ADVERTISEMENT

ಕೊಡಗಿನ ಮುಂಗಾರು ಬಿರುಸು

​ಪ್ರಜಾವಾಣಿ ವಾರ್ತೆ
Published 25 ಜೂನ್ 2024, 14:32 IST
Last Updated 25 ಜೂನ್ 2024, 14:32 IST
ಮಡಿಕೇರಿಯಲ್ಲಿ ಮಂಗಳವಾರ ಪ‍್ರವಾಸಿಗರು ಮಳೆಯಲ್ಲೇ ರಾಜಾಸೀಟ್ ಉದ್ಯಾನಕ್ಕೆ ಭೇಟಿ ನೀಡಿದ್ದರು
ಪ್ರಜಾವಾಣಿ ಚಿತ್ರ/ರಂಗಸ್ವಾಮಿ
ಮಡಿಕೇರಿಯಲ್ಲಿ ಮಂಗಳವಾರ ಪ‍್ರವಾಸಿಗರು ಮಳೆಯಲ್ಲೇ ರಾಜಾಸೀಟ್ ಉದ್ಯಾನಕ್ಕೆ ಭೇಟಿ ನೀಡಿದ್ದರು ಪ್ರಜಾವಾಣಿ ಚಿತ್ರ/ರಂಗಸ್ವಾಮಿ   

ಮಡಿಕೇರಿ/ಮಂಗಳೂರು: ಕೊಡಗು ಜಿಲ್ಲೆಯ ಕೆಲವೆಡೆ ಮಂಗಳವಾರ ಮಳೆ ಬಿರುಸಾಗಿದೆ. ಮಡಿಕೇರಿ ನಗರದಲ್ಲಿ ಸೋಮವಾರ ರಾತ್ರಿಯಿಂದಲೂ ನಿರಂತರವಾಗಿ ಮಳೆಯಾಯಿತು. ಮಂಗಳವಾರ ಬಿರುಗಾಳಿಯೊಂದಿಗೆ ಬಿರುಸಾಗಿ ಸುರಿಯಿತು. ಹಾರಂಗಿ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣವೂ 500 ಕ್ಯೂಸೆಕ್‌ ದಾಟಿದ್ದು, ಉತ್ತಮ ಮಳೆಯ ನಿರೀಕ್ಷೆಗಳನ್ನು ಗರಿಗೆದರಿಸಿದೆ.

ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ಮಡಿಕೇರಿ ತಾಲ್ಲೂಕಿನ ಭಾಗಮಂಡಲದಲ್ಲಿ 4 ಸೆಂ.ಮೀನಷ್ಟು ಮಳೆ ಸುರಿದಿದೆ. ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ ಹೋಬಳಿ ವ್ಯಾಪ್ತಿಯಲ್ಲಿ 5 ಸೆಂ.ಮೀನಷ್ಟು ಮಳೆಯಾಗಿದೆ.

ಚಿಕ್ಕಮಗಳೂರಿನಲ್ಲಿ ಮಳೆ: ದಕ್ಷಿಣ ಕನ್ನಡ, ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಂಗಳವಾರ ಸಾಧಾರಣ ಮಳೆಯಾಗಿದೆ.

ADVERTISEMENT

ಪಶ್ಚಿಮ ಘಟ್ಟದಲ್ಲಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರದಿಂದ ಈಚೆಗೆ ವ್ಯಾಪಕ ಮಳೆಯಾಗಿದ್ದರಿಂದ ನೇತ್ರಾವತಿ, ಫಲ್ಗುಣಿ, ನಂದಿನಿ, ಶಾಂಭವಿ ಹಾಗೂ ಕುಮಾರಧಾರಾ ನದಿಗಳಲ್ಲಿ ನೀರಿನ ಹರಿವಿನ ಮಟ್ಟ ಹೆಚ್ಚಾಗಿದೆ.  

ಇದೇ 26 ಹಾಗೂ 27ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಬಿರುಸಿನ ಮಳೆಯಾಗುವುದಾಗಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಎರಡು ದಿನ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್‌ ಘೋಷಿಸಲಾಗಿದೆ.

ಚಿಕ್ಕಮಗಳೂರು ಜಿಲ್ಲೆ ಕೊಪ್ಪದಲ್ಲಿ 5ಸೆಂ ಮೀ. ಮಳೆಯಾಗಿದ್ದರೆ, ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರ ಸುತ್ತಮುತ್ತ 4 ಸೆಂ.ಮೀಗೂ ಹೆಚ್ಚು ಮಳೆಯಾಗಿದೆ.  ಎನ್.ಆರ್.ಪುರ, ಕಳಸ ಭಾಗದಲ್ಲಿ ಸಾಧಾರಣ, ಚಿಕ್ಕಮಗಳೂರು, ಆಲ್ದೂರು, ಕಡೂರು, ತರೀಕೆರೆ ಸುತ್ತಮುತ್ತ ತುಂತುರು ಮಳೆಯಾಗಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.