ಕಲಬುರ್ಗಿ: ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಇದ್ದಾಗ ಪ್ರವಾಹ ಸಂತ್ರಸ್ತರಿಗೆ ಎಷ್ಟರ ಮಟ್ಟಿಗೆ ಸ್ಪಂದಿಸಿದೆ ಎಂಬುದು ಜನತೆಗೆ ಗೊತ್ತಿದೆ. ಈಗ ಅವರು ವಿರೋಧ ಪಕ್ಷದಲ್ಲಿರುವ ಕಾರಣ ನಮ್ಮನ್ನು ಟೀಕಿಸುವುದು ಅನಿವಾರ್ಯ ಎಂದು ಕಂದಾಯ ಸಚಿವ ಆರ್. ಅಶೋಕ್ ತಿರುಗೇಟು ನೀಡಿದರು.
ರಾಜ್ಯ ಸರ್ಕಾರದ ಪ್ರವಾಹ ಪೀಡಿತರಿಗೆ ಪರಿಹಾರ ಬಿಡುಗಡೆ ಮಾಡುತ್ತಿಲ್ಲ ಮತ್ತು ಜನರ ನೋವಿಗೆ ಸ್ಪಂದಿಸುತ್ತಿಲ್ಲ ಎಂದು ಗುರುವಾರ ಸಿದ್ದರಾಮಯ್ಯ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯ ಸರ್ಕಾರಕ್ಕೆ ಯಾವುದೇ ರೀತಿಯ ಹಣದ ಕೊರತೆಯಿಲ್ಲ. ಶೀಘ್ರವೇ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕೋಶದ ಜೊತೆ ರಾಜ್ಯದ ಪಾಲು ಸೇರಿದಂತೆ ಪರಿಹಾರ ಬಿಡುಗಡೆ ಮಾಡಲಾಗುವುದು ಎಂದರು.
ಕಳೆದ ವರ್ಷ ಮಲೆನಾಡು ಮತ್ತು ಬೆಳಗಾವಿ ಭಾಗದಲ್ಲಿ ಭಾರಿ ಪ್ರವಾಹದಿಂದಾಗಿ ಸಂಕಷ್ಟ ಉಂಟಾಗಿತ್ತು. ಈ ಬಾರಿ ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ದೊಡ್ಡ ಪ್ರಮಾಣದಲ್ಲಿ ನೆರೆ ಉಂಟಾಗಿದೆ. ಮಹಾರಾಷ್ಟ್ರದಲ್ಲಿ ಕಳೆದ ಹಲವು ದಿನಗಳಿಂದ ಸತತ ಮಳೆಯಾಗುತ್ತಿದ್ದು , ಭೀಮಾ ಮತ್ತು ಕೃಷ್ಣಾ ನದಿಯಲ್ಲಿ ನೆರೆ ಪರಿಸ್ಥಿತಿ ಉಂಟಾಗಿದೆ ಎಂದರು.
ಕಲ್ಯಾಣ ಕರ್ನಾಟಕದ ಪ್ರವಾಹ ಪರಿಸ್ಥಿತಿಯ ವೈಮಾನಿಕ ಸಮೀಕ್ಷೆ ಮಾಡಲು ಶೀಘ್ರದಲ್ಲಿ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಲಾಗುವುದು ಎಂದರು.
ಸ್ಥಳಾಂತರ
ಕಲಬುರ್ಗಿ ತಾಲ್ಲೂಕು ಸಯ್ಯದ್ ಚಿಂಚೋಳಿ ಗ್ರಾಮದ ಸ್ಥಳಾಂತರಕ್ಕೆ ಗ್ರಾಮಸ್ಥರು ಮನವಿ ಮಾಡಿದ್ದಾರೆ. ಈ ಕಾರ್ಯಕ್ಕೆ ಈಗಾಗಲೇ 11 ಎಕರೆ ಜಮೀನು ಗುರುತಿಸಲಾಗಿದೆ. ಆದ್ಯತೆ ಮೇರೆಗೆ ಸ್ಥಳಾಂತರಿಸಲಾಗುವುದು ಎಂದರು .
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.