ಮಡಿಕೇರಿ: ದಕ್ಷಿಣ ಕನ್ನಡ ಜಿಲ್ಲೆಗೆ ಹೊಂದಿಕೊಂಡಿರುವ ಚೆಂಬು ಗ್ರಾಮದಲ್ಲಿ ಫೆ. 14ರಿಂದ ಎರಡು ದಿನಗಳ ಕಾಲ ನಡೆಯಲಿರುವ ಕೊಡಗು ಜಿಲ್ಲಾ 10ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ.
ಚೆಂಬು ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಬೃಹತ್ ವೇದಿಕೆ ನಿರ್ಮಿಸಲಾಗಿದೆ. ಚೆಂಬು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ದ್ವಾರಗಳಲ್ಲಿ ಸ್ವಾಗತ ಕಮಾನುಗಳನ್ನು ನಿರ್ಮಿಸಲಾಗಿದೆ. 1,500 ಜನರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. ಊಟೋಪಚಾರದ ವ್ಯವಸ್ಥೆಯನ್ನು ವ್ಯವಸ್ಥಿತವಾಗಿ ಮಾಡಲಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ
ಟಿ.ಪಿ. ರಮೇಶ್ ಹೇಳಿದರು.
ಬೆಳಿಗ್ಗೆ 10ಗಂಟೆಗೆ ಸಮ್ಮೇಳನಾಧ್ಯಕ್ಷಎನ್. ಮಹಾಬಲೇಶ್ವರ್ ಭಟ್ ಅವರ ಮೆರವಣಿಗೆಯೊಂದಿಗೆ ಸಮ್ಮೇಳನ ಆರಂಭಗೊಳ್ಳಲಿದೆ. 10ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವಾದ್ದರಿಂದ ದಶಕಳಶವನ್ನು ಬಳಸಲಾಗುತ್ತಿದೆ. 10 ಜನ ಸಾಧಕರಿಗೆ ಸನ್ಮಾನ ಹಾಗೂ 10 ಲೇಖಕರ ಪುಸ್ತಕಗಳನ್ನು ಕೂಡ ಬಿಡುಗಡೆ ಮಾಡಲಾಗುತ್ತಿದೆ. ‘ಹಳ್ಳಿಯ ಕಡೆಗೆ ಸಾಹಿತ್ಯದ ನಡಿಗೆ’ ಎನ್ನುವ ಘೋಷವಾಕ್ಯದಂತೆ ಸಮ್ಮೇಳನವನ್ನು ಚೆಂಬು ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದೆ. ಕನ್ನಡ ಸಾಹಿತ್ಯವನ್ನು ಹಳ್ಳಿಗರಿಗೆ ಪರಿಚಯಿಸುವುದು ಮುಖ್ಯವಾಗಿದೆ ಎಂದು ಹೇಳಿದರು.
ವೇದಿಕೆಯಲ್ಲಿ ಈ ಬಾರಿ ಹೊಸಬರಿಗೆ ಹೆಚ್ಚಿನ ಅವಕಾಶಗಳನ್ನು ನೀಡಲಾಗಿದೆ. ಇದಕ್ಕೆ ಜಿಲ್ಲೆಯ ಸಾಹಿತಿಗಳು ಸಹಕರಿಸಿದ್ದಾರೆ. ಕಾರ್ಯಕ್ರಮ ನಿರೂಪಣೆ, ವಿಷಯ ಮಂಡನೆ, ಕವಿಗೋಷ್ಠಿ, ವಿಚಾರಗೋಷ್ಠಿಯಲ್ಲಿ ಹೊಸಬರಿಗೆ ಅವಕಾಶ ನೀಡಲಾಗಿದೆ ಎಂದು ತಿಳಿಸಿದರು.
ದಕ್ಷಿಣ ಕನ್ನಡ ಜಿಲ್ಲೆಗೆ ಚೆಂಬು ಗ್ರಾಮವು ಹೊಂದಿಕೊಂಡಿರುವುದರಿಂದ ಇಲ್ಲಿನ ಜನರ ಬದುಕಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸಂಸ್ಕೃತಿಯು ಹಾಸುಹೊಕ್ಕಾಗಿದೆ. ಹೀಗಾಗಿ ಸಮ್ಮೇಳನಾಧ್ಯಕ್ಷರ ಮೆರವಣಿಗೆಯಲ್ಲಿ ಯಕ್ಷಗಾನ ಕಲಾವಿದರು, ಭೂತಾರಾಧನೆ ಕಲಾವಿದರು ಕೂಡ ಪಾಲ್ಗೊಳ್ಳಲಿದ್ದಾರೆ ಎಂದು ವಿವರಣೆ ನೀಡಿದರು.
ಸಮ್ಮೇಳನ ಆಯೋಜಿಸಲು ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಕಚೇರಿಯಿಂದ ₨ 5 ಲಕ್ಷ ಅನುದಾನ ಬಂದಿದೆ. ಇನ್ನುಳಿದಂತೆ ಸ್ಥಳೀಯ ದಾನಿಗಳಿಂದ ಹಣ ಸಂಗ್ರಹಿಸಲಾಗಿದೆ. ಅಂದಾಜು 3ರಿಂದ 4 ಸಾವಿರ ಜನರು ಸಮ್ಮೇಳನದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಅವರು ನುಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.