ಕಲಬುರಗಿ: ನಾರಾಯಣಪುರದ ಬಸವಸಾಗರ ಜಲಾಶಯದ ಎಡದಂಡೆ ಕಾಲುವೆಯ ಮೇಲಿರುವ ಕಲಬುರಗಿ ಜಿಲ್ಲೆಯ ಜೇವರ್ಗಿ, ಯಾದಗಿರಿ ಜಿಲ್ಲೆಯ ಶಹಾಪುರ ವ್ಯಾಪ್ತಿಯ ರೈತರು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ರೈತರ ಬೆಳೆಗಳಿಗೆ ನೀರಿನ ಅಗತ್ಯತೆ ವಿಚಾರವಾಗಿ ಸಚಿವ ಶರಣಬಸಪ್ಪ ದರ್ಶನಾಪುರ, ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್ ಸಿಂಗ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ರೈತರ ನೆರವಿಗೆ ಬರುವಂತೆ ಕೋರಿದರು.
ಕಾಲುವೆ ವ್ಯಾಪ್ತಿಯ ರೈತರು ಎದುರಿಸುತ್ತಿರುವ ನೀರಾವರಿ ಸಮಸ್ಯೆಯ ಕುರಿತು ಹಾಗೂ ರೈತರ ಧರಣಿ ಕುರಿತು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿಕೊಟ್ಟರು.
ರೈತರು ತುಂಬಾ ಸಂಕಷ್ಟದಲ್ಲಿದ್ದು, ಆದಷ್ಟು ಬೇಗ ನಾರಾಯಣಪುರ ಅಣೆಕಟ್ಟಿನಿಂದ ಕಾಲುವೆಗಳಿಗೆ ನೀರು ಬಿಡುವಂತೆ ಕ್ರಮ ಕೈಗೊಳ್ಳಬೇಕೆಂಬ ಮನವಿ ಪತ್ರವನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಯಿತು.
‘ಮುಖ್ಯಮಂತ್ರಿಗಳು ನಮ್ಮ ರೈತರ ಪರವಾಗಿರುವಂತಹ ಬೇಡಿಕೆಗೆ ಧನಾತ್ಮಕವಾಗಿ ಸ್ಪಂದಿಸಿದ್ದಾರೆ’ ಎಂದು ಅಜಯ್ ಸಿಂಗ್ ಹೇಳಿದ್ದಾರೆ.
ಕೆಬಿಜೆಎನ್ಎಲ್ ವ್ಯವಸ್ಥಾಪಕ ನಿರ್ದೇಶಕ ಮೋಹನ್ ಕೆ. ಈ ಸಂದರ್ಭದಲ್ಲಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.