ನಾಪೋಕ್ಲು: ಭಾಗಮಂಡಲದಲ್ಲಿ ಮಂಗಳವಾರ ಕಾವೇರಿ ತೀರ್ಥೋದ್ಭವಕ್ಕೆ ಸಂಬಂಧಿಸಿದಂತೆ ನಡೆದ ಪೂರ್ವಾಭಾವಿ ಸಭೆಯು ಗೊಂದಲದ ಗೂಡಾಯಿತು. ಒಂದೆಡೆ ಜನಪ್ರತಿನಿಧಿಗಳ ಗೈರು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾದರೆ ಮತ್ತೊಂದೆಡೆ ಅಖಿಲ ಕೊಡವ ಸಮಾಜ, ಫೆಡರೇಷನ್ ಆಫ್ ಕೊಡವ ಸಮಾಜ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳನ್ನು ಸಭೆಗೆ ಆಹ್ವಾನಿಸದಿರುವ ಬಗ್ಗೆ ಅಸಮಾಧಾನವೂ ವ್ಯಕ್ತವಾಯಿತು. ಜಿಲ್ಲಾಡಳಿತದ ವಿರುದ್ಧ ಧಿಕ್ಕಾರ ಕೂಗಿದ ಪ್ರಸಂಗಕ್ಕೂ ಸಾಕ್ಷಿಯಾಗಿ, ಎಲ್ಲವೂ ಸರಿ ಇಲ್ಲ ಎಂಬುದು ಸಭೆಯಲ್ಲಿ ವ್ಯಕ್ತವಾಯಿತು.
ಸಾಂಪ್ರದಾಯಿಕ ಉಡುಪಿನಲ್ಲಿರುವವರಿಗೆ ಕಾವೇರಿ ಕುಂಡಿಕೆಯ ಬಳಿ ನಿಲ್ಲಲು ಅವಕಾಶ ಕಲ್ಪಿಸಬೇಕು. ಹಿಂದೆ ತಕ್ಕ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ್ದ ನಾಲ್ಕು ಕುಟುಂಬದವರಿಗೆ ಅವಕಾಶ ಕಲ್ಪಿಸಬೇಕು ಎಂಬ ಆಗ್ರಹ ಬಲವಾಗಿಯೇ ಕೇಳಿ ಬಂತು.
ಎಲ್ಲರ ಸಹಕಾರಕ್ಕೆ ಹೆಚ್ಚುವರಿ ಜಿಲ್ಲಾಧಿಕಾರಿ ಮನವಿ
ಅಕ್ಟೋಬರ್ 17 ರಂದು ನಡೆಯಲಿರುವ ತೀರ್ಥೋದ್ಭವದ ಯಶಸ್ಸಿಗೆ ಪ್ರತಿಯೊಬ್ಬರೂ ಸಹಕರಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ ಮನವಿ ಮಾಡಿದರು.
ಜಿಲ್ಲೆ ಹಾಗೂ ಹೊರ ರಾಜ್ಯದಿಂದ ಆಗಮಿಸುವ ಭಕ್ತಾದಿಗಳಿಗೆ ಅಗತ್ಯ ಭದ್ರತೆ ಹಾಗೂ ಸೂಕ್ತ ವ್ಯವಸ್ಥೆ ಕಲ್ಪಿಸಲು ಕ್ರಮ ವಹಿಸಲಾಗುವುದು. ಭಕ್ತರ ಭಾವನೆಗಳನ್ನು ಅರ್ಥ ಮಾಡಿಕೊಂಡು ತೀರ್ಥೋದ್ಭವ ಸಂದರ್ಭದಲ್ಲಿ ಬೇಕಾದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಗುಂಡಿ ಬಿದ್ದಿರುವ ರಸ್ತೆಗಳನ್ನು ಸರಿಪಡಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು. ಪೂಜಾ ಪದ್ದತಿಯಲ್ಲಿ ಯಾವುದೇ ಗೊಂದಲವಿಲ್ಲದೆ ಈ ಹಿಂದೆ ಆಚರಿಸಿಕೊಂಡು ಬಂದ ರೀತಿಯಲ್ಲಿ ಈ ಬಾರಿಯೂ ನಡೆಸಿಕೊಂಡು ಹೋಗಲಾಗುತ್ತದೆ ಎಂದೂ ಹೇಳಿದರು.
ಡಿವೈಎಸ್‌ಪಿ ಗಜೇಂದ್ರಪ್ರಸಾದ್ ಮಾತನಾಡಿ, ಸಂಚಾರ ವ್ಯವಸ್ಥೆಗೆ ಯಾವುದೇ ರೀತಿ ಅಡಚಣೆಯಾಗದ ರೀತಿಯಲ್ಲಿ ಸೂಕ್ತ ಕ್ರಮ ವಹಿಸಲಾಗುವುದು. ವಾಹನ ನಿಲುಗಡೆ ಹಾಗೂ ಕುಂಡಿಕೆಯ ಸುತ್ತಮುತ್ತಲು ಮುಂಜಾಗ್ರತೆ ಕ್ರಮ ವಹಿಸಲಾಗುವುದು. ತೀರ್ಥೋದ್ಭವದ ಸಂದರ್ಭದಲ್ಲಿ ಸೂಕ್ತ ಭದ್ರತೆಯನ್ನು ನೀಡಲಾಗುವುದು. ಕಾವೇರಿ ತುಲಾ ಸಂಕ್ರಮಣ ಸಂದರ್ಭದಲ್ಲಿ ಸ್ಥಳೀಯರ ಸಹಕಾರ ಅಗತ್ಯ. ಆ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯ ಜೊತೆಗೆ ಕೈ ಜೋಡಿಸುವಂತೆ ಹೇಳಿದರು.
ವಿಧಾನ ಪರಿಷತ್ತಿನ ನಿಕಟಪೂರ್ವ ಸದಸ್ಯೆ ವೀಣಾ ಅಚಯ್ಯ ಮಾತನಾಡಿ, ‘ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಪುರಾತನ ಕಾಲದಿಂದ ನಡೆದುಕೊಂಡು ಬರುತ್ತಿರುವ ಆಚಾರ-ವಿಚಾರ, ಸಂಪ್ರದಾಯಗಳನ್ನು ಮುಂದೆಯೂ ನಡೆಸಿಕೊಂಡು ಹೋಗಬೇಕು’ ಎಂದರು.
ಭಾಗಮಂಡಲ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸತೀಶ್ ಕುಮಾರ್ ಮಾತನಾಡಿ, ‘ರಸ್ತೆ ಬದಿಗಳಲ್ಲಿ ಬೀದಿ ದೀಪಗಳನ್ನು ಅಳವಡಿಸಲಾಗುವುದು. ಜೊತೆಗೆ ಸ್ವಚ್ಛತೆ, ಕುಡಿಯುವ ನೀರು, ಸಾರ್ವಜನಿಕ ಶೌಚಾಲಯ ಹೀಗೆ ಹಲವು ಸೌಲಭ್ಯಗಳನ್ನು ಒದಗಿಸಲಾಗುವುದು’ ಎಂದು ಅವರು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ.ಅಯ್ಯಪ್ಪ, ಭಾಗಮಂಡಲ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಪೆಮಿತ, ತಹಶೀಲ್ದಾರ್ ಮಹೇಶ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಶೇಖರ್, ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಪ್ಪ, ಕೆಎಸ್‍ಆರ್‌ಟಿಸಿ ವ್ಯವಸ್ಥಾಪಕಿ ಗೀತಾ, ತಕ್ಕ ಮುಖ್ಯಸ್ಥರು, ಅರ್ಚಕರು, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.