ADVERTISEMENT

ಕಲಬುರಗಿಯಲ್ಲಿ ನಡೆಯಲಿರುವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಣಯ: ಪ್ರಿಯಾಂಕ್

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2024, 8:01 IST
Last Updated 16 ಸೆಪ್ಟೆಂಬರ್ 2024, 8:01 IST
<div class="paragraphs"><p>ಸಚಿವರಾದ ಪ್ರಿಯಾಂಕ್ ಖರ್ಗೆ, ಡಾ. ಶರಣಪ್ರಕಾಶ್ ಪಾಟೀಲ ಜಂಟಿ ಪತ್ರಿಕಾಗೋಷ್ಠಿ </p><p></p></div>

ಸಚಿವರಾದ ಪ್ರಿಯಾಂಕ್ ಖರ್ಗೆ, ಡಾ. ಶರಣಪ್ರಕಾಶ್ ಪಾಟೀಲ ಜಂಟಿ ಪತ್ರಿಕಾಗೋಷ್ಠಿ

   

ಕಲಬುರಗಿ: ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳ ಭರ್ತಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಇಲಾಖೆ, ಐಟಿ–ಬಿಟಿ, ಶಿಕ್ಷಣ ಇಲಾಖೆ, ನೀರಾವರಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಹಲವು ಪ್ರಸ್ತಾವನೆಗಳ ಬಗ್ಗೆ ಇದೇ 17ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

ADVERTISEMENT

ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಯಾಗಬೇಕು ಎನ್ನುವುದು ನಮ್ಮ ಸರ್ಕಾರದ ಆಶಯ. ಅದಕ್ಕಾಗಿಯೇ 10 ವರ್ಷಗಳ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆಸಲು ತೀರ್ಮಾನಿಸಿದ್ದಾರೆ. ಸಂಪುಟ ಸಭೆಯಲ್ಲಿ ರಾಜ್ಯಮಟ್ಟದಲ್ಲಿ ಆರ್ಥಿಕ ಇಲಾಖೆಯ ಮುಂದೆ ಇರುವ ಪ್ರಸ್ತಾವಗಳಿಗೆ ಒಪ್ಪಿಗೆ ಸಿಗಲಿದೆ. ಅದರಲ್ಲೂ ಮುಖ್ಯವಾಗಿ ಕಲ್ಯಾಣ ಕರ್ನಾಟಕ ವ್ಯಾಪ್ತಿಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ ಪ್ರಸ್ತಾವಗಳು ಚರ್ಚೆಗೆ ಬರಲಿವೆ. ಜಲಸಂಪನ್ಮೂಲ ಸಚಿವರೂ ಆದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸಲು ಅಮೆರಿಕ ಪ್ರವಾಸವನ್ನು ಮೊಟಕುಗೊಳಿಸಿ ವಾಪಸಾಗುತ್ತಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರು ಗುಜರಾತ್ ಪ್ರವಾಸದಲ್ಲಿರುವುದರಿಂದ ಮುಖ್ಯಮಂತ್ರಿಗಳ ಒಪ್ಪಿಗೆ ಪಡೆದು ಸಂಪುಟ ಸಭೆಗೆ ಹಾಜರಾಗುತ್ತಿಲ್ಲ’ ಎಂದು ತಿಳಿಸಿದರು.

'ಪ್ರಧಾನಿಗೆ ಮುನಿರತ್ನ ಪ್ರಕರಣದ ಅರಿವಿಲ್ಲವೇ?’

ದೇಶದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಜ್ಯದ ಗಣೇಶ ವಿಸರ್ಜನೆಯಲ್ಲಿ ನಡೆದ ಗಲಭೆಯ ಬಗ್ಗೆ ಮಾತನಾಡಲು ಸಮಯವಿದೆ. ಆದರೆ, ಅವರದೇ ಪಕ್ಷದ ಶಾಸಕ ಮುನಿರತ್ನ ಮಹಿಳೆಯರ ಬಗ್ಗೆ ದಲಿತ ಸಮುದಾಯದ ವ್ಯಕ್ತಿಯ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದು ಅರಿವಿಲ್ಲವೇ‌? ಆ ಬಗ್ಗೆ ಏಕೆ ಮೌನವಾಗಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದರು.

ಪ್ರಧಾನಿ ಮಾತನಾಡುವುದೇ ಆದರೆ ಮೊದಲು ಬಿ.ಎಸ್‌. ಯಡಿಯೂರಪ್ಪ ವಿರುದ್ಧ ದಾಖಲಾದ ಪೋಕ್ಸೊ ಪ್ರಕರಣ, ವಿಜಯೇಂದ್ರ ವಿರುದ್ಧ ದಾಖಲಾದ ಪ್ರಕರಣಗಳ ಬಗ್ಗೆ ಮಾತನಾಡಲಿ ಎಂದು ಸವಾಲು ಹಾಕಿದರು.

ರಾಹುಲ್ ಗಾಂಧಿ ಅವರ ಮೀಸಲಾತಿ ಕುರಿತ ಹೇಳಿಕೆಯನ್ನು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಟೀಕಿಸಿರುವ ಕುರಿತು ಪ್ರತಿಕ್ರಿಯಿಸಿದ ಪ್ರಿಯಾಂಕ್, ‘ಮೀಸಲಾತಿಯನ್ನು ರದ್ದು ಮಾಡಬೇಕು ಎಂದು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ ರಾಮಾ ಜೋಯಿಸ್ ಯಾವ ಪಕ್ಷದವರು. ತಾವು ಅಧಿಕಾರಕ್ಕೆ ಬರುವುದೇ ಮೀಸಲಾತಿ ರದ್ದುಗೊಳಿಸಲು ಎಂದು ಹೇಳಿಕೆ ನೀಡಿದ ಅನಂತ ಕುಮಾರ ಹೆಗಡೆ ಯಾವ ಪಕ್ಷದ ಸಂಸದರಾಗಿದ್ದರು’ ಎಂದು ಪ್ರಶ್ನಿಸಿದರು.

ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ ಮಾತನಾಡಿ, ‘ಹಿಂದೆ ಕಾಂಗ್ರೆಸ್ ಸರ್ಕಾರ ಇದ್ದಾಗಲೂ ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಇದ್ದ 30 ಸಾವಿರ ಹುದ್ದೆಗಳನ್ನು ಭರ್ತಿ ಮಾಡಿದ್ದೆವು. ಈಗಲೂ ಮುಂದಿನ ಒಂದೂವರೆ ವರ್ಷದೊಳಗಾಗಿ ಈ ಭಾಗದ 15 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ಸಿದ್ಧತೆ ನಡೆಸಲಾಗಿದ್ದು, ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ನೀಡುವಂತೆ ತಿಳಿಸಲಾಗಿದೆ. ನಂತರ ಇನ್ನೂ 25 ಸಾವಿರ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುವುದು. ಮತ್ತೆ 6500 ಶಿಕ್ಷಕರ ನೇಮಕಾತಿಗೆ ಶೀಘ್ರ ಅಧಿಸೂಚನೆ ಹೊರಡಿಸಲಾಗುವುದು’ ಎಂದರು.

ವಿಧಾನಪರಿಷತ್ ಸದಸ್ಯ ಜಗದೇವ ಗುತ್ತೇದಾರ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂಖಾನ್, ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಗೋಷ್ಠಿಯಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.