ADVERTISEMENT

ಕಲಬುರಗಿ: ಕೇಂದ್ರದ ವಿರುದ್ಧ ರಾಜ್ಯ ದಲಿತ ಸಂಘರ್ಷ ಸಮಿತಿ ಅರೆ ಬೆತ್ತಲೆ ಮೆರವಣಿಗೆ

​ಪ್ರಜಾವಾಣಿ ವಾರ್ತೆ
Published 6 ನವೆಂಬರ್ 2024, 13:25 IST
Last Updated 6 ನವೆಂಬರ್ 2024, 13:25 IST
ಕಲಬುರಗಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಬುಧವಾರ ರಾಜ್ಯ ದಲಿತ ಸಂಘರ್ಷ ಸಮಿತಿ ಮುಖಂಡರು ಅರೆಬೆತ್ತಲೆ ಪ್ರತಿಭಟನಾ ಮೆರವಣಿಗೆ ನಡೆಸಿದರು
ಕಲಬುರಗಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಬುಧವಾರ ರಾಜ್ಯ ದಲಿತ ಸಂಘರ್ಷ ಸಮಿತಿ ಮುಖಂಡರು ಅರೆಬೆತ್ತಲೆ ಪ್ರತಿಭಟನಾ ಮೆರವಣಿಗೆ ನಡೆಸಿದರು   

ಕಲಬುರಗಿ: ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರವು ಸಾಂವಿಧಾನಿಕ ಸಂಸ್ಥೆಗಳಾದ ಇಡಿ, ಐಟಿ, ರಾಜಭವನಗಳನ್ನು ರಾಜಕೀಯ ಲಾಭಕ್ಕಾಗಿ ದುರುಪಯೋಗ ಮಾಡುತ್ತಿದೆ ಎಂದು ಆರೋಪಿಸಿ ರಾಜ್ಯ ದಲಿತ ಸಂಘರ್ಷ ಸಮಿತಿ (ಡಿಎಸ್‌ಎಸ್‌) ಮುಖಂಡರು ನಗರದಲ್ಲಿ ಬುಧವಾರ ಅರೆಬೆತ್ತಲೆ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಜಗತ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಅರೆ ಬೆತ್ತಲೆ ಮೆರವಣಿಗೆಯಲ್ಲಿ ತೆರಳಿದ ಡಿಎಸ್‌ಎಸ್‌ ಮುಖಂಡರು, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಘೋಷಣೆಗಳನ್ನು ಕೂಗಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಯೊಬ್ಬರಿಗೆ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಸಂಘಟನೆ ಜಿಲ್ಲಾ ಮುಖಂಡ ಸುರೇಶ ಹಾದಿಮನಿ, ‘ಕೇಂದ್ರ ಸರ್ಕಾರವು ಇಡಿ, ಸಿಬಿಐ ದುರ್ಬಳಕೆ ಮಾಡಿಕೊಂಡು ರಾಜಕೀಯ ವಿರೋಧಿಗಳ ಮೇಲೆ ದಾಳಿ ಮಾಡಿಸುತ್ತಿದೆ. ಭ್ರಷ್ಟಾಚಾರದ ಆರೋಪಗಳ ನೆಪದಲ್ಲಿ ದೆಹಲಿಯಲ್ಲಿ ಸಿಎಂ ಆಗಿದ್ದ ಅರವಿಂದ್ ಕೇಜ್ರಿವಾಲ್ ಹಾಗೂ ಜಾರ್ಖಂಡ್‌ನ ಮಾಜಿ ಸಿಎಂ ಹೇಮಂತ್ ಸೊರೇನ್ ಅವರ ಬಂಧನದ ಹಿಂದೆ ಕೇಂದ್ರ ಸರ್ಕಾರದ ಕೈವಾಡ ಇದೆ’ ಎಂದು ಆರೋಪಿಸಿದರು.

ADVERTISEMENT

‘ಕರ್ನಾಟಕ ರಾಜ್ಯದಲ್ಲಿಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಡಾ ಹಗರಣದಲ್ಲಿ ರಾಜಕೀಯ ದುರುದ್ದೇಶದಿಂದ ಸಿಲುಕಿಸಲಾಗಿದೆ. ಸಿದ್ದರಾಮಯ್ಯ ಅವರ ಜನಪ್ರಿಯತೆ ಹಾಗೂ ಜನಪರವಾದ ಆಡಳಿತವನ್ನು ಬಿಜೆಪಿ ಹಾಗೂ ಜೆಡಿಎಸ್ ನಾಯಕರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಹೇಗಾದರು ಮಾಡಿ ಅಧಿಕಾರದಿಂದ ಕೆಳಗಿಳಿಸಿ, ಸರ್ಕಾರವನ್ನು ಉರುಳಿಸುವ ಷಡ್ಯಂತ್ರ ಮಾಡುತ್ತಿದ್ದಾರೆ’ ಎಂದು ದೂರಿದರು.

‘ರಾಜಭವನಗಳು, ರಾಜ್ಯಪಾಲರ ಅಧಿಕಾರಗಳನ್ನು ರಾಜಕೀಯ ಲಾಭಕ್ಕೆ ಬಳಕೆ ಮಾಡಲು ಒತ್ತಡ ಹೇರಲಾಗುತ್ತಿದೆ. ರಾಜಕೀಯ ಸಂಚಿಗೆ ಸಿದ್ದರಾಮಯ್ಯ ಬಲಿಯಾಗದಂತೆ ಪ್ರಜಾಪ್ರಭುತ್ವ ವಾದಿಗಳು ನೋಡಿಕೊಳ್ಳಬೇಕಾಗಿದೆ’ ಎಂದು ಹೇಳಿದರು.

ಜಾತಿ ಮತ್ತು ಧರ್ಮದ ಹೆಸರಿನಲ್ಲಿ ಜನಾಂಗೀಯ ಹತ್ಯೆ ತಡೆಯಲು ಬಿಜೆಪಿಯವರು ವಿಫಲರಾಗಿದ್ದಾರೆ. ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿದೆ. ಕೋಮುವಾದಕ್ಕೆ ಸಿದ್ದರಾಮಯ್ಯ ಅವರನ್ನು ಸಿಲುಕಿಸಲಾಗುತ್ತಿದೆ. ನಿತ್ಯ ಹಿಂದೂ, ಮುಸ್ಲಿಂ, ಮಂದಿರ, ಮಸೀದಿ, ಜಿಹಾದ್, ಬುರ್ಕಾದಂತಹ ಸಂಗತಿಗಳನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ. ಮೌಲಿಕ ಅಂಶಗಳನ್ನು ಗಾಳಿಗೆ ತೂರುತ್ತಿದ್ದಾರೆ ಎಂದು ಪ್ರತಿಭಟನಕಾರರು ಆರೋಪಿಸಿದರು.

ಪ್ರತಿಭಟನೆಯಲ್ಲಿ ಮುಖಂಡರಾದ ಪವನ ವಳಕೇರಿ, ಬಿ.ಸಿ.ವಾಲಿ, ಎಚ್.ಶಂಕರ, ರೇವಣಸಿದ್ದಪ್ಪ ಜಾಲಿ, ಮಹಾದೇವ ತರನಳ್ಳಿ, ಮಹಾಲಿಂಗ ಅಂಗಡಿ, ಸುಭಾಷ ಡಾಂಗೆ, ಶಿವಪುತ್ರ ರಾಗಿ ಸೇರಿ ಹಲವರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.