ ಕ್ರಮಕೈಗೊಳ್ಳುವ ಕುರಿತು ಲಿಖಿತವಾಗಿ ಪತ್ರ ಕೊಟ್ಟಿದ್ದಾರೆ. ಆದರೆ, ಇಲ್ಲಿಯವರೆಗೂ ಇತ್ಯರ್ಥವಾಗಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ADVERTISEMENT

‘ಸಾದಿಲ್ವಾರು ಜಂಟಿ ಖಾತೆ ಜವಾಬ್ದಾರಿಯನ್ನು ಮುಖ್ಯ ಅಡುಗೆ ನೌಕರರಿಂದ ಎಸ್‌ಡಿಎಂಸಿಗೆ ವರ್ಗಾವಣೆ ಮಾಡಿರುವುದನ್ನು ವಾಪಸ್‌ ಪಡೆಯಬೇಕು. ಬಜೆಟ್‌ನಲ್ಲಿ ಹೆಚ್ಚಳ ಮಾಡಿದ ₹1 ಸಾವಿರ ವೇತನವನ್ನು 2023ರ ಜನವರಿಯಿಂದ ಅನ್ವಯಿಸಿ ಜಾರಿ ಮಾಡಬೇಕು’ ಎಂದರು.

ಸಮಿತಿ ಜಿಲ್ಲಾ ಘಟಕದ ಸಂಚಾಲಕ ಮರೆಪ್ಪ ಮೇತ್ರೆ, ಪ್ರಮುಖರಾದ ಉದಯಕುಮಾರ ಸಾಗರ, ಮುಕ್ತಾ ಸಿ.ಚಂದಾ, ಸುನಿತಾ ಎಂ.ಕುಂಬಾರ, ಮಹಾದೇವಿ ನಿಂಬಾಳ, ಕಲ್ಪನಾ, ಜ್ಯೋತಿ, ಸಂಪ‍ತ್‌ಕುಮಾರಿ, ಸುವರ್ಣಾ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.