ADVERTISEMENT

32 ಮಂದಿಯಿಂದ ರಕ್ತದಾನ

ಕೊಡಗು ವಿಶ್ವವಿದ್ಯಾಲಯ ವ್ಯಾಪ್ತಿಯ ಎಲ್ಲ ಕಾಲೇಜುಗಳಲ್ಲಿ ಶಿಬಿರ; ಕುಲಪತಿ ಭರವಸೆ

​ಪ್ರಜಾವಾಣಿ ವಾರ್ತೆ
Published 15 ಜೂನ್ 2024, 7:19 IST
Last Updated 15 ಜೂನ್ 2024, 7:19 IST
ಕುಶಾಲನಗರದ ಚಿಕ್ಕ ಆಳುವಾರದ ಕೊಡಗು ವಿಶ್ವವಿದ್ಯಾಲಯದಲ್ಲಿ ಶುಕ್ರವಾರ ನಡೆದ ವಿಶ್ವ ರಕ್ತದಾನಿಗಳ ದಿನಾಚರಣೆಯಲ್ಲಿ ವಿಶ್ವವಿದ್ಯಾಲಯದ ಉಪನ್ಯಾಸಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ರಕ್ತದಾನ ಮಾಡಿದರು
ಕುಶಾಲನಗರದ ಚಿಕ್ಕ ಆಳುವಾರದ ಕೊಡಗು ವಿಶ್ವವಿದ್ಯಾಲಯದಲ್ಲಿ ಶುಕ್ರವಾರ ನಡೆದ ವಿಶ್ವ ರಕ್ತದಾನಿಗಳ ದಿನಾಚರಣೆಯಲ್ಲಿ ವಿಶ್ವವಿದ್ಯಾಲಯದ ಉಪನ್ಯಾಸಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ರಕ್ತದಾನ ಮಾಡಿದರು   

ಮಡಿಕೇರಿ: ಕುಶಾಲನಗರದ ಚಿಕ್ಕ ಅಳುವಾರದಲ್ಲಿರುವ ಕೊಡಗು ವಿಶ್ವವಿದ್ಯಾಲಯದಲ್ಲಿ ಶುಕ್ರವಾರ ನಡೆದ ವಿಶ್ವ ರಕ್ತದಾನಿಗಳ ದಿನಾಚರಣೆಯಲ್ಲಿ 32 ಮಂದಿ ರಕ್ತದಾನ ಮಾಡಿದರು.

ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‍ಷನ್ ಸೊಸೈಟಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ರಕ್ತನಿಧಿ ಕೇಂದ್ರ, ಜಿಲ್ಲಾಸ್ಪತ್ರೆ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಸೋಮವಾರಪೇಟೆ ತಾಲ್ಲೂಕು, ಕೊಡಗು ವಿಶ್ವವಿದ್ಯಾಲಯ, ಭಾರತೀಯ ರೆಡ್‍ಕ್ರಾಸ್ ಘಟಕದ ವತಿಯಿಂದ ನಡೆದ ಈ ಕಾರ್ಯಕ್ರಮವನ್ನು ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಅಶೋಕ ಆಲೂರ ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಅವರು, ‘ಮುಂಬರುವ ದಿನಗಳಲ್ಲಿ ಕೊಡಗು ವಿಶ್ವವಿದ್ಯಾಲಯಕ್ಕೆ ಒಳಪಟ್ಟ ಎಲ್ಲಾ ಕಾಲೇಜುಗಳಲ್ಲಿಯೂ ರಕ್ತದಾನ ಶಿಬಿರಗಳನ್ನು ಏರ್ಪಡಿಸಲಾಗುವುದು’ ಎಂದು ಭರವಸೆ ನೀಡಿದರು.

ADVERTISEMENT

ಈ ಕಾರ್ಯಕ್ರಮವನ್ನು 20 ವರ್ಷಗಳಿಂದ ಆಚರಿಸುತ್ತಾ ಬಂದಿದ್ದು, ನಿರಂತರವಾಗಿ ರಕ್ತದಾನ ಮಾಡಿದ ರಕ್ತದಾನಿಗಳಿಗೆ ಈ ಸಂದರ್ಭದಲ್ಲಿ ಅವರು ಧನ್ಯವಾದ ಅರ್ಪಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸತೀಶ್ ಕುಮಾರ್ ಮಾತನಾಡಿ, ‘ಇತ್ತೀಚಿನ ದಿನಗಳಲ್ಲಿ ಡೆಂಗಿ ಜ್ವರ ಇರುವ ಕಾರಣ ರಕ್ತ ಹಾಗೂ ಪ್ಲೇಟ್‍ಲೇಟ್‍ಗಳ ಅವಶ್ಯಕತೆ ತುಂಬಾ ಇದೆ. ಆದ್ದರಿಂದ ಎಲ್ಲರೂ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಬೇಕು’ ಎಂದು ಹೇಳಿದರು.

ರಕ್ತದ ಅವಶ್ಯಕತೆ ಹಾಗೂ ರಕ್ತದಾನದ ಮಹತ್ವ ಮತ್ತು ಉಪಯೋಗಗಳ ಕುರಿತು ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ.ಕರುಂಬಯ್ಯ ಅವರು ಅರಿವು ಮೂಡಿಸಿದರು.

ಕೊಡಗು ವಿಶ್ವವಿದ್ಯಾಲಯದ ಕುಲಸಚಿವ ಡಾ.ಸೀನಪ್ಪ ಮಾತನಾಡಿ, ‘ಜಿಲ್ಲೆಯಲ್ಲಿ ಯಾವುದೇ ಸಂದರ್ಭದಲ್ಲಿಯೂ ರಕ್ತದ ಕೊರತೆಯಾಗಬಾರದು. ರಕ್ತದ ಅವಶ್ಯಕತೆ ಇದ್ದಾಗ ನಾವು ಕೈಜೋಡಿಸುತ್ತೇವೆ’ ಎಂದು ತಿಳಿಸಿದರು. ಇದೇ ವೇಳೆ ಅವರು ರಕ್ತದಾನದ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿದರು.

ಜಿಲ್ಲಾ ಏಡ್ಸ್ ನಿಯಂತ್ರಣ ಅಧಿಕಾರಿ ಡಾ.ಆನಂದ್, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಕೆ.ಶಾಂತಿ, ಜಿಲ್ಲಾ ಮೇಲ್ವಿಚಾರಕರಾದ ಸುನಿತಾ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ಉಷಾ, ಕಮಲ, ಮುತ್ತಮ್ಮ, ಐಸಿಟಿಸಿ ಆಪ್ತ ಸಮಾಲೋಚಕರು, ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.

ಅತೀ ಹೆಚ್ಚು ರಕ್ತದಾನ ಮಾಡಿದ ರಕ್ತದಾನಿಗಳನ್ನು ಸನ್ಮಾನಿಸಲಾಯಿತು. ಕೊಡಗು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು, ಉಪನ್ಯಾಸಕರು, ಸಿಬ್ಬಂದಿಗಳು ರಕ್ತದಾನ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.