ಕಲಬುರಗಿ: ಶಿವಮೊಗ್ಗದ ಬಜರಂಗ ದಳ ಕಾರ್ಯಕರ್ತ ಹರ್ಷ ಕೊಲೆಯನ್ನು ಖಂಡಿಸಿ ನಗರದಲ್ಲಿ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಬುಧವಾರ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಸೂಪರ್ ಮಾರ್ಕೆಟ್‌ನ ಚೌಕದಿಂದ ಜಗತ್ ವೃತ್ತದವರೆಗೆ ಮೆರವಣಿಗೆ ನಡೆಸಿದ ಸಹಸ್ರಾರು ಕಾರ್ಯಕರ್ತರು, ‘ಕೊಲೆಗೆ ಕಾರಣರಾದವರಿಗೆ ಕಠಿಣ ಶಿಕ್ಷೆ ವಿಧಿಸಬೇಕು’ ಎಂದು ಒತ್ತಾಯಿಸಿ ಘೋಷಣೆ ಕೂಗಿದರು.
ಇದೇ ಸಂದರ್ಭದಲ್ಲಿ ಬೃಹತ್ ಗಾತ್ರದ ಭಗವಾ ಧ್ವಜವನ್ನು ಹಿಡಿದು ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿದರು. ಪ್ರತಿಭಟನೆಯಿಂದಾಗಿ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ವಾಹನ ಸಂಚಾರದಲ್ಲಿ ವ್ಯತ್ಯಯವಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ವಿಎಚ್‌ಪಿ ಮುಖಂಡ ಶೇಷಾದ್ರಿ ಕುಲಕರ್ಣಿ, ‘ರಾಜ್ಯದಲ್ಲಿ ಇತ್ತೀಚಿನ ವರ್ಷಗಳಲ್ಲಿ 22 ಹಿಂದೂ ಕಾರ್ಯಕರ್ತರ ಕೊಲೆಯಾಗಿದೆ. ರಾಜ್ಯ ಸರ್ಕಾರ ತಪ್ಪಿತಸ್ಥರನ್ನು ಶಿಕ್ಷಿಸುವಲ್ಲಿ ದಿವ್ಯ ನಿರ್ಲಕ್ಷ್ಯ ವಹಿಸಿದ್ದು ಖಂಡನೀಯ. ಅಲ್ಲದೇ, ರಾಜ್ಯದಲ್ಲಿ ಭಯೋತ್ಪಾದಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ, ಎಸ್‌ಡಿಪಿಐ, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಗಳನ್ನು ನಿಷೇಧಿಸಬೇಕು’ ಎಂದು ಒತ್ತಾಯಿಸಿದರು.
ರಾಜ್ಯ ಸರ್ಕಾರ ಕೂಡಲೇ ಮೃತ ಯುವಕನ ಕುಟುಂಬಕ್ಕೆ ₹ 25 ಲಕ್ಷ ಪರಿಹಾರ ನೀಡಬೇಕು ಎಂದರು.
ಕರ್ನಾಟಕ ನವೀಕರಿಸಬಹುದಾದ ಇಂಧನ ಮೂಲಗಳ ನಿಗಮದ (ಕ್ರೆಡೆಲ್) ಅಧ್ಯಕ್ಷ ಚಂದು ಪಾಟೀಲ, ಮುಖಂಡರಾದ ವಿಎಚ್‌ಪಿ ಕಲಬುರಗಿ ಮಹಾನಗರ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀಮಂತ ನವಲದಿ, ಶಿವರಾಜ ಸಂಗೊಳಗಿ, ಬಿಜೆಪಿ ಮಹಾನಗರ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದಾಜಿ ಪಾಟೀಲ, ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಇತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.