ADVERTISEMENT

ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಅ.16ರಂದು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ

​ಪ್ರಜಾವಾಣಿ ವಾರ್ತೆ
Published 29 ಸೆಪ್ಟೆಂಬರ್ 2024, 15:18 IST
Last Updated 29 ಸೆಪ್ಟೆಂಬರ್ 2024, 15:18 IST

ಕಲಬುರಗಿ: ‘ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಅಕ್ಟೋಬರ್ 16ರಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲಾಗುವುದು’ ಎಂದು ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಹನುಮಂತಪ್ಪ ತಿಳಿಸಿದರು.

ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸುಪ್ರೀಂ ಕೋರ್ಟ್ ಪರಿಶಿಷ್ಟ ಜಾತಿ ಹಾಗೂ ಪಂಗಡಗಳಲ್ಲಿ ಉಪ ವರ್ಗೀಕರಣಕ್ಕೆ ಅನುಮತಿ ನೀಡಿದೆ. ಒಳ ಮೀಸಲಾತಿ ಜಾರಿ ವಿಚಾರ ರಾಜ್ಯ ಸರ್ಕಾರಗಳ ವಿವೇಚನೆಗೆ ಬಿಟ್ಟಿದ್ದು ಎಂದು ತಿಳಿಸಿದೆ. ಆದ್ದರಿಂದ ಹಲವು ರಾಜ್ಯಗಳು ಒಳ ಮೀಸಲಾತಿ ಅನುಷ್ಠಾನಗೊಳಿಸುತ್ತಿವೆ. ಆದರೆ ನಮ್ಮ ಸರ್ಕಾರ ಒಳ ಮೀಸಲಾತಿ ಜಾರಿಗೆ ಮೀನಮೀಷ ಎಣಿಸುತ್ತಿದೆ’ ಎಂದರು.

ತಮ್ಮದು ದಲಿತ ಪರ ಸರ್ಕಾರ ಎಂದು ಹೇಳುತ್ತಿರುವ ಸಿಎಂ ಸಿದ್ದರಾಮಯ್ಯ ಅವರು ಒಳ ಮೀಸಲಾತಿಗೆ ಸಂಬಂಧಿಸಿದ ಸುಪ್ರೀಂ ಕೋರ್ಟ್‌ ತೀರ್ಪು ಬಂದು ಎರಡು ತಿಂಗಳಾದರೂ ಅನುಷ್ಠಾನಗೊಳಿಸುವಲ್ಲಿ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಇದು ದಲಿತರ ಬಗೆಗಿನ ಅವರ ಬದ್ಧತೆ ತೋರಿಸುತ್ತದೆ ಎಂದು ಹೇಳಿದರು.

ADVERTISEMENT

ಒಳ ಮೀಸಲಾತಿ ಸಾಧಕ–ಬಾಧಕಗಳ ಕುರಿತು ತಿಳಿದುಕೊಳ್ಳಲು ಉಪ ಸಮಿತಿ ರಚನೆ ಮಾಡಲಾಗುವುದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ್ದಾರೆ. ಇದು ಖಂಡನೀಯ ಎಂದರು.

ಒಳ ಮೀಸಲಾತಿ ಜಾರಿಗೆ ರಾಜ್ಯ ಸರ್ಕಾರಕ್ಕೆ ಅಕ್ಟೋಬರ್ 16ರವರೆಗೆ ಗಡುವು ನೀಡಲಾಗಿದೆ. 16ರಂದು ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಿ ಸರ್ಕಾರದ ಗಮನ ಸೆಳೆಯಲಾಗುವುದು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ದೇವಿಂದ್ರ ನಾದ, ಈಶ್ವರಪ್ಪ, ವಿಜಯಕುಮಾರ ಅಡಕಿ ಸೇರಿ ಇತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.