ADVERTISEMENT

ಮಡಿಕೇರಿ: ನೀಟ್‌ ಮರು ಪರೀಕ್ಷೆಗೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಮಡಿಕೇರಿಯಲ್ಲಿ ಜಾಥಾ ನಡೆಸಿ, ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 22 ಜೂನ್ 2024, 4:39 IST
Last Updated 22 ಜೂನ್ 2024, 4:39 IST
‘ನೀಟ್’ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕು ಹಾಗೂ ಮರು ಪರೀಕ್ಷೆ ನಡೆಸಬೇಕು ಎಂದು ಒತ್ತಾಯಿಸಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್‌ಎಸ್‌ಯುಐ) ನೇತೃತ್ವದಲ್ಲಿ ವಿದ್ಯಾರ್ಥಿಗಳು ಶುಕ್ರವಾರ ಮಡಿಕೇರಿ ನಗರದಲ್ಲಿ ಪ‍್ರತಿಭಟನಾ ಜಾಥಾ ನಡೆಸಿದರು
‘ನೀಟ್’ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕು ಹಾಗೂ ಮರು ಪರೀಕ್ಷೆ ನಡೆಸಬೇಕು ಎಂದು ಒತ್ತಾಯಿಸಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್‌ಎಸ್‌ಯುಐ) ನೇತೃತ್ವದಲ್ಲಿ ವಿದ್ಯಾರ್ಥಿಗಳು ಶುಕ್ರವಾರ ಮಡಿಕೇರಿ ನಗರದಲ್ಲಿ ಪ‍್ರತಿಭಟನಾ ಜಾಥಾ ನಡೆಸಿದರು   

ಮಡಿಕೇರಿ: ‘ನೀಟ್’ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಶಂಕೆ ವ್ಯಕ್ತವಾಗಿರುವುದರಿಂದ ನಡೆದಿರುವ ಪರೀಕ್ಷೆಯನ್ನು ರದ್ದುಪಡಿಸಿ, ಮರು ಪರೀಕ್ಷೆ ನಡೆಸಬೇಕು ಎಂದು ಒತ್ತಾಯಿಸಿ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್‌ಎಸ್‌ಯುಐ) ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಇಂದಿರಾಗಾಂಧಿ ವೃತ್ತ (ಚೌಕಿ)ದಿಂದ ಶುಕ್ರವಾರ ಆರಂಭವಾದ ಪ್ರತಿಭಟನಾ ಜಾಥಾ ಪ್ರಮುಖ ರಸ್ತೆಗಳಲ್ಲಿ ಸಾಗಿತು. ಜಾಥಾದಲ್ಲಿ ಪಾಲ್ಗೊಂಡ ನಗರದ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ರಸ್ತೆಯುದ್ಧಕ್ಕೂ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಂತರ ಜಿಲ್ಲಾಧಿಕಾರಿ ಕಚೇರಿ ಮುಂದೆ ಕುಳಿತು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಮೊಳಗಿಸಿದರು.

‘ನೀಟ್’ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಕುರಿತು ಉನ್ನತ ತನಿಖೆ ನಡೆಸಬೇಕು ಎಂದೂ ಒತ್ತಾಯಿಸಿದರು.

ADVERTISEMENT

ಸಂಘಟನೆಯ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಪಿ.ಎಂ. ಅಬ್ದುಲ್ ರಾಶೀದ್ ಮಾತನಾಡಿ, ‘ನೀಟ್’ ಪ‍ರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ವಿವಾದಾತ್ಮಕ ಫಲಿತಾಂಶದ ಕಾರಣದಿಂದ ದೇಶದ ಲಕ್ಷಾಂತರ ವೈದ್ಯಕೀಯ ಪದವಿ ಆಕಾಂಕ್ಷಿಗಳಿಗೆ ಆಘಾತವಾಗಿದೆ. ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಲು ಕೇಂದ್ರ ಸರ್ಕಾರ ಕೂಡಲೇ ಮುಂದಾಗಬೇಕು’ ಎಂದು ಒತ್ತಾಯಿಸಿದರು.

ಈ ಪರೀಕ್ಷೆಯಲ್ಲಿ ಒಟ್ಟು 67 ವಿದ್ಯಾರ್ಥಿಗಳು ಮೊದಲ ಸ್ಥಾನ ಪಡೆದಿದ್ದಾರೆ. ಒಂದೇ ಪರೀಕ್ಷಾ ಕೇಂದ್ರದ 8 ವಿದ್ಯಾರ್ಥಿಗಳು ಮೊದಲ ಸ್ಥಾನ ಗಳಿಸಿದ್ದಾರೆ. ಮೊದಲ ಸ್ಥಾನ ಬಂದಿರುವವರಲ್ಲಿ 6 ವಿದ್ಯಾರ್ಥಿಗಳು ಒಂದೇ ತರಬೇತಿ ಕೇಂದ್ರದವರಾಗಿದ್ದಾರೆ. ಇವೆಲ್ಲವೂ ಸಾಕಷ್ಟು ಅನುಮಾನಗಳನ್ನು ಹುಟ್ಟು ಹಾಕಿದೆ. ಇಂತಹುಗಳ ಬಗ್ಗೆ ತನಿಖೆಯನ್ನೇ ನಡೆಸುವುದಿಲ್ಲ ಎಂದರೆ ಏನರ್ಥ ಎಂದು ಅವರು ಪ್ರಶ್ನಿಸಿದರು.

ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುವುದನ್ನು ನಿಲ್ಲಿಸಬೇಕು. ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಎಲ್ಲ ಅಕ್ರಮಗಳ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕು. ಹಾಲಿ ನಡೆದಿರುವ ಪರೀಕ್ಷೆಯನ್ನು ರದ್ದುಪಡಿಸಿ, ಮತ್ತೊಂದು ಪರೀಕ್ಷೆ ನಡೆಸುವ ಮೂಲಕ ಪ್ರಾಮಾಣಿಕವಾಗಿ ಅಧ್ಯಯನ ಮಾಡಿದ, ಪರೀಕ್ಷೆ ಬರೆದ ವಿದ್ಯಾರ್ಥಿಗಳ ಪರ ನಿಲ್ಲಬೇಕು ಎಂದು ಅವರು ಒತ್ತಾಯಿಸಿದರು.

ಬ್ಯಾನರ್ ಹಾಗೂ ಭಿತ್ತಿಪತ್ರಗಳನ್ನು ಹಿಡಿದ ವಿದ್ಯಾರ್ಥಿಗಳು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗೆ ವಿದ್ಯಾರ್ಥಿಗಳು ಮನವಿ ಪತ್ರ ಸಲ್ಲಿಸಿದರು.

ಪ್ರತಿಭಟನಾ ರ‍್ಯಾಲಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದ್ದರು
ಮಡಿಕೇರಿಯ ಪ್ರಮುಖ ರಸ್ತೆಗಳಲ್ಲಿ ನಡೆದ ಮೆರವಣಿಗೆ ವಿದ್ಯಾರ್ಥಿಗಳ ಹಿತ ಕಾಯಲು ಒತ್ತಾಯ ಜಿಲ್ಲಾಧಿಕಾರಿ ಕಚೇರಿಗೆ ಮನವಿ ಪತ್ರ ಸಲ್ಲಿಕೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.