ಕಲಬುರಗಿ: ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸದಂತೆ ಒತ್ತಾಯಿಸಿ ಕರೆ ನೀಡಿದ್ದ ಕರ್ನಾಟಕ ಬಂದ್ ಅಂಗವಾಗಿ ನಗರದಲ್ಲಿ ವಿವಿಧ ಕನ್ನಡಪರ ಸಂಘಟನೆಗಳು ಸರಣಿ ಪ್ರತಿಭಟನೆ ನಡೆಸಿದವು. ನಗರದ ಸೇಡಂ ರಸ್ತೆಯಲ್ಲಿರುವ ವಿಮಾನ ನಿಲ್ದಾಣದ ಒಳಗೆ ತೆರಳಲು ಯತ್ನಿಸಿದ ‘ನಮ್ಮ ಕರ್ನಾಟಕ ಸೇನೆ‘ಯ ಒಂಬತ್ತು ಜನ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.
ಬೆಳಿಗ್ಗೆ 9ಕ್ಕೆ ವಿಮಾನ ನಿಲ್ದಾಣಕ್ಕೆ ತೆರಳಿದ ‘ನಮ್ಮ ಕರ್ನಾಟಕ ಸೇನೆ‘ಯ ರಾಜ್ಯ ಪ್ರಧಾನ ಸಂಚಾಲಕ ಭೀಮಣ್ಣ ಶಾಖಾಪುರ ನೇತೃತ್ವದ ಕಾರ್ಯಕರ್ತರ ತಂಡ ವಿಮಾನ ನಿಲ್ದಾಣಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ ಎಂದು ಪೊಲೀಸರಿಗೆ ತಿಳಿಸಿದರು. ಇದಕ್ಕೆ ಕರ್ನಾಟಕ ಕೈಗಾರಿಕಾ ಭದ್ರತಾ ಪಡೆಯ ಅಧಿಕಾರಿಗಳು ಹಾಗೂ ವಿಶ್ವವಿದ್ಯಾಲಯ ಠಾಣೆ ಪೊಲೀಸರು ಅವಕಾಶ ನೀಡಲಿಲ್ಲ. ಇದರಿಂದಾಗಿ ಕೆಲ ಹೊತ್ತು ನಿಲ್ದಾಣದ ಎದುರು ಕುಳಿತು ಪ್ರತಿಭಟನೆ ನಡೆಸಿದರು.
ನಂತರ ಪೊಲೀಸರು ಅವರನ್ನು ವಶಕ್ಕೆ ಪಡೆದು ವಿಶ್ವವಿದ್ಯಾಲಯ ಪೊಲೀಸ್ ಠಾಣೆಗೆ ಕರೆದೊಯ್ದರು.
ಕಲಬುರಗಿಯ ಮಿನಿ ವಿಧಾನಸೌಧದ ಆವರಣದಲ್ಲಿರುವ ಸಂಸದರ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಜಯ ಕರ್ನಾಟಕ ಸಂಘಟನೆಯ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.
ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆಯ ಕಲ್ಯಾಣ ಕರ್ನಾಟಕ ವಿಭಾಗೀಯ ಅಧ್ಯಕ್ಷ ಮಲ್ಲಿಕಾರ್ಜುನ ಸಾರವಾಡ, ‘ಕಾವೇರಿ ಜಲಾನಯನ ಪ್ರದೇಶದಲ್ಲಿ ನೀರಿನ ಕೊರತೆಯಿಂದಾಗಿ ಕಾವೇರಿಯಲ್ಲಿ ನೀರು ಖಾಲಿ ಆಗಿರುವ ಬಗ್ಗೆ ಕಾವೇರಿ ನೀರು ನಿರ್ವಹಣಾ ಸಮಿತಿಗೆ ಮನವರಿಕೆ ಮಾಡಿಕೊಡಬೇಕು. ಇದರಲ್ಲಿ ರಾಜ್ಯದಿಂದ ಆಯ್ಕೆಯಾದ ಎಲ್ಲ ಸಂಸದರ ಜವಾಬ್ದಾರಿಯೂ ಹೆಚ್ಚಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಮಧ್ಯಸ್ಥಿತಿಗೆ ಒತ್ತಾಯಿಸಬೇಕು’ ಎಂದು ಒತ್ತಾಯಿಸಿದರು.
ಕರ್ನಾಟಕ ರಕ್ಷಣಾ ವೇದಿಕೆ (ಎಚ್. ಶಿವರಾಮೇಗೌಡ ಬಣ), ಕಲ್ಯಾಣ ಕರ್ನಾಟಕ ಕನ್ನಡಪರ ಸಂಘಟನೆಗಳ ಒಕ್ಕೂಟ ಸೇರಿದಂತೆ ವಿವಿಧ ಸಂಘಟನೆಗಳ ಕಾರ್ಯಕರ್ತರು ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ರಾಜ್ಯಮಟ್ಟದ ಸಂಘಟನೆಗಳ ಒಕ್ಕೂಟದ ಸದಸ್ಯರು ಮುಖಂಡ ಮಂಜುನಾಥ ನಾಲವಾರಕರ್ ನೇತೃತ್ವದಲ್ಲಿ ತಲೆಯ ಮೇಲೆ ಖಾಲಿ ಕೊಡ ಹೊತ್ತು ಅರೆಬೆತ್ತಲೆಯಾಗಿ ಪ್ರತಿಭಟಿಸಿದರು.
ಕೆಲ ಸಂಘಟನೆಗಳ ಮುಖಂಡರು ತೆಂಗಿನ ಚಿಪ್ಪು ಹಿಡಿದುಕೊಂಡು ಪ್ರತಿಭಟನೆ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.