ADVERTISEMENT

‘ಸಮಾನ ಕೆಲಸಕ್ಕೆ ಸಮಾನ ವೇತನ ನೀಡಿ’

ವಸತಿ ನಿಲಯಗಳ ದಿನಗೂಲಿ, ಕನಿಷ್ಠ ವೇತನ ನೌಕರರ ಸಂಘದಿಂದ ಧರಣಿ

​ಪ್ರಜಾವಾಣಿ ವಾರ್ತೆ
Published 13 ಆಗಸ್ಟ್ 2024, 16:02 IST
Last Updated 13 ಆಗಸ್ಟ್ 2024, 16:02 IST
ಕಲಬುರಗಿಯ ಸಮಾಜ ಕಲ್ಯಾಣ ಇಲಾಖೆ ಜಿಲ್ಲಾ ಕಚೇರಿ ಎದುರು ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳ ದಿನಗೂಲಿ, ಕನಿಷ್ಠ ವೇತನ ನೌಕರರ ಸಂಘದಿಂದ ಮಂಗಳವಾರ ಧರಣಿ ಸತ್ಯಾಗ್ರಹ ನಡೆಸಲಾಯಿತು
ಕಲಬುರಗಿಯ ಸಮಾಜ ಕಲ್ಯಾಣ ಇಲಾಖೆ ಜಿಲ್ಲಾ ಕಚೇರಿ ಎದುರು ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳ ದಿನಗೂಲಿ, ಕನಿಷ್ಠ ವೇತನ ನೌಕರರ ಸಂಘದಿಂದ ಮಂಗಳವಾರ ಧರಣಿ ಸತ್ಯಾಗ್ರಹ ನಡೆಸಲಾಯಿತು   

ಕಲಬುರಗಿ: ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳಲ್ಲಿ ಕನಿಷ್ಠ ವೇತನಕ್ಕೆ ಕೆಲಸ ಮಾಡುವವರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು ಎಂದು ಆಗ್ರಹಿಸಿ ನಗರದ ಸಮಾಜ ಕಲ್ಯಾಣ ಇಲಾಖೆ ಜಿಲ್ಲಾ ಕಚೇರಿ ಎದುರು ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳ ದಿನಗೂಲಿ, ಕನಿಷ್ಠ ವೇತನ ನೌಕರರ ಸಂಘದಿಂದ ಮಂಗಳವಾರ ಧರಣಿ ಸತ್ಯಾಗ್ರಹ ನಡೆಸಲಾಯಿತು.

‘ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳಲ್ಲಿ ಅಡುಗೆಯವರು, ಅಡುಗೆ ಸಹಾಯಕರು ಮತ್ತು ಕಾವಲುಗಾರರಾಗಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸಲಾಗುತ್ತಿದೆ. ಕಳೆದ ಆರು ತಿಂಗಳಿಂದ ಯಾವುದೇ ಸಿಬ್ಬಂದಿಗೆ ವೇತನವಾಗಿಲ್ಲ. ಇದರಿಂದ ನಮ್ಮ ಕುಟುಂಬಗಳು ಆರ್ಥಿಕ ತೊಂದರೆಯಲ್ಲಿ ಸಿಲುಕಿಕೊಂಡಿವೆ ಎಂದು ಸಿಬ್ಬಂದಿ ಅಸಮಾಧಾನ ವ್ಯಕ್ತಪಡಿಸಿದರು.

‘ದಿನಗೂಲಿ ಕಾರ್ಮಿಕರಿಗೆ ಕಾರ್ಮಿಕ ಇಲಾಖೆಯ 2009ರ ಆದೇಶದಂತೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವಂತೆ ನಿರ್ದೇಶಿಸಿ ಆದೇಶಿಸಲಾಗಿದೆ. ಇದಕ್ಕೆ ಸಮಾಜ ಕಲ್ಯಾಣ ಇಲಾಖೆ ಆಯುಕ್ತರು ಕೂಡ 2009ರಲ್ಲಿ ಮೇಲಿನಂತೆ ವೇತನ ನೀಡಬೇಕು. ನೀಡದಿದ್ದಲ್ಲಿ ಸಂಬಂಧಿಸಿದ ಅಧಿಕಾರಿಗಳೇ ಹೊಣೆ ಎಂದು ಆದೇಶ ನೀಡಿದ್ದರು. ಆದರೆ, ಇಲ್ಲಿವರೆಗೂ ಸಂಬಂಧಿಸಿದ ಅಧಿಕಾರಿಗಳು ಈ ಬಗ್ಗೆ ನಿರ್ಲಕ್ಷ್ಯ ಮುಂದುವರಿಸಿದ್ದಾರೆ’ ಎಂದು ಆರೋಪಿಸಿದರು.

ADVERTISEMENT

ಆ.24ರ ಒಳಗಾಗಿ ನಮ್ಮ ಬೇಡಿಕೆ ಈಡೇರಿಸಬೇಕು. ಇಲ್ಲವಾದರೆ ಕಲಬುರಗಿಗೆ ಆಗಮಿಸುತ್ತಿರುವ ಮುಖ್ಯಮಂತ್ರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಬೇಕಾಗುತ್ತದೆ’ ಎಂದು ಎಚ್ಚರಿಸಿದರು.

ಧರಣಿ ಸತ್ಯಾಗ್ರಹದ ನಂತರ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರ ಮೂಲಕ ಮುಖ್ಯಮಂತ್ರಿಗೆ ಮನವಿಪತ್ರ ಸಲ್ಲಿಸಲಾಯಿತು.

ಈ ವೇಳೆ ಸಂಘದ ಮುಖಂಡರಾದ ಚಂದ್ರಶೇಖರ ಎ. ಕೋಳಿಗೇರಿ, ದಶರಥ ಕಲಗುರ್ತಿ, ಮಹೇಶ, ಮಲ್ಲಿಕಾರ್ಜುನ, ಬಾಬು, ಖಾಜಾಪಾಶಾ, ಶಶಿಕಾಂತ, ಸುಜಾತಾ, ರಾಜಶ್ರೀ, ಶೋಭಾ ಸೇರಿ ಹಲವು ದಿನಗೂಲಿ ನೌಕರರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.