ADVERTISEMENT

ಕಲಬುರಗಿ: ಬೆಳೆ ಸಮೀಕ್ಷೆ ಕಾರ್ಯ ಆರಂಭ

​ಪ್ರಜಾವಾಣಿ ವಾರ್ತೆ
Published 16 ಜುಲೈ 2024, 4:43 IST
Last Updated 16 ಜುಲೈ 2024, 4:43 IST
ಕಲಬುರಗಿ ತಾಲ್ಲೂಕಿನ ಹೊಲವೊಂದರಲ್ಲಿ ರೈತ ಮಹಿಳೆಯೊಬ್ಬರ ಬೆಳೆ ವಿವರವನ್ನು ಮೊಬೈಲ್‌ ಆ್ಯಪ್‌ನಲ್ಲಿ ದಾಖಲಿಸಲಾಯಿತು
ಕಲಬುರಗಿ ತಾಲ್ಲೂಕಿನ ಹೊಲವೊಂದರಲ್ಲಿ ರೈತ ಮಹಿಳೆಯೊಬ್ಬರ ಬೆಳೆ ವಿವರವನ್ನು ಮೊಬೈಲ್‌ ಆ್ಯಪ್‌ನಲ್ಲಿ ದಾಖಲಿಸಲಾಯಿತು   

ಕಲಬುರಗಿ: ಪ್ರಸಕ್ತ 2024-25ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯವು ಆರಂಭವಾಗಿದೆ. ಸರ್ಕಾರದ ಆದೇಶದನ್ವಯ ಈ ಬಾರಿಯ ಬೆಳೆ ಸಮೀಕ್ಷೆ ಕಾರ್ಯವನ್ನು ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆಯ ವಿವರವನ್ನು ಮೊಬೈಲ್‌ ಮೂಲಕ ಸ್ವಯಂ ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಕಲಬುರಗಿ ಮತ್ತು ಕಮಲಾಪುರ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

‘ಮುಂಗಾರು ರೈತರ ಬೆಳೆ ಸಮೀಕ್ಷೆ ಆಪ್–2024’ ಎಂಬ ಮೊಬೈಲ್ ಆ್ಯಪ್‌ಅನ್ನು ಗೂಗಲ್ ಪ್ಲೇ-ಸ್ಟೋರ್‌ನಿಂದ ಡೌನ್‌ಲೋಡ್ ಮಾಡಿಕೊಂಡು ರೈತರ ಆಧಾರ್ ಕಾರ್ಡ್‌ ಮೊಬೈಲ್ ಆ್ಯಪ್‌ನಲ್ಲಿ ಸ್ಕ್ಯಾನ್‌ ಮಾಡಿಕೊಳ್ಳಬೇಕು. ತಮ್ಮ ಮೊಬೈಲ್ ಸಂಖ್ಯೆ ಮತ್ತು ಒಟಿಪಿ ನಮೂದಿಸಿ ಸಕ್ರಿಯಗೊಳಿಸಿಕೊಂಡು ನಿಗದಿತ ಅವಧಿಯೊಳಗೆ ಬೆಳೆ ವಿವರ ದಾಖಲಿಸಬೇಕು ಎಂದು ಸಲಹೆ ನೀಡಿದ್ದಾರೆ.

ಈ ಬೆಳೆ ಸಮೀಕ್ಷೆಯ ದತ್ತಾಂಶವನ್ನು ಸರ್ಕಾರದ ವಿವಿಧ ಯೋಜನೆಗಳಲ್ಲಿ ಉಪಯೋಗಿಸಲಾಗುತ್ತಿದ್ದು, ಅದರಲ್ಲಿ ಮುಖ್ಯವಾಗಿ ಬೆಳೆ ಹಾನಿ ಪರಿಹಾರ, ಬೆಳೆ ವಿಮೆ, ಪಹಣಿಯಲ್ಲಿ ಬೆಳೆ ನಮೂದು, ಬೆಂಬಲ ಬೆಲೆಯಲ್ಲಿ ಬೆಳೆ ಖರೀದಿ ಹಾಗೂ ಕೃಷಿ, ತೋಟಗಾರಿಕೆ, ರೇಷ್ಮೆ, ಮೀನುಗಾರಿಕೆ ಮತ್ತು ಪಶು ಸಂಗೋಪನೆ ಇಲಾಖೆಗಳ ಸವಲತ್ತುಗಳನ್ನು ಪಡೆಯಲು ಅವಶ್ಯವಿರುತ್ತದೆ.

ADVERTISEMENT

ಎಲ್ಲಾ ರೈತರು ಬೆಳೆ ಸಮೀಕ್ಷೆಯಲ್ಲಿ ಪಾಲ್ಗೊಳ್ಳಬೇಕು. ಹೆಚ್ಚಿನ ಮಾಹಿತಿಗೆ ಕೃಷಿ, ಕಂದಾಯ, ತೋಟಗಾರಿಕೆ ಅಧಿಕಾರಿಗಳು ಹಾಗೂ ಖಾಸಗಿ ನಿವಾಸಿಗಳನ್ನು ಸಂಪರ್ಕಿಸಬೇಕೆಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.