ಕಲಬುರಗಿ: ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಲ್ಲದೇ ಜೀವ ಬೆದರಿಕೆ ಹಾಕಿ ಒತ್ತಾಯಪೂರ್ವಕವಾಗಿ ಬೆಂಗಳೂರು, ಪುಣೆಗೆ ಕರೆದೊಯ್ದು ಅತ್ಯಾಚಾರ ಎಸಗಿದ ಅಪರಾಧ ಸಾಬೀತಾಗಿದ್ದರಿಂದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಡಬರಾಬಾದ್ ಕಾಲೊನಿ ನಿವಾಸಿ ಆಕಾಶ್ ಶಿವಪುತ್ರ ಪೂಜಾರಿ ಎಂಬಾತನಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ.
2021ರ ಜೂನ್ 18ರಂದು ಬಾಲಕಿಗೆ ಮದುವೆಯಾಗುವುದಾಗಿ ಪುಸಲಾಯಿಸಿ ಅತ್ಯಾಚಾರ ಎಸಗಿದ್ದ. ನಂತರ ಜುಲೈ 30ರಂದು ಕರೆ ಮಾಡಿ ಬೆಂಗಳೂರಿಗೆ ಒತ್ತಾಯಪೂರ್ವಕವಾಗಿ ಕರೆದುಕೊಂಡು ಹೋಗಿ ಅಲ್ಲಿ ಪರಿಚಯದವರ ಮನೆಯಲ್ಲಿ ಇರಿಸಿ ಅತ್ಯಾಚಾರ ಎಸಗಿದ್ದ ಎಂದು ಆತನ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ದೂರು ದಾಖಲಿಸಿಕೊಂಡಿದ್ದ ಪೊಲೀಸ್ ಇನ್‌ಸ್ಪೆಕ್ಟರ್ ದಿಲೀಪಕುಮಾರ್ ಸಾಗರ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಪೋಕ್ಸೊ ನ್ಯಾಯಾಲಯದ ನ್ಯಾಯಾಧೀಶ ಯಮನಪ್ಪ ಬಮ್ಮಣಗಿ ಅವರು ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ ₹ 51 ಸಾವಿರ ದಂಡ ವಿಧಿಸಿದ್ದಾರೆ. ದಂಡದ ಹಣವನ್ನು ಬಾಲಕಿಗೆ ನೀಡಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ಅಲ್ಲದೇ, ಆದೇಶ ಪ್ರಕಟವಾದ ಒಂದು ತಿಂಗಳಲ್ಲಿ ನೊಂದ ಬಾಲಕಿಗೆ ₹ 7 ಲಕ್ಷ ಪರಿಹಾರ ನೀಡಬೇಕು ಎಂದು ಕಾನೂನು ಸೇವಾ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿದ್ದಾರೆ.
ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಶಾಂತವೀರ ಬಿ. ತುಪ್ಪದ ವಾದ ಮಂಡಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.