ಮಡಿಕೇರಿ: ಕಾವೇರಿ ನದಿ ರಕ್ಷಣಾ ಸಮಿತಿ ವತಿಯಿಂದ ತಲಕಾವೇರಿಯ ಬ್ರಹ್ಮಕುಂಡಿಕೆಗೆ ವಿವಿಧ ಮಠಾಧೀಶರು ವಿಶೇಷ ಪೂಜೆ ಸಲ್ಲಿಸಿದರು. ನಂತರ, ಭಾಗಮಂಡಲದ ಸಂಗಮದಲ್ಲಿ ನದಿಗೆ ಬಾಗಿನ ಅರ್ಪಿಸಿ ಪೂಜೆ ಸಲ್ಲಿಸಿದರು.
ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಮೈಸೂರು ಶಾಖಾ ಮಠದ ಸೋಮನಾಥ ಸ್ವಾಮೀಜಿ, ಕೊಡ್ಲಿಪೇಟೆ ಕಿರಿ ಕೊಡ್ಲಿ ಮಠಾಧೀಶರಾದ ಸದಾಶಿವ ಸ್ವಾಮೀಜಿ, ಅಮ್ಮತ್ತಿ ಕನ್ನಡ ಮಠದ ಚನ್ನಬಸವದೇಶಿಕೇಂದ್ರ ಸ್ವಾಮೀಜಿ, ಕಾವೇರಿ ಆಶ್ರಮದ ಅಪ್ಪಯ್ಯಸ್ವಾಮಿ, ಹಾಸನದ ವಿಜಯಕುಮಾರ ಸ್ವಾಮೀಜಿ, ಮನೆಹಳ್ಳಿ ಮಠದ ಮಹಾಂತ ಶಿವಲಿಂಗ ಸ್ವಾಮೀಜಿ, ಕ್ಷೇತ್ರದ ತಕ್ಕ ಮುಖ್ಯಸ್ಥರಾದ ಕೋಡಿ ಮೋಟಯ್ಯ ಭಾಗವಹಿಸಿದ್ದರು.
ಈ ವೇಳೆ ಮಾತನಾಡಿದ ಸೋಮನಾಥ ಸ್ವಾಮೀಜಿ, ‘ಜೀವನದಿ ಕಾವೇರಿಯ ನೀರಿನ ಮೂಲಕ ದಕ್ಷಿಣ ಭಾರತದ ರಾಜ್ಯಗಳ ರೈತರು ತಮ್ಮ ಜೀವನವನ್ನು ಅವಲಂಬಿಸಿದ್ದಾರೆ. ನದಿ ನೀರಿನ ವಿವಾದವನ್ನು ಬಗೆಹರಿಸಲು ಮಾತೆ ಕಾವೇರಿಯಿಂದ ಮಾತ್ರ ಸಾಧ್ಯ’ ಎಂದು ಪ‍್ರತಿಪಾದಿಸಿದರು.
ಈ ನಿಟ್ಟಿನಲ್ಲಿ ಸಮಸ್ಯೆಯನ್ನು ಕಾವೇರಿ ಮಾತೆಗೆ ಸಮರ್ಪಣೆ ಮಾಡುವ ಮೂಲಕ ಪರಿಹಾರಕ್ಕೆ ಸಾಮೂಹಿಕ ಪ್ರಾರ್ಥನೆ ಅಗತ್ಯವಾಗಿದೆ ಎಂದರು.
ಸಮಿತಿ ಅಧ್ಯಕ್ಷ ಎಚ್.ಕೆ.ರಾಮು ಮಾತನಾಡಿ, ‘ರಾಜ್ಯ ರಾಜ್ಯಗಳ ನಡುವೆ ಉಂಟಾಗುತ್ತಿರುವ ಸಮಸ್ಯೆಗಳ ಶಾಶ್ವತ ಪರಿಹಾರ ಕಂಡುಕೊಳ್ಳಲು, ಚರ್ಚೆ ನಡೆಸಲು ಕಾವೇರಿ ನದಿ ರಕ್ಷಣಾ ಸಮಿತಿ ಸ್ಥಾಪಿಸಲಾಗಿದೆ’ ಎಂದು ತಿಳಿಸಿದರು.
‘ಸಮಿತಿಯಲ್ಲಿ ನಾಡಿನ ಮಠಾಧೀಶರು, ನಿವೃತ್ತ ನ್ಯಾಯಾಧೀಶರು, ಹಿರಿಯ ನಿವೃತ್ತ ಅಧಿಕಾರಿಗಳು ಇದ್ದಾರೆ. ಸಮಿತಿಯ ಪ್ರಮುಖರು ಮೂಲ ಕಾವೇರಿಯಲ್ಲಿ ಪೂಜೆ ಸಲ್ಲಿಸಿ ಕಾವೇರಿ ನದಿ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಸಲುವಾಗಿ ಹಿರಿಯರ ಮಾರ್ಗದರ್ಶನದಲ್ಲಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ’ ಎಂದು ಹೇಳಿದರು.
ಸಮಿತಿಯ ಗೌರವಾಧ್ಯಕ್ಷರು ಹಾಗೂ ವಿಧಾನ ಪರಿಷತ್ತಿನ ಮಾಜಿ ಸದಸ್ಯರೂ ಆದ ಡಿ.ಎಸ್. ವೀರಯ್ಯ, ಎ.ದೇವೇಗೌಡ, ಖಜಾಂಚಿ ಸಿ.ಜಗದೀಶ್, ಉಪಾಧ್ಯಕ್ಷರಾದ ಯಶೋಧಾ ರಾಜಣ್ಣ, ಮಂಜುಳಾ ಗೋಪಾಲ್, ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿಯ ರಾಜ್ಯ ಸಂಚಾಲಕ ಎಂ.ಎನ್. ಚಂದ್ರಮೋಹನ್ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.