ಕಲಬುರಗಿ: ‘ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಕೇಂದ್ರ ಸರ್ಕಾರ ಶೇ 10ರಷ್ಟು ಮೀಸಲಾತಿ ಘೋಷಿಸಿದೆ. ರಾಜ್ಯ ಸರ್ಕಾರ ಅದಕ್ಕೆ ಬೇಕಾದ ಸಾಂವಿಧಾನಿಕ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಶೀಘ್ರ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಬೇಕು’ ಎಂದು ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಒತ್ತಾಯಿಸಿದರು.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಆರ್ಥಿಕವಾಗಿ ಹಿಂದುಳಿದವರಲ್ಲಿ ಪ್ರತಿಭೆ ಇದ್ದರೂ ಶಿಕ್ಷಣ ಸೇರಿದಂತೆ ಇನ್ನಿತರ ಕ್ಷೇತ್ರಗಳಲ್ಲಿ ಸಾಧನೆ ಮಾಡಲು ತೊಡಕಾಗಿದೆ. ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಸಲ್ಲಬೇಕಾದ ನ್ಯಾಯವನ್ನು ಒದಗಿಸಿಕೊಡಲು ಸರ್ಕಾರ ಮುಂದಾಗಬೇಕು’ ಎಂದು ಮನವಿ ಮಾಡಿದರು.
ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ‘ಯಾವುದೂ ವಿಪರೀತಕ್ಕೆ ಹೋಗಬಾರದು. ಸಮಾಜದಲ್ಲಿ ಭಿನ್ನಾಭಿಪ್ರಾಯಗಳು ಸಹಜ. ಅದನ್ನು ಪರಿಹರಿಸಿಕೊಂಡು ಮುನ್ನಡೆಯಬೇಕು. ಇದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಅಂತಿಮ ತೀರ್ಪು ಬರಬೇಕಿದೆ. ಅದನ್ನು ಧಿಕ್ಕರಿಸಬಾರದು’ ಎಂದರು.
‘ನ್ಯಾಯಾಲಯದ ತೀರ್ಪು ಸ್ವೀಕರಿಸದಿದ್ದರೆ ಗೊಂದಲ ನಿವಾರಣೆ ಆಗುವುದಿಲ್ಲ. ಸಮಾಜದಲ್ಲಿ ನೆಮ್ಮದಿ ಹಾಳಾಗುತ್ತದೆ. ವಸ್ತ್ರ ಸಂಹಿತೆಗೆ ಸಂಬಂಧಿಸಿದಂತೆ ನ್ಯಾಯಾಲಯ ಮಧ್ಯಂತರ ಆದೇಶ ನೀಡಿದೆ. ಅಂತಿಮ ಆದೇಶ ಬರುವವರೆಗೆ ಎಲ್ಲರೂ ಸಂಯಮದಿಂದ ನಡೆದುಕೊಳ್ಳಬೇಕು’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.