ADVERTISEMENT

ಆಹಾರದ ಹಕ್ಕು ಕಸಿದುಕೊಳ್ಳುವ ಹುನ್ನಾರ: ಶ್ರೀಶೈಲ ಗೂಳಿ

ಮೊಟ್ಟೆ ವಿತರಣೆ ಯೋಜನೆ ಮುಂದುವರಿಕೆಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2021, 5:54 IST
Last Updated 12 ಡಿಸೆಂಬರ್ 2021, 5:54 IST
ಶ್ರೀಶೈಲ ಗೂಳಿ
ಶ್ರೀಶೈಲ ಗೂಳಿ   

ಕಲಬುರಗಿ: ‘ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟದೊಂದಿಗೆ ಮೊಟ್ಟೆ ವಿತರಿಸುತ್ತಿರುವುದನ್ನು ವಿರೋಧಿಸುವವರು ಮಕ್ಕಳ ಆಹಾರದ ಹಕ್ಕನ್ನು ಕಸಿದುಕೊಳ್ಳುವ ಹುನ್ನಾರ ನಡೆಸಿದ್ದಾರೆ’ ಎಂದು ಜ್ಞಾನ ವಿಜ್ಞಾನ ಸಮಿತಿಯ ಪ್ರಮುಖ ಶ್ರೀಶೈಲ ಗೂಳಿ ಅಸಮಾಧಾನ ವ್ಯಕ್ತಪಡಿಸಿದರು.

ನಗರದಲ್ಲಿ ಶನಿವಾರ ವಿವಿಧ ಸಂಘಟನೆಗಳ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮಕ್ಕಳಿಗೆ ಮೊಟ್ಟೆ ಹಾಗೂ ಬಾಳೆಹಣ್ಣು ನೀಡುತ್ತಿರುವುದು ಉತ್ತಮ ಯೋಜನೆ. ಇದರಿಂದ ಅಪೌಷ್ಟಿಕ ಮಕ್ಕಳನ್ನು ರಕ್ಷಿಸಲು ಸಾಧ್ಯವಾಗುತ್ತದೆ. ಆದರೆ, ಕೆಲವು ಮಠಾಧೀಶರು ಮೊಟ್ಟೆ ವಿತರಣೆಗೆ ವಿರೋಧ ವ್ಯಕ್ತಪಡಿಸುತ್ತಿರುವುದು ಸರಿಯಲ್ಲ’ ಎಂದು ಹೇಳಿದರು.

‘ಪ್ರಜ್ಞಾ ಕಾನೂನು ಸಲಹಾ ಸಮಿತಿ’ಯ ಅಧ್ಯಕ್ಷೆ ಡಾ.ಮೀನಾಕ್ಷಿ ಬಾಳಿ ಮಾತನಾಡಿ, ಅಲ್ಲಮಪ್ರಭು, ಬಸವಣ್ಣನಂತಹ ಶ್ರೇಷ್ಠ ಮಹಾತ್ಮರು ಎಲ್ಲಿಯೂ ಮಾಂಸಹಾರ ಸೇವನೆಯನ್ನು ವಿರೋಧಿಸಿಲ್ಲ. ಆದರೆ, ಅವರ ಅನುಯಾಯಿಗಳು ಮೊಟ್ಟೆ ವಿತರಣೆ ವಿರೋಧಿಸುತ್ತಿರುವುದು ಸರಿಯಾದ ಧೋರಣೆಯಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ADVERTISEMENT

‘ಕೆಲ ಮಕ್ಕಳಿಗೆ ಮೊಟ್ಟೆ, ಕೆಲ ಮಕ್ಕಳಿಗೆ ಬಾಳೆಹಣ್ಣು ವಿತರಿಸುವುದರಿಂದ ತಾರತಮ್ಯ ಮಾಡಿದಂತಾಗುತ್ತದೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗುತ್ತದೆ’ ಎಂಬ ಮಾತುಗಳಲ್ಲಿ ಸತ್ಯಾಂಶ ಇಲ್ಲ. ಸರ್ಕಾರದ ಮೇಲೆ ಎಷ್ಟೇ ಒತ್ತಡ ಬಂದರೂ ಈ ಯೋಜನೆಯನ್ನು ನಿಲ್ಲಿಸಬಾರದು’ ಎಂದು ಆಗ್ರಹಿಸಿದರು.

‘ಸಮುದಾಯ ಕಲಬುರಗಿ’ ಸಂಘಟನೆಯ ಅಧ್ಯಕ್ಷ ಪ್ರಭು ಖಾನಾಪುರೆ ಮಾತನಾಡಿ, ಕಲ್ಯಾಣ ಕರ್ನಾಟಕದಲ್ಲಿ ಬಡತನ ಹಾಗೂ ಅಪೌಷ್ಟಿಕತೆಯಿಂದ ಬಳಲುವವರ ಸಂಖ್ಯೆ ಹೆಚ್ಚಾಗಿದೆ. ಬಡತನ ಕಾರಣದಿಂದ ಮಕ್ಕಳು ಶಾಲೆಗೆ ಬರುತ್ತಿಲ್ಲ. ಮೊಟ್ಟೆ ವಿತರಣೆ ನಂತರ ವಿದ್ಯಾರ್ಥಿಗಳ ಹಾಜರಾತಿ ಪ್ರಮಾಣ ಹೆಚ್ಚಳವಾಗಿದೆ. ಹೀಗಾಗಿ ಈ ಯೋಜನೆಗೆ ವಿರೋಧ ವ್ಯಕ್ತಪಡಿಸುವುದು ಸರಿಯಲ್ಲ’ ಎಂದು ಹೇಳಿದರು.

ಚಿಂತಕ ಆರ್‌.ಕೆ.ಹುಡುಗಿ, ಜನವಾದಿ ಮಹಿಳಾ ಸಂಘಟನೆಯ ಜಗದೇವಿ ನೂಲಕರ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.