ಚಿತ್ತಾಪುರ (ಕಲಬುರಗಿ ಜಿಲ್ಲೆ): ಪಟ್ಟಣದಲ್ಲಿ ಆಯೋಜಿಸಿದ್ದ ನಮೋ ಭಾರತ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಹೊರಟಿದ್ದ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಅವರಿಗೆ ಕಲಬುರಗಿ ಜಿಲ್ಲಾ ಗಡಿ ಪ್ರವೇಶ ತಡೆದದ್ದನ್ನು ಪ್ರಶ್ನಿಸಿ ಕೋರ್ಟ್ ಮೊರೆ ಹೋಗಲಾಗಿದೆ ಎಂದು ಬಿಜೆಪಿ ಮುಖಂಡರು ತಿಳಿಸಿದ್ದಾರೆ.
'ನಮೋ ಭಾರತ ಕಾರ್ಯಕ್ರಮದ ಮುಖ್ಯ ಭಾಷಣಕಾರರಾಗಿ ಸೂಲಿಬೆಲೆ ಅವರು ಬೀದರ್‌ನ ಭಾಲ್ಕಿಯಿಂದ ಚಿತ್ತಾಪುರಕ್ಕೆ ಬರುತ್ತಿದ್ದರು. ಬುಧವಾರ ತಡರಾತ್ರಿ ಕಮಲಾಪುರ ತಾಲ್ಲೂಕಿನ ಕಿಣ್ಣಿ ಸಡಕ್ ಬಳಿ ಕಲಬುರಗಿ ಗಡಿ ಪ್ರವೇಶಿಸದಂತೆ ಪೊಲೀಸರು ತಡೆಯೊಡ್ಡಿದರು. ನಿಷೇಧದ ಕ್ರಮವನ್ನು ಪ್ರಶ್ನಿಸಿ ಕೋರ್ಟ್ ಮೊರೆ ಹೋಗಿದ್ದೇವೆ. ಅಧಿಕಾರಿಗಳ ಆದೇಶಕ್ಕೆ ತಡೆಯಾಜ್ಞೆ ಸಿಗುವ ನಿರೀಕ್ಷೆ ಇದೆ. ವಿಜೃಂಭಣೆಯಿಂದ ಕಾರ್ಯಕ್ರಮ ಮಾಡುತ್ತೇವೆ' ಎಂದು ಬಿಜೆಪಿ ಮಂಡಲ ಅಧ್ಯಕ್ಷ ರವೀಂದ್ರ ಸಜ್ಜನಶೆಟ್ಟಿ 'ಪ್ರಜಾವಾಣಿ'ಗೆ ಪ್ರತಿಕ್ರಿಯಿಸಿದರು.
ಪೊಲೀಸ್ ಬಂದೋಬಸ್ತ್: 'ನಮೋ ಭಾರತ ಕಾರ್ಯಕ್ರಮ ಆಯೋಜನೆಗೆ ತಾಲ್ಲೂಕು ಆಡಳಿತದ ಅನುಮತಿ ನಿರಾಕರಣೆ ಮತ್ತು ಸೂಲಿಬೆಲೆ ಚಕ್ರವರ್ತಿ ಅವರ ಗಡಿ ಪ್ರವೇಶ ನಿಷೇಧ ಆದೇಶ, ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ತಾಲ್ಲೂಕಿನಲ್ಲಿ ಸೂಕ್ತ ಬಿಗಿ ಪೋಲಿಸ್ ಬಂದೋಬಸ್ತ್ ಮಾಡಲಾಗಿದೆ' ಎಂದು ಶಹಾಬಾದ್ ಡಿವೈಎಸ್ಪಿ ಶಂಕರಗೌಡ ಪಾಟೀಲ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.