ADVERTISEMENT

ಕಲಬುರಗಿ: ಹೆಸರು ಕಾಳು ಖರೀದಿಗೆ ನಿರ್ಧಾರ

​ಪ್ರಜಾವಾಣಿ ವಾರ್ತೆ
Published 27 ಆಗಸ್ಟ್ 2024, 4:15 IST
Last Updated 27 ಆಗಸ್ಟ್ 2024, 4:15 IST
ಕಲಬುರಗಿಯಲ್ಲಿ ಸೋಮವಾರ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅಧ್ಯಕ್ಷತೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರು ಮತ್ತು ಸೂರ್ಯಕಾಂತಿ ಖರೀದಿಗೆ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆ ನಡೆಯಿತು
ಕಲಬುರಗಿಯಲ್ಲಿ ಸೋಮವಾರ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅಧ್ಯಕ್ಷತೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರು ಮತ್ತು ಸೂರ್ಯಕಾಂತಿ ಖರೀದಿಗೆ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆ ನಡೆಯಿತು   

ಕಲಬುರಗಿ: ಪ್ರಸಕ್ತ ಸಾಲಿನ ಬೆಂಬಲ ಬೆಲೆ ಯೋಜನೆಯಡಿ ಹೆಸರು ಮತ್ತು ಸೂರ್ಯಕಾಂತಿ ಕೃಷಿ ಉತ್ಪನ್ನ ಖರೀದಿಗೆ ಸರ್ಕಾರ ಆದೇಶಿಸಿರುವುದರಿಂದ ಜಿಲ್ಲೆಯಾದ್ಯಂತ ಹೆಸರು ಕಾಳು ಖರೀದಿಗೆ ನೋಂದಣಿ ಆರಂಭಿಸಲು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ.

ಜಿಲ್ಲೆಯಲ್ಲಿ ಸೂರ್ಯಕಾಂತಿ ಬೆಳೆ ಮಾರುಕಟ್ಟೆಗೆ ಇನ್ನೂ ಬಂದಿಲ್ಲ. ಹೀಗಾಗಿ ಸದ್ಯಕ್ಕೆ ಸೂರ್ಯಕಾಂತಿ ಖರೀದಿ ಮಾಡುತ್ತಿಲ್ಲ. ಒಂದೊಮ್ಮೆ ಮಾರುಕಟ್ಟೆಗೆ ಸೂರ್ಯಕಾಂತಿ ಪ್ರವೇಶಿಸಿದಲ್ಲಿ ಅದನ್ನು ಖರೀದಿಸಲು ಸಭೆಯು ತೀರ್ಮಾನಿಸಿತು.

ಹೆಸರು ಕಾಳು ಖರೀದಿಗೆ ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿಯನ್ನು ಕಲಬುರಗಿ ಜಿಲ್ಲೆಗೆ ನೋಡಲ್ ಏಜೆನ್ಸಿಯನ್ನಾಗಿ ನೇಮಿಸಿದ್ದು, ಜಿಲ್ಲೆಯಲ್ಲಿ ಈ ಹಿಂದೆ ಪರಿಣತಿ ಹೊಂದಿದ 162 ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು ಹಾಗೂ ರೈತ ಉತ್ಪಾದಕ ಸಂಘಗಳನ್ನು ಗುರುತಿಸಿದ್ದು, ಇಲ್ಲಿ ರೈತರ ನೋಂದಣಿ ಕಾರ್ಯ ನಡೆಯಲಿದೆ.

ADVERTISEMENT

‘ಹೆಸರು ಕಾಳು ಖರೀದಿಗೆ ಆ.26ರಿಂದ ಸೆ.9ರವರೆಗೆ ನೋಂದಣಿ ನಡೆಯಲಿದ್ದು, ಆಗಸ್ಟ್ 28ರಿಂದ ಖರೀದಿ ಪ್ರಕ್ರಿಯೆ ನಡೆಯಲಿದೆ. ಜಿಲ್ಲೆಯ ರೈತರು ಇದರ ಲಾಭ ಪಡೆಯಬೇಕು’ ಎಂದು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.

ಸಭೆಯಲ್ಲಿ ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್, ತೋಟಗಾರಿಕೆ ಉಪನಿರ್ದೆಶಕ ಸಂತೋಷ ಇನಾಮದಾರ, ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿ ಸಹಾಯಕ ನಿರ್ದೇಶಕ ವಿಶಾಲ, ಎಪಿಎಂಸಿ ಜಂಟಿ ನಿರ್ದೇಶಕ ಅಲ್ಲಾಭಕ್ಷ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.