ಕಲಬುರಗಿ: ಬರಗಾಲ ಸಂಕಷ್ಟ ಎದರಿಸುತ್ತಿರುವ ಜಿಲ್ಲೆಯ ರೈತರಿಗೆ ರಾಷ್ಟ್ರೀಕೃತ ಬ್ಯಾಂಕ್‌ಗಳು ಸಾಲ ವಸೂಲಾತಿ ನೋಟಿಸ್ ಕೊಡುವುದನ್ನು ನಿಲ್ಲಿಸಬೇಕು. ಈ ಕುರಿತಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತ ರೈತರ ನೆರವಿಗೆ ಬರಬೇಕು ಎಂದು ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘ ಮಂಗಳವಾರ ನಗರದ ಲೀಡ್ ಬ್ಯಾಂಕ್ ಎದುರು ಪ್ರತಿಭಟನೆ ನಡೆಸಿತು.
ಸಾಲದ ನೆಪದಲ್ಲಿ ರಾಷ್ಟ್ರೀಕೃತ ಬ್ಯಾಂಕ್‌ಗಳು ರೈತರ ಖಾತೆಗಳನ್ನು ಸ್ಥಗಿತ ಮಾಡುತ್ತಿವೆ. ಸರ್ಕಾರ ಮಧ್ಯ ಪ್ರವೇಶಿಸಿ ನಿರ್ದೇಶನ ಕೊಡುವ ಜೊತೆಗೆ ರೈತರ ವಿರೋಧಿ ನೀತಿ ಅನುಸರಿಸುತ್ತಿರುವ ಬ್ಯಾಂಕ್‌ಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.
ರಾಷ್ಟ್ರೀಕೃತ ಬ್ಯಾಂಕುಗಳು ರೈತರಿಗೆ ಸುಲಭವಾಗಿ ಹಣಕಾಸಿನ ವ್ಯವಹಾರ ಮಾಡಲು ಅನುಕೂಲ ಮಾಡಿಕೊಡಬೇಕು. ಸ್ಥಗಿತವಾದ ಖಾತೆಗಳನ್ನು ತೆರೆಯಬೆಕು. ರೈತರಿಗೆ ಸರಳವಾಗಿ ಬೆಳೆ ಸಾಲ, ಮಾರ್ಟಿಗೇಜ್ ಸಾಲ, ಭೂ ಅಭಿವೃದ್ಧಿ ಸಾಲ, ಉದ್ಯೋಗಿನಿ ಸಾಲ ಮತ್ತು ಗ್ರಾಮೀಣ ಪ್ರದೇಶದ ಮಕ್ಕಳಿಗೆ ಶೈಕ್ಷಣಿಕ ಸಾಲ ಕೊಡಬೇಕು ಎಂದು ಒತ್ತಾಯಿಸಿದರು.
ಲೀಡ್ ಬ್ಯಾಂಕ್ ವ್ಯವಸ್ಥಾಪಕರ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿಪತ್ರ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ, ಜಿಲ್ಲಾ ಖಜಾಂಚಿ ಸುಭಾಷ್ ಹೊಸಮನಿ, ಸಹ ಕಾರ್ಯದರ್ಶಿ ದಿಲೀಪ್ ನಾಗೂರೆ, ಎಂ.ಬಿ.ಸಜ್ಜನ್, ಪ್ರಕಾಶ ಜಾನೆ, ರೇವಣಸಿದ್ದಪ್ಪ ಪಾಟೀಲ್, ರಾಮಪ್ಪ ಹುರುಮುಂಜಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.