ಕಲಬುರಗಿ: ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಸೆಪ್ಟೆಂಬರ್ 17ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಗರಕ್ಕೆ ಬರಲಿದ್ದು, ಇದರ ಹಿನ್ನೆಲೆಯಲ್ಲಿ ಮಂಗಳವಾರ ಪ್ರಾದೇಶಿಕ ಆಯುಕ್ತ, ಕೆಕೆಆರ್‌ಡಿಬಿ ಕಾರ್ಯದರ್ಶಿ ಕೃಷ್ಣ ಬಾಜಪೇಯಿ ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
‘ಅಂದು ಕಲಬುರಗಿ ವಿಮಾನ ನಿಲ್ದಾಣದಿಂದ ನೇರವಾಗಿ ಸರ್ದಾರ ವಲ್ಲಭ ಭಾಯ್ ಪಟೇಲ್ ವೃತ್ತಕ್ಕೆ ಬಂದು, ಪಟೇಲ್ ಅವರ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವರು. ನಂತರ ಪೊಲೀಸ್ ಪರೇಡ್ ಮೈದಾನದಲ್ಲಿ ರಾಷ್ಟ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಎನ್.ವಿ. ಮೈದಾನದಲ್ಲಿ ಆಯೋಜಿಸಲಾಗಿರುವ ’ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ’ಕ್ಕೆ ವಿದ್ಯುಕ್ತ ಚಾಲನೆ ನೀಡುವರು. ಫಲಾನುಭವಿಗಳಿಗೆ ಸೌಲಭ್ಯ ವಿತರಿಸುವರು. ಕಲ್ಯಾಣ ಕರ್ನಾಟಕದ ಅತಿದೊಡ್ಡ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ಉದ್ಘಾಟಿಸುವರು’ ಎಂದು ಕೃಷ್ಣ ಬಾಜಪೇಯಿ ತಿಳಿಸಿದರು.
ಎನ್.ವಿ. ಮೈದಾನದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಬರುವ ಕಾರಣ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ, ಆಸನದ ವ್ಯವಸ್ಥೆ ಹಾಗೂ ಬ್ಯಾರಿಕೇಡ್‌ದೊಂದಿಗೆ ಸೂಕ್ತ ಪೊಲೀಸ್ ಭದ್ರತೆ ಕಲ್ಪಿಸಬೇಕು. ಅಗ್ನಿಶಾಮಕ ವಾಹನ ಮತ್ತು ಆಂಬುಲೆನ್ಸ್ ವಾಹನಗಳು ಎನ್.ವಿ.ಮೈದಾನ ಮತ್ತು ಪರೇಡ್ ಮೈದಾನದಲ್ಲಿ ಸನ್ನದ್ಧ ಸ್ಥಿತಿಯಲ್ಲಿ ಇರಿಸಬೇಕು. ಕಾರ್ಯಕ್ರಮಕ್ಕೆ ಜಿಲ್ಲೆಯ ವಿವಿಧೆಡೆಯಿಂದ ಫಲಾನುಭವಿಗಳು, ಸಾರ್ವಜನಿಕರು ಬರಲು ಬಸ್ ವ್ಯವಸ್ಥೆ ಮಾಡಲಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಸಮನ್ವಯ ಸಾಧಿಸಬೇಕು. ವಾಹನಗಳ ಪಾರ್ಕಿಂಗ್‌ಗೆ ನಾಲ್ಕು ದಿಕ್ಕಿನಲ್ಲಿ ಅಗತ್ಯ ವ್ಯವಸ್ಥೆ ಮಾಡುವಂತೆ ಡಿಸಿಪಿ ಅಡ್ಡೂರು ಶ್ರೀನಿವಾಸಲು ಅವರಿಗೆ ಕೃಷ್ಣ ಬಾಜಪೇಯಿ ಸೂಚಿಸಿದರು.
ಅಮೃತ ಮಹೋತ್ಸವ ಅಂಗವಾಗಿ ಸೆ 15ರಂದು ಜಗತ್ ವೃತ್ತದಿಂದ ಕೇಂದ್ರ ಬಸ್ ನಿಲ್ದಾಣದವರೆಗೆ ಸಾಂಸ್ಕೃತಿಕ ಕಲಾ ತಂಡಗಳ ಭವ್ಯ ಮೆರವಣಿಗೆ ಆಯೋಜಿಸಬೇಕು. ಶಾಲಾ ಮಕ್ಕಳಿಗೆ ರಸಪ್ರಶ್ನೆ ಆಯೋಜಿಸಬೇಕು ಹಾಗೂ ಸೆ 15ರಿಂದ ಮೂರು ದಿನಗಳ ಕಾಲ ನಡೆಯುವ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ಆಯೋಜಿಸಬೇಕು. ಕಲಬುರಗಿ ಹೊರತುಪಡಿಸಿ ಬೇರೆ ತಾಲ್ಲೂಕು ಹಾಗೂ ಜಿಲ್ಲೆಗಳಿಂದ ಮಳಿಗೆ ಹಾಕಲು ಆಗಮಿಸುವ ಸಣ್ಣ ಉದ್ಯಮಿ, ಸ್ವ–ಸಹಾಯ ಸಂಘಗಳು, ಮಾರಾಟಗಾರರಿಗೆ ಅಗತ್ಯ ವಸತಿ ವ್ಯವಸ್ಥೆ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಮಾಣಿಕ ರಘೋಜಿ ಮಾತನಾಡಿ, ‘ಈಗಾಗಲೇ ಪುರುಷ ಹಾಗೂ ಮಹಿಳೆಯರಿಗೆ ವಸತಿ ವ್ಯವಸ್ಥೆ ಮಾಡಲಾಗಿದೆ’ ಎಂದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿಇಓ ಡಾ.ಗಿರೀಶ್ ಡಿ. ಬದೋಲೆ, ಮಹಾನಗರ ಪಾಲಿಕೆ ಆಯುಕ್ತ ಭುವನೇಶ ಪಾಟೀಲ, ಹೆಚ್ಚುವರಿ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ, ಕೆಕೆಆರ್‌ಡಿಬಿ ಉಪ ಕಾರ್ಯದರ್ಶಿ ಆನಂದ ಪ್ರಕಾಶ ಮೀನಾ, ಉಪವಿಭಾಗಾಧಿಕಾರಿ ಮೋನಾ ರೋತ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.