ADVERTISEMENT

19 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಇಂದಿನಿಂದ

ಕೊಡಗು ಜಿಲ್ಲೆಯಲ್ಲಿ 5,251 ವಿದ್ಯಾರ್ಥಿಗಳು ನೋಂದಣಿ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2024, 4:24 IST
Last Updated 1 ಮಾರ್ಚ್ 2024, 4:24 IST
ವಿರಾಜಪೇಟೆಯ ಸಂತ ಅನ್ನಮ್ಮ ಪದವಿಪೂರ್ವ ಕಾಲೇಜಿನಲ್ಲಿನ ದ್ವಿತೀಯ ಪಿಯು ಪರೀಕ್ಷಾ ಕೇಂದ್ರಗಳಲ್ಲಿ ಅಂತಿಮ ಹಂತದ ಸಿದ್ಧತೆಗಳು ನಡೆಸುತ್ತಿರುವ ಸಿಬ್ಬಂದಿ
ವಿರಾಜಪೇಟೆಯ ಸಂತ ಅನ್ನಮ್ಮ ಪದವಿಪೂರ್ವ ಕಾಲೇಜಿನಲ್ಲಿನ ದ್ವಿತೀಯ ಪಿಯು ಪರೀಕ್ಷಾ ಕೇಂದ್ರಗಳಲ್ಲಿ ಅಂತಿಮ ಹಂತದ ಸಿದ್ಧತೆಗಳು ನಡೆಸುತ್ತಿರುವ ಸಿಬ್ಬಂದಿ   

ಮಡಿಕೇರಿ: ಮಾರ್ಚ್ 1ರಿಂದ ಕೊಡಗು ಜಿಲ್ಲೆಯಲ್ಲಿ ಆರಂಭವಾಗಲಿರುವ ದ್ವಿತೀಯ ಪಿಯುಸಿ ಪರೀಕ್ಷೆಗೆ 5,251 ವಿದ್ಯಾರ್ಥಿಗಳು ನೋಂದಣಿಯಾಗಿದ್ದು, 19 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ.

ಮಡಿಕೇರಿ ತಾಲ್ಲೂಕಿನಲ್ಲಿ 5, ಸೋಮವಾರಪೇಟೆ ತಾಲ್ಲೂಕಿನಲ್ಲಿ 8 ಮತ್ತು ವಿರಾಜಪೇಟೆ ತಾಲ್ಲೂಕಿನಲ್ಲಿ 6 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ. ಮಡಿಕೇರಿ ನಗರದಲ್ಲಿ ಸರ್ಕಾರಿ ಜ್ಯೂನಿಯರ್ ಕಾಲೇಜು ಮತ್ತು ಸಂತ ಮೈಕಲರ ಕಾಲೇಜಿನಲ್ಲಿ ಪರೀಕ್ಷೆಗಾಗಿ ಸಿದ್ಧತೆಗಳು ಪೂರ್ಣಗೊಂಡಿದ್ದವು.

ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಪುಟ್ಟರಾಜು ಮಾತನಾಡಿ, ‘ಮಾರ್ಚ್ 1ರಂದು ಬೆಳಿಗ್ಗೆ ಕನ್ನಡ ಭಾಷೆಯ ಪರೀಕ್ಷೆಯು ಎಲ್ಲ ಕೇಂದ್ರಗಳಲ್ಲಿ ನಡೆಯಲಿದೆ. ಎಲ್ಲ ಬಗೆಯ ಸಿದ್ಧತೆಗಳೂ ಪೂರ್ಣಗೊಂಡಿವೆ’ ಎಂದು ಹೇಳಿದರು. 

ADVERTISEMENT

ವಿರಾಜಪೇಟೆಯಲ್ಲಿ ಸಿದ್ಧತೆ ಪೂರ್ಣ

ವಿರಾಜಪೇಟೆ: ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು ಹಾಗೂ ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜುಗಳಲ್ಲಿನ ಪರೀಕ್ಷಾ ಕೇಂದ್ರಗಳಲ್ಲಿ ಶುಕ್ರವಾರದಿಂದ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಗಳು ನಡೆಯಲಿದ್ದು, ಸಿದ್ಧತೆಗಳು ಪೂರ್ಣಗೊಂಡಿವೆ.

ಪರೀಕ್ಷಾ ದಿನಗಳಂದು ಬೆಳಿಗ್ಗೆ 10:15 ರಿಂದ ಮಧ್ಯಾಹ್ನ 1:30 ರವರೆಗೆ ಪರೀಕ್ಷೆಗಳು ನಡೆಯಲಿವೆ. ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿ ಮಾಡಲಾಗಿದೆ. ವಿಶೇಷವೆಂದರೆ ಈ ಬಾರಿ ಪ್ರಾಯೋಗಿಕೇತರ ವಿಷಯಗಳಲ್ಲಿ ಆಂತರಿಕ ಮೌಲ್ಯಮಾಪನಕ್ಕೆ 20 ಅಂಕಗಳನ್ನು ನಿಗದಿಗೊಳಿಸಿರುವುದರಿಂದ 80 ಅಂಕಗಳಿಗೆ ವಾರ್ಷಿಕ ಪರೀಕ್ಷೆ ನಡೆಯಲಿದೆ. ಪ್ರಾಯೋಗಿಕ ತರಗತಿಗಳನ್ನು ಒಳಗೊಂಡಿರುವ ವಿಷಯಗಳಲ್ಲಿ ಹಿಂದಿನಂತೆಯೇ 70 ಅಂಕಗಳಿಗೆ ಪರೀಕ್ಷೆ ನಡೆಯಲಿದೆ.

ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸಂತ ಅನ್ನಮ್ಮ ಪದವಿಪೂರ್ವ ಕಾಲೇಜಿನ, ಅರಮೆರಿಯ ಎಸ್.ಎಂ.ಎಸ್ ವಿದ್ಯಾಸಂಸ್ಥೆ, ಪೆರುಂಬಾಡಿಯ ಶಂಸುಲ್ ವಿದ್ಯಾಸಂಸ್ಥೆ ಹಾಗೂ ಬಾಳುಗೋಡಿನ ಏಕಲವ್ಯ ವಸತಿ ಶಾಲೆಯ ಒಟ್ಟು 366 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಸಂತ ಅನ್ನಮ್ಮ ಪದವಿಪೂರ್ವ ಕಾಲೇಜಿನಲ್ಲಿ ವಿರಾಜಪೇಟೆ ಕಾವೇರಿ ಪದವಿಪೂರ್ವ ಕಾಲೇಜು, ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು, ಅಮ್ಮತ್ತಿಯ ಗುಡ್ ಶೆಫರ್ಡ್ ಪದವಿ ಪೂರ್ವ ಕಾಲೇಜು ಹಾಗೂ ಆರ್ಜಿಯ ಅನ್ವರುಲ್ ಹುದಾ ವಿದ್ಯಾಸಂಸ್ಥೆಯ ಒಟ್ಟು 283 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.