ಕಲಬುರಗಿ: ‘ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು’ ಎಂದು ಒತ್ತಾಯಿಸಿ ಯುವಜನ ಹೋರಾಟ ಸಮಿತಿ (ಎಐಯುವೈಎಸ್‌ಸಿ) ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಮನವಿ ಸಲ್ಲಿಸಿದರು.
ದೇಶದಲ್ಲಿ ನಿರುದ್ಯೋಗ ಪ್ರಮಾಣ ಹೆಚ್ಚುತ್ತಿದೆ. ವರ್ಷಕ್ಕೆ 10 ಲಕ್ಷ ಹುದ್ದೆ ಭರ್ತಿ ಮಾಡುತ್ತೇವೆ ಎನ್ನುವ ಪ್ರಧಾನಿಗಳ ಭರವಸೆ ಈಡೇರಿಲ್ಲ. ಉದ್ಯೋಗ ಖಾತ್ರಿ ಯೋಜನೆಯ ಅನುದಾನವೂ ಕಡಿಮೆಯಾಗಿದೆ. ಎಲ್ಲ ಇಲಾಖೆಗಳಲ್ಲಿಯೂ ಗುತ್ತಿಗೆ ಆಧಾರದಲ್ಲಿ ನೇಮಕಾತಿಗಳು ನಡೆಯುತ್ತಿವೆ. ಇದರಿಂದ ಯುವಜನರಿಗೆ ತೊಂದರೆಯಾಗುತ್ತಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ರಾಜ್ಯದಲ್ಲಿ 2.52 ಲಕ್ಷ ಹುದ್ದೆಗಳು ಖಾಲಿ ಇವೆ. ಇವುಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿದೆ. ಈ ಮೂಲಕ ಕಾಯಂ ಉದ್ಯೋಗದ ಪರಿಕಲ್ಪನೆ ನಾಶ ಮಾಡಲಾಗುತ್ತಿದೆ. ಪದವಿ ಮುಗಿಸಿದವರು ಮೂರು ವರ್ಷ ಕಾದರೂ ಉದ್ಯೋಗ ಸಿಗುತ್ತಿಲ್ಲ. ನಿರುದ್ಯೋಗಿಗಳಿಗೆ ಒಂದು ಬಾರಿ ಮಾತ್ರ ₹2,000 ನೀಡುವುದಾಗಿ ಮುಖ್ಯಮಂತ್ರಿ ಘೋಷಣೆ ಮಾಡುವ ಮೂಲಕ ಯುವಜನರನ್ನು ಅವಮಾನಿಸಿದ್ದಾರೆ ಎಂದಿದ್ದಾರೆ.
ನಿರುದ್ಯೋಗ ತೊಡೆದು ಹಾಕಲು ಒತ್ತಾಯಿಸಿ ಯುವಜನ ಹೋರಾಟ ಸಮಿತಿ ವತಿಯಿಂದ ಪ್ರತಿಭಟನಾ ಸಪ್ತಾಹ ಮಾಡಲಾಗುತ್ತಿದೆ.
ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು. ಗುತ್ತಿಗೆ ಹಾಗೂ ಹೊರಗುತ್ತಿಗೆ ನೇಮಕಾತಿಯನ್ನು ಕೈಬಿಡಬೇಕು ಎಂದು ಆಗ್ರಹಿಸಲಾಯಿತು.
ಸಮಿತಿ ಕಾರ್ಯದರ್ಶಿ ಸಿದ್ದಲಿಂಗ ಬಾಗೇವಾಡಿ, ಜಿಲ್ಲಾ ಸಮಿತಿ ಅಧ್ಯಕ್ಷ ಜಗನ್ನಾಥ ಎಸ್.ಎಚ್., ಸದಸ್ಯರಾದ ಗೌತಮ್ ಪರತೂರಕರ್, ರಮೇಶ ದೆವಕರ್, ಪುಟ್ಟರಾಜ ಲಿಂಗಶೆಟ್ಟಿ, ದತ್ತು ಹುಡೇಕರ್ ಹಾಗೂ ಸತೀಶ ಪಟ್ಟಣ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.