ಕಲಬುರಗಿ: ‘ನಾರಾಯಣ ಗುರು ಅಭಿವೃದ್ಧಿ ನಿಗಮಕ್ಕೆ ಕಲ್ಯಾಣ ಕರ್ನಾಟಕ ಭಾಗದವರನ್ನು ಅಧ್ಯಕ್ಷರನ್ನಾಗಿ ನೇಮಿಸಬೇಕು’ ಎಂದು ಕಲ್ಯಾಣ ಕರ್ನಾಟಕ ಈಡಿಗ ಹೋರಾಟ ಸಮಿತಿ ಅಧ್ಯಕ್ಷ ಸತೀಶ್ ಗುತ್ತೇದಾರ ಮತ್ತು ಪ್ರಧಾನ ಕಾರ್ಯದರ್ಶಿ ವೆಂಕಟೇಶ ಕಡೇಚೂರ್ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.
ರಾಜ್ಯದಲ್ಲಿ ಈ ಹಿಂದಿನ ಸರ್ಕಾರ ನಿಗಮ ಘೋಷಣೆ ಮಾಡಿ ಕುಲಶಾಸ್ತ್ರೀಯ ಅಧ್ಯಯನ ನಡೆಸಲು ಆದೇಶ ನೀಡಿತ್ತು. ಆದರೆ ಅದಕ್ಕೆ ಅನುದಾನ ನೀಡಲಿಲ್ಲ. ಕಾಂಗ್ರೆಸ್ ಸರ್ಕಾರವೂ ಬಜೆಟ್‌ನಲ್ಲಿ ಅನುದಾನ ಘೋಷಿಸಿಲ್ಲ. ಇದರಿಂದ ನಿಗಮ ಇದ್ದರೂ ಇಲ್ಲದಂತಾಗಿದೆ. ಸಮಾಜದ ಅಭಿವೃದ್ಧಿ ಕುಂಠಿತಗೊಂಡಿದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಸುಮಾರು 70 ಲಕ್ಷದಷ್ಟಿರುವ ಈ ಸಮುದಾಯದ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಅಭಿವೃದ್ಧಿಗೆ ಸರ್ಕಾರ ಒತ್ತು ನೀಡಬೇಕಾಗಿದೆ. ಇದಕ್ಕಾಗಿ ತಕ್ಷಣ ನಿಗಮಕ್ಕೆ ₹500 ಕೋಟಿ ಆರ್ಥಿಕ ನೆರವು ನೀಡಬೇಕು. ನಿಗಮದ ಅಧ್ಯಕ್ಷರ ನೇಮಕಾತಿ ವೇಳೆ ಉತ್ತರ ಕರ್ನಾಟಕಕ್ಕೆ ಅದರಲ್ಲೂ ಮುಖ್ಯವಾಗಿ ಕಲ್ಯಾಣ ಕರ್ನಾಟಕ ಭಾಗದವರನ್ನು ಪರಿಗಣಿಸಬೇಕು. ನಿರ್ದೇಶಕರ ಆಯ್ಕೆ ಸಂದರ್ಭದಲ್ಲಿ ಸಮುದಾಯದಲ್ಲಿರುವ ಶಿಕ್ಷಣ, ಆರ್ಥಿಕ ಹಾಗೂ ಸಾಮಾಜಿಕ ತಜ್ಞರನ್ನು ಪರಿಗಣಿಸಬೇಕು ಎಂದಿದ್ದಾರೆ.
ಸಮುದಾಯದ ಆಶೋತ್ತರಗಳಿಗೆ ಸ್ಪಂದಿಸಲು ಅನುಕೂಲವಾಗುವಂತೆ ನಿಗಮ ರಚನೆಯಾದರೆ ಕುಲಕಸುಬಿನಿಂದ ವಂಚಿತರಾಗಿ ಬದುಕು ಬೀದಿ ಪಾಲಾದ ಕುಟುಂಬಗಳಿಗೆ ಶಿಕ್ಷಣ ನೀಡಿ ಆರ್ಥಿಕ ಪುನಶ್ಚೇತನ ಒದಗಿಸಲು ಸಾಧ್ಯವಾಗಲಿದೆ. ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ಕರದಾಳು ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿಪೀಠದ ಡಾ. ಪ್ರಣವಾನಂದ ಸ್ವಾಮೀಜಿ ಸರ್ಕಾರದ ಸಂಪುಟ ದರ್ಜೆ ಸಚಿವರು, ಉಪಮುಖ್ಯಮಂತ್ರಿ ಹಾಗೂ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿ ನಿಗಮಕ್ಕೆ ಅಧ್ಯಕ್ಷ, ನಿರ್ದೇಶಕರನ್ನು ನೇಮಿಸುವಂತೆ ಒತ್ತಾಯಿಸಿದ್ದಾರೆ. ಅದನ್ನು ಅನುಷ್ಠಾನಕ್ಕೆ ತರಲು ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.