ADVERTISEMENT

ಡಿ.14ರಂದು ಲೋಕ ಅದಾಲತ್

​ಪ್ರಜಾವಾಣಿ ವಾರ್ತೆ
Published 15 ನವೆಂಬರ್ 2024, 6:20 IST
Last Updated 15 ನವೆಂಬರ್ 2024, 6:20 IST
ಎಸ್‌.ನಾಗಶ್ರೀ
ಎಸ್‌.ನಾಗಶ್ರೀ   

ಕಲಬುರಗಿ: ‘ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಡಿಸೆಂಬರ್ 14ರಂದು ಜಿಲ್ಲೆಯಾದ್ಯಂತ ರಾಷ್ಟ್ರೀಯ ಲೋಕ ಅದಾಲತ್ ನಡೆಸಲಾಗುವುದು’ ಎಂದು ಜಿಲ್ಲಾ ಪ್ರಾಧಿಕಾರದ ಅಧ್ಯಕ್ಷೆ, ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶರಾದ ಎಸ್‌.ನಾಗಶ್ರೀ ತಿಳಿಸಿದರು.

‘ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ಪೈಕಿ ರಾಜಿ ಸಂಧಾನದ ಮೂಲದ ಇತ್ಯರ್ಥವಾಗುವಂತಹ ಪ್ರಕರಣಗಳನ್ನು ಜನತಾ ನ್ಯಾಯಾಲಯದಲ್ಲಿ ಉಭಯ ಪಕ್ಷಗಾರರ ಸಮ್ಮುಖದಲ್ಲಿ ಪರಿಹರಿಸಿಕೊಳ್ಳಬಹುದು. ಯಾವುದೇ ವಕೀಲರು ಇಲ್ಲದೆಯೂ ಉಭಯ ಪಕ್ಷಗಳು ಪಾಲ್ಗೊಳ್ಳಬಹುದು’ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. 

‘ಸಣ್ಣ ಪುಟ್ಟ ಪ್ರಕರಣಗಳು ರಾಜಿ ಸಂಧಾನದ ಮೂಲಕ ಇತ್ಯರ್ಥವಾದರೆ ನ್ಯಾಯಾಲಯಗಳ ಮೇಲಿನ ಹೊರೆ ಕಡಿಮೆಯಾಗುತ್ತದೆ. ಇತರೆ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥ ಮಾಡಲು ಸಹಕಾರಿಯಾಗುತ್ತದೆ. ಹೀಗಾಗಿ, ಪ್ರಕರಣ ದಾಖಲಿಸಿದವರು ಮುಂದೆ ಬಂದು ವ್ಯಾಜ್ಯಗಳನ್ನು ಇತ್ಯರ್ಥ ಮಾಡಿಕೊಳ್ಳಬೇಕು’ ಎಂದರು.

ADVERTISEMENT

‘ಲೋಕ ಅದಾಲತ್‌ನಲ್ಲಿ ರಾಜಿ ಸಂಧಾನದ ಮೂಲಕ 1.09 ಲಕ್ಷ ಪ್ರಕರಣಗಳನ್ನು ಇತ್ಯರ್ಥ ಮಾಡಲಾಗಿದೆ. ಇದರಿಂದ ಬಡವರು, ಗ್ರಾಮೀಣ ಭಾಗದವರಿಗೆ ಸಾಕಷ್ಟು ಅನುಕೂಲವಾಗಿದೆ. ಸಹೋದರರು, ನೆರೆ ಹೊರೆಯವರು, ಸಂಬಂಧಿಕರು, ಕುಟುಂಬಗಳ ನಡುವಿನ ವ್ಯಾಜ್ಯಗಳನ್ನು ಸೌಹಾರ್ದಯುತವಾಗಿ ಇತ್ಯರ್ಥಗೊಂಡರೆ ಉತ್ತಮ ಬಾಂಧವ್ಯದ ಜತೆಗೆ ನೆಮ್ಮದಿ ಸಹ ಸಿಗುತ್ತದೆ’ ಎಂದು ಹೇಳಿದರು.

‘ಅದಾಲತ್‌ನಲ್ಲಿ ಸಿವಿಲ್ ದಾವೆಗಳು, ಮೋಟಾರು ವಾಹನ, ಅಪಘಾತ ಪರಿಹಾರ ಪ್ರಕರಣಗಳು, ರಾಜಿಯಾಗಬಹುದಾದ ಕ್ರಿಮಿನಲ್ ಪ್ರಕರಣಗಳು, ಭೂಸ್ವಾಧೀನ ಪರಿಹಾರ ವಸೂಲಾತಿ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕ, ವೇತನ ಭತ್ಯೆ, ಕೈಗಾರಿಕಾ ಕಾರ್ಮಿಕ ವೇತನ, ಬ್ಯಾಂಕ್‍ಗಳಿಗೆ ಸಂಬಂಧಿಸಿದ ವ್ಯಾಜ್ಯಪೂರ್ವ ಪ್ರಕರಣಗಳನ್ನು ಬಗೆಹರಿಸಿಕೊಳ್ಳಬಹುದು’ ಎಂದು ವಿವರಿಸಿದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀನಿವಾಸ ನವಲೆ ಮಾತನಾಡಿ, ‘ಲೋಕ ಅದಾಲತ್‌ ಕುರಿತು ವ್ಯಾಪಕ ಪ್ರಚಾರ ಮಾಡಿ, ಪ್ರತಿಯೊಬ್ಬರಿಗೂ ಅದರ ಮಹತ್ವವನ್ನು ತಿಳಿಸಲಾಗುತ್ತಿದೆ. ಇದಕ್ಕಾಗಿ ಅಂಗನವಾಡಿ ಕಾರ್ಯಕರ್ತೆಯರು, ಪಿಡಿಒಗಳ ನೆರವು ಪಡೆಯಲಾಗುತ್ತಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.