ಕಲಬುರಗಿ: ಕಾಂಗ್ರೆಸ್‌ನ ಹಿರಿಯ ಮುಖಂಡ, ಮಾಜಿ ಸಂಸದ ಇಕ್ಬಾಲ್ ಅಹಮದ್ ಸರಡಗಿ ಅವರು ಮಂಗಳವಾರ ತಡರಾತ್ರಿ ನಿಧನರಾದರು. ಅವರ ನಿಧನಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ, ಸಚಿವರಾದ ದಿನೇಶ್ ಗುಂಡೂರಾವ್, ಈಶ್ವರ ಖಂಡ್ರೆ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.
ಇಕ್ಬಾಲ್ ಅಹಮದ್ ಸರಡಗಿ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕಾಗಿ ಐವಾನ್ ಇ ಶಾಹಿ ಅತಿಥಿಗೃಹ ಸಮೀಪದ ಅವರ ಮನೆಯ ಆವರಣದಲ್ಲಿ ಇರಿಸಲಾಗಿದೆ. ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ, ಕಲಬುರಗಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ, ಶಾಸಕ ಅಲ್ಲಮಪ್ರಭು ಪಾಟೀಲ, ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ ಸೇರಿದಂತೆ ವಿವಿಧ ಗಣ್ಯರು ಇಕ್ಬಾಲ್ ಅಹಮದ್ ಅವರ ಅಂತಿಮ ದರ್ಶನ ಪಡೆದರು. ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದರು.
ನನ್ನ ಆತ್ಮೀಯ ಗೆಳೆಯ, ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಕಲಬುರಗಿ ಮಾಜಿ ಸಂಸದ ಇಕ್ಬಾಲ್ ಅಹಮದ್ ಸರಡಗಿ ಅವರ ನಿಧನದಿಂದ ತೀವ್ರ ನೋವಾಗಿದೆ. ಶಿಕ್ಷಣತಜ್ಞ ಮತ್ತು ಪರೋಪಕಾರಿಯಾಗಿದ್ದು, ಕಲಬುರಗಿ ಜನರ ಏಳಿಗೆಗಾಗಿ ಅವಿರತವಾಗಿ ಶ್ರಮಿಸಿದ್ದರು. ಕೌನ್ಸಿಲರ್ ಆಗಿದ್ದ ಆರಂಭಿಕ ದಿನಗಳಿಂದ ಸಂಸದರಾದ ಸಮಯದವರೆಗೆ ಮತ್ತು ಆ ನಂತರವೂ ನಾವು ರಾಜಕೀಯದಲ್ಲಿ ಒಟ್ಟಿಗೆ ಪ್ರಯಾಣಿಸಿದ್ದೇವೆ. ಅವರ ಅಗಲಿಕೆ ವೈಯಕ್ತಿಕವಾಗಿ ನನಗೆ ದೊಡ್ಡ ನಷ್ಟವಾಗಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಅವರು ‘ಎಕ್ಸ್’ನಲ್ಲಿ ಬರೆದುಕೊಂಡಿದ್ದಾರೆ.
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಸರಡಗಿ ಅವರು ಎರಡು ಬಾರಿ ಸಂಸದರಾಗಿ ಹಾಗೂ ಒಂದು ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಅವರ ಆಪ್ತರಾಗಿ ಗುರುತಿಸಿಕೊಂಡಿದ್ದರು. ಸ್ನೇಹಜೀವಿ, ಸರಳ, ಸಜ್ಜನಿಕೆಯ ವ್ಯಕ್ತಿತ್ವ ಹೊಂದಿದ್ದರು. ಅವರಲ್ಲಿದ್ದ ಜನಪರ ಕಾಳಜಿ ಅನುಕರಣೀಯ ಎಂದು ಸಿದ್ದರಾಮಯ್ಯ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.
ಸರಡಗಿ ಅವರ ನಿಧನದಿಂದ ಕಾಂಗ್ರೆಸ್ಸಿನ ನಿಷ್ಠಾವಂತ ನಾಯಕರೊಬ್ಬರನ್ನು ಕಳೆದುಕೊಂಡಂತಾಗಿದೆ. ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬಸ್ಥರು ಹಾಗೂ ಅಪಾರ ಅಭಿಮಾನಿಗಳಿಗೆ ಅವರ ಅಗಲಿಕೆಯ ನೋವು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ಮಾಜಿ ಸಂಸದರು ಹಾಗೂ ಹಿರಿಯ ನಾಯಕರಾದ ಇಕ್ಬಾಲ್ ಅಹಮದ್ ಸರಡಗಿ ಅವರು ನಿಧನರಾದ ಸುದ್ದಿ ತಿಳಿದು ಅತೀವ ದುಃಖವಾಯಿತು. ಅವರ ಅಗಲಿಕೆಯಿಂದ ರಾಜಕೀಯ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬಸ್ಥರಿಗೆ ಅವರ ಅಗಲಿಕೆಯ ನೋವು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಡಿ.ಕೆ ಶಿವಕುಮಾರ ಅವರು ‘ಎಕ್ಸ್’ನಲ್ಲಿ ಬರೆದುಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.