ವಿರಾಜಪೇಟೆ: ಪಟ್ಟಣಕ್ಕೆ ಹೊಂದಿಕೊಂಡಂತಿರುವ ಮಗ್ಗುಲ ಹಾಗೂ ಐಮಂಗಲ ಗ್ರಾಮ ವ್ಯಾಪ್ತಿಯಲ್ಲಿ ಹುಲಿ ಸಂಚರಿಸಿರುವ ಶಂಕೆ ಇದ್ದು, ಅರಣ್ಯ ಇಲಾಖೆ ಸಿಬ್ಬಂದಿ ಶುಕ್ರವಾರ ಗ್ರಾಮದಲ್ಲಿ ಬೆಳಿಗ್ಗೆ ಹುಲಿ ಪತ್ತೆಗೆ ಕಾರ್ಯಾಚರಣೆ ನಡೆಸಿದರು.
ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಪರಿಶೀಲನೆ ನಡೆಸಿ ಗ್ರಾಮದ ವ್ಯಾಪ್ತಿಯಲ್ಲಿ ಹುಲಿ ಚಲನವಲನ ಕಂಡು ಬಂದಿರುವುದನ್ನು ಖಚಿತ ಪಡಿಸಿಕೊಂಡಿದ್ದರು.
ಕಾರ್ಯಾಚರಣೆ ತಂಡದೊಂದಿಗೆ ಇದ್ದ ರಾಜ್ಯ ವನ್ಯಜೀವಿ ಮಂಡಳಿಯ ಸದಸ್ಯ ಸಂಕೇತ್ ಪೂವಯ್ಯ ಮಾತನಾಡಿ, ‘ಗ್ರಾಮಸ್ಥರ ಮಾಹಿತಿಯ ಮೇರೆಗೆ ಪರಿಶೀಲಿಸಿದಾಗ ವಯಸ್ಸಾದ ಹುಲಿ ಸಂಚರಿಸಿರುವುದು ಖಾತ್ರಿಯಾಗಿದೆ. ತಕ್ಷಣ ಸೆರೆ ಹಿಡಿಯಲು ವೈಜ್ಞಾನಿಕ ರೀತಿಯಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆ’ ಎಂದರು.
ಡಿಸಿಎಫ್ ಜಗನ್ನಾಥ್ ಮಾತನಾಡಿ, ‘ಹಲವು ದಿನಗಳಿಂದ ಇಲಾಖೆಯ ಸಿಬ್ಬಂದಿ ಗ್ರಾಮದಲ್ಲಿ ಹುಲಿ ಸಂಚರಿಸುತ್ತಿರುವ ಕುರಿತು ಸೂಕ್ಷ್ಮವಾಗಿ ಗಮನಿಸುತ್ತಿದ್ದರು. ಇದರಿಂದ ಗ್ರಾಮದಲ್ಲಿ ಹುಲಿಯ ಚಲನವಲನವಿರುವುದು ಖಾತ್ರಿಯಾದ್ದರಿಂದ ಕಾರ್ಯಚರಣೆಯನ್ನು ಕೈಗೊಳ್ಳಲಾಗಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಇದನ್ನು ಗಂಭೀರವಾಗಿ ಪರಿಗಣಿಸಿ ಸುಮಾರು 60ಕ್ಕೂ ಹೆಚ್ಚು ಸಿಬ್ಬಂದಿಯನ್ನು ಕಾರ್ಯಾಚರಣೆಯಲ್ಲಿ ತೊಡಗಿಸಿಕೊಳ್ಳಲಾಗಿದೆ’ ಎಂದು ಮಾಹಿತಿ ನೀಡಿದರು.
ಕಾರ್ಯಾಚರಣೆಯಲ್ಲಿ ವಲಯ ಅರಣ್ಯಾಧಿಕಾರಿ ಶಿವರಾಂ ಮತ್ತಿತರ ಅಧಿಕಾರಿಗಳು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.