ADVERTISEMENT

ವಾಡಿ | ಅಕ್ರಮ ಮದ್ಯ ಮಾರಾಟ: ಕ್ರಮಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 9 ಜುಲೈ 2024, 16:00 IST
Last Updated 9 ಜುಲೈ 2024, 16:00 IST

ವಾಡಿ: ‘ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಮದ್ಯ ಮಾರಾಟ ಅಕ್ರಮವಾಗಿ ನಡೆಯುತ್ತಿದ್ದು ಅಧಿಕಾರಿಗಳು ಕಣ್ಣು ಮುಚ್ಚಿ ಕುಳಿತಿದ್ದಾರೆ. ತಪ್ಪಿತಸ್ಥರ ವಿರುದ್ದ ಕೂಡಲೇ ಕ್ರಮ ತೆಗೆದುಕೊಳ್ಳಬೇಕು ಎಂದು ದಲಿತ ಸಂಘರ್ಷ ಸಮಿತಿಯ (ಬಿ. ಕೃಷ್ಣಪ್ಪ ಬಣ) ಜಿಲ್ಲಾ ಸಂಘಟನಾ ಸಂಚಾಲಕ ಸತೀಶ ಭಟ್ಟರ್ಕಿ ಆಗ್ರಹಿಸಿದ್ದಾರೆ.

ಈ ಕುರಿತು ಜಿಲ್ಲಾಧಿಕಾರಿಗೆ ಈಚೆಗೆ ದೂರು ನೀಡಿರುವ ಭಟ್ಟರ್ಕಿ, ‘ವೈನ್‌ಶಾಪ್ ಮತ್ತು ಬಾರ್‌ಗಳಿಂದ ಖರೀದಿಸಿ ಪಾನ್‌ಶಾಪ್ ಗಳಲ್ಲಿ ಮಾರಾಟ ಮಾಡುವ ದಂಧೆ ಎಲ್ಲಾ ಕಡೆ ವ್ಯಾಪಕವಾಗಿ ನಡೆಯುತ್ತಿದೆ. ಪಟ್ಟಣದ ಪುರಸಭೆಯ ವಿವಿಧ ಬಡಾವಣೆಗಳ ಕಿರಾಣಿ, ಪಾನ್‌ಶಾಪ್, ಜನರಲ್ ಸ್ಟೋರ್‌ಗಳಲ್ಲಿ ಮದ್ಯ ಮಾರಾಟವಾಗುತ್ತಿದೆ. ಅಲ್ಲದೆ ಎಲ್ಲಾ ಗ್ರಾಮಗಳ ಚಹಾ ಹೋಟೆಲ್‌ಗಳಲ್ಲಿ ರಾಜಾರೋಷವಾಗಿ ಮಾರಾಟ ಮಾಡಲಾಗುತ್ತಿವೆ. ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಜನರು ಕುಡಿತದ ಚಟಕ್ಕೆ ಬಲಿಯಾಗುತ್ತಿದ್ದು ಹಲವು ಕುಟುಂಬಗಳು ಬೀದಿಗೆ ಬಂದಿವೆ. ಕೌಟುಂಬಿಕ ಹಾಗೂ ಸಾಮಾಜಿಕ ಕಲಹಗಳು ಹೆಚ್ಚಾಗಿ ಅಶಾಂತಿ ಮೂಡುತ್ತಿದೆ’ ಎಂದಿದ್ದಾರೆ.

‘ಕಾನೂನು ಬಾಹಿರವಾಗಿ ಮದ್ಯ ಮಾರಾಟದಲ್ಲಿ ತೊಡಗಿದವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕಾದ ಅಬಕಾರಿ ಇಲಾಖೆ ಅಧಿಕಾರಿಗಳು ಮೌನ ವಹಿಸಿದ್ದು ಅವ್ಯವಹಾರಕ್ಕೆ ಅವರೇ ಸಾಥ್ ನೀಡುತ್ತಿದ್ದಾರೆ. ಜಿಲ್ಲಾಡಳಿತ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಬೇಕು. ಹಳ್ಳಿಗಳಿಗೆ ಮದ್ಯ ಸರಬರಾಜು ಮಾಡುತ್ತಿರುವ ಬಾರ್ ಮತ್ತು ವೈನ್‌ಶಾಪ್ ವಿರುದ್ಧ ಕ್ರಮ ಕೈಗೊಂಡು ಪರವಾನಿಗೆ ರದ್ದುಪಡಿಸಬೇಕು’ ಎಂದು ಒತ್ತಾಯಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.