ಕುಶಾಲನಗರ: ಕರ್ನಾಟಕ ಸುವರ್ಣ ಸಂಭ್ರಮ ಪ್ರಯುಕ್ತ ನ. 11ರಂದು ಕುಶಾಲನಗರದಲ್ಲಿ 5 ಸಾವಿರ ಮಂದಿಯಿಂದ ವಿನೂತನ ಕನ್ನಡ ಕಂಠ ಗಾಯನ ಕಾರ್ಯಕ್ರಮ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಎಸ್. ನಾಗೇಶ್ ತಿಳಿಸಿದರು.
ಪಟ್ಟಣದ ರಥ ಬೀದಿ ಹಾಗೂ ಐಬಿ ರಸ್ತೆಯಲ್ಲಿ ಏಕಕಾಲದಲ್ಲಿ 5 ಸಾವಿರ ಮಂದಿಯಿಂದ ಕನ್ನಡ ನಾಡಗೀತೆ, ರೈತಗೀತೆ ಮತ್ತು ‘ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಗೀತ ಗಾಯನ ನಡೆಯಲಿದೆ. ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ವಿವಿಧ ಸಂಘ ಸಂಸ್ಥೆಗಳು, ಕನ್ನಡ ಅಭಿಮಾನಿಗಳು ಹಾಗೂ ನಾಗರಿಕರ ಸಹಭಾಗಿತ್ವದಲ್ಲಿ ನಡೆಯಲಿದೆ’ ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಡಿ.20ರಿಂದ ಮೂರು ದಿನಗಳ ಕಾಲ ಮಂಡ್ಯ ನಗರದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಪ್ರಯುಕ್ತ ಕೊಡಗು ಜಿಲ್ಲೆಗೆ ಆಗಮಿಸುವ ಕನ್ನಡ ಜ್ಯೋತಿ ರಥದ ಅದ್ದೂರಿ ಮೆರವಣಿಗೆಯನ್ನು ಬೆಳಿಗ್ಗೆ 10.30ಕ್ಕೆ ಬೈಚನಹಳ್ಳಿ ಮಾರಿಯಮ್ಮನ ದೇವಾಲಯದಿಂದ ರಥದ ಬೀದಿಯವರೆಗೆ ಆಯೋಜಿಸಲಾಗಿದೆ’ ಎಂದು ಹೇಳಿದರು.
ಕಾರ್ಯಕ್ರಮ ಧ್ವಜಾರೋಹಣವನ್ನು ಜಿಲ್ಲಾ ಉಸ್ತುವಾರಿ ಸಚಿವ ಭೋಸರಾಜ್ ನೆರವೇರಿಸಲಿದ್ದಾರೆ. ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಲಿದ್ದು, ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ನಾಗೇಶ್ ಅಧ್ಯಕ್ಷತೆ ವಹಿಸಲಿದ್ದಾರೆ. ಕುಶಾಲನಗರ ಪುರಸಭೆ ಅಧ್ಯಕ್ಷೆ ಜಯಲಕ್ಷ್ಮಿ, ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್, ಜಿಲ್ಲಾಧಿಕಾರಿ ವೆಂಕಟರಾಜು, ಎಸ್ಪಿ ಕೆ.ರಾಮರಾಜನ್, ಕಸಾಪ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್, ಡಿಡಿಪಿಐ ರಂಗಧಾಮಪ್ಪ, ಡಿಡಿಪಿಯು ಮಂಜುಳಾ, ಕ್ಷೇತ್ರ ಶಿಕ್ಷಣಾಧಿಕಾರಿ ಭಾಗ್ಯಮ್ಮ, ಕುಶಾಲನಗರ ತಾಲ್ಲೂಕು ತಹಶೀಲ್ದಾರರಾದ ಕಿರಣ್ ಗೌರಯ್ಯ, ಕುಶಾಲನಗರ ಡಿವೈಎಸ್ಪಿ ಆರ್.ವಿ.ಗಂಗಾಧರಪ್ಪ, ಕುಶಾಲನಗರ ಪುರಸಭೆ ಮುಖ್ಯನಿರ್ವಾಹಣಾಧಿಕಾರಿ ಕೃಷ್ಣಪ್ರಸಾದ್, ಜಿಲ್ಲಾ ಗೌರವ ಕಾರ್ಯದರ್ಶಿ ಎಸ್.ಐ. ಮುನೀರ್ ಅಹಮದ್, ರೇವತಿ ರಮೇಶ್, ಜಿಲ್ಲಾ ಕೋಶಾಧಿಕಾರಿ ಎಸ್.ಎಸ್. ಸಂಪತ್ ಕುಮಾರ್ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಗೋಷ್ಠಿಯಲ್ಲಿ ಕಸಾಪ ಸಂಘಟನಾ ಕಾರ್ಯದರ್ಶಿ ದೇವಿಪ್ರಸಾದ್, ನಿರ್ದೇಶಕರಾದ ಹರೀಶ್ ಗುಡ್ಡೆಮನೆ, ಕೆ.ಬಿ.ಶ್ರೀನಿವಾಸ್, ಪರಮೇಶ್, ಖಜಾಂಜಿ ಉಮೇಶ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.