ADVERTISEMENT

ಆರೋಗ್ಯ ಇಲಾಖೆಯಲ್ಲಿ ಭ್ರಷ್ಟಾಚಾರ: ಆರೋಪ

ಡಿಎಚ್‌ಒ ಕಚೇರಿಗೆ ರೈತ ಸಂಘ ಸದಸ್ಯರ ಮುತ್ತಿಗೆ: ಧರಣಿ

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2018, 13:08 IST
Last Updated 22 ಅಕ್ಟೋಬರ್ 2018, 13:08 IST
ಆರೋಗ್ಯ ಇಲಾಖೆಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಆರೋಪಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸದಸ್ಯರು ಕೋಲಾರದಲ್ಲಿ ಸೋಮವಾರ ಡಿಎಚ್‌ಒ ಕಚೇರಿಗೆ ಮುತ್ತಿಗೆ ಹಾಕಿ ಧರಣಿ ನಡೆಸಿದರು.
ಆರೋಗ್ಯ ಇಲಾಖೆಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಆರೋಪಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸದಸ್ಯರು ಕೋಲಾರದಲ್ಲಿ ಸೋಮವಾರ ಡಿಎಚ್‌ಒ ಕಚೇರಿಗೆ ಮುತ್ತಿಗೆ ಹಾಕಿ ಧರಣಿ ನಡೆಸಿದರು.   

ಕೋಲಾರ: ಆರೋಗ್ಯ ಇಲಾಖೆಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಆರೋಪಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸದಸ್ಯರು ಇಲ್ಲಿ ಸೋಮವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ (ಡಿಎಚ್‌ಒ) ಕಚೇರಿಗೆ ಮುತ್ತಿಗೆ ಹಾಕಿ ಧರಣಿ ನಡೆಸಿದರು.

‘ಜಿಲ್ಲೆಯಲ್ಲಿ ಸರ್ಕಾರಿ ಆಸ್ಪತ್ರೆಗಳ ಸ್ಥಿತಿ ಶೋಚನೀಯವಾಗಿದೆ. ಆಸ್ಪತ್ರೆಗಳಲ್ಲಿ ಮೂಲಸೌಕರ್ಯ ಸಮಸ್ಯೆಯಿಂದ ರೋಗಿಗಳು ಹಾಗೂ ಅವರ ಸಂಬಂಧಿಕರು ತೊಂದರೆ ಅನುಭವಿಸುವಂತಾಗಿದೆ. ಇಲಾಖೆಯ ಲಂಚಬಾಕ ಅಧಿಕಾರಿಗಳು ಹಾಗೂ ವೈದ್ಯರು ಚಿಕಿತ್ಸೆ ಸೋಗಿನಲ್ಲಿ ಬಡ ರೋಗಿಗಳನ್ನು ಸುಲಿಗೆ ಮಾಡುತ್ತಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ರೋಗಿಗಳು ಲಂಚ ಕೊಡದಿದ್ದರೆ ವೈದ್ಯರು ಸೇವೆ ನೀಡಲು ನಿರಾಕರಿಸುತ್ತಾರೆ. ಸರ್ಕಾರದಿಂದ ಔಷಧ ಮತ್ತು ಮಾತ್ರೆ ಪೂರೈಕೆಯಾಗುತ್ತಿದ್ದರೂ ವೈದ್ಯರು ಹೊರಗಿನ ಮಳಿಗೆಗಳಲ್ಲಿ ಔಷಧ, ಮಾತ್ರೆ ಖರೀದಿಸುವಂತೆ ರೋಗಿಗಳಿಗೆ ಚೀಟಿ ಬರೆದು ಕೊಡುತ್ತಿದ್ದಾರೆ. ಸರ್ಕಾರದಿಂದ ಪೂರೈಕೆಯಾದ ಔಷಧ ಮತ್ತು ಮಾತ್ರೆಗಳನ್ನು ಕದ್ದು ಮುಚ್ಚಿ ಮಾರಾಟ ಮಾಡಲಾಗುತ್ತಿದೆ’ ಎಂದು ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಕೆ.ನಾರಾಯಣಗೌಡ ದೂರಿದರು.

ADVERTISEMENT

‘ಡಿಎಚ್‌ಒ ವಿಜಯ್‌ಕುಮಾರ್‌ ಅವರು ಸಿಬ್ಬಂದಿ ನೇಮಕಾತಿಯಲ್ಲಿ ಅಕ್ರಮ ನಡೆಸಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಇಲಾಖೆಗೆ ಬಿಡುಗಡೆಯಾದ ಅನುದಾನ ದುರ್ಬಳಕೆ ಮಾಡಿಕೊಂಡಿದ್ದಾರೆ. ಅವರ ವಿರುದ್ಧ ಕರ್ತವ್ಯ ಲೋಪದ ಆರೋಪವಿದ್ದರೂ ಹಿರಿಯ ಅಧಿಕಾರಿಗಳು ಶಿಸ್ತುಕ್ರಮ ಜರುಗಿಸುತ್ತಿಲ್ಲ’ ಎಂದು ಆರೋಪಿಸಿದರು.

ಪ್ರಾಣದ ಜತೆ ಚೆಲ್ಲಾಟ: ‘ಜಿಲ್ಲೆಯಲ್ಲಿ ಆಂಬುಲೆನ್ಸ್‌ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ತುರ್ತು ಸಂದರ್ಭದಲ್ಲಿ ಆಂಬುಲೆನ್ಸ್‌ ಸೇವೆಗಾಗಿ ಸಹಾಯವಾಣಿಗೆ ಕರೆ ಮಾಡಿದರೆ ಸಿಬ್ಬಂದಿಯು ವಾಹನ ಲಭ್ಯವಿಲ್ಲ ಎಂದು ಹೇಳಿ ನಿರ್ಲಕ್ಷ್ಯ ತೋರುತ್ತಾರೆ. ಹಣದಾಸೆಗೆ ಖಾಸಗಿ ಆಂಬುಲೆನ್ಸ್‌ ಸಂಸ್ಥೆಗಳೊಂದಿಗೆ ಒಳ ಒಪ್ಪಂದ ಮಾಡಿಕೊಂಡಿರುವ ಸಿಬ್ಬಂದಿಯು ಜನರ ಪ್ರಾಣದ ಜತೆ ಚೆಲ್ಲಾಟವಾಡುತ್ತಿದ್ದಾರೆ’ ಎಂದು ಧರಣಿನಿರತರು ಕಿಡಿಕಾರಿದರು.

‘ಜಿಲ್ಲೆಯಲ್ಲಿ ಎಚ್‌1ಎನ್‌1, ಡೆಂಗಿ ಹಾಗೂ ಚಿಕೂನ್‌ ಗುನ್ಯಾ ಪ್ರಕರಣಗಳು ಹೆಚ್ಚುತ್ತಿವೆ. ಇದರಿಂದ ಜನ ಆತಂಕಗೊಂಡಿದ್ದಾರೆ. ಆದರೆ, ಅಧಿಕಾರಿಗಳು ಹಾಗೂ ವೈದ್ಯರು ರೋಗ ಹತೋಟಿಗೆ ಪರಿಣಾಮಕಾರಿ ಕ್ರಮ ಕೈಗೊಳ್ಳುತ್ತಿಲ್ಲ. ನಕಲಿ ವೈದ್ಯರ ಹಾವಳಿ ಮೇರೆ ಮೀರಿದೆ. ಸರ್ಕಾರಿ ವೈದ್ಯರು ನಿಯಮಬಾಹಿರವಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ತನಿಖೆ ನಡೆಸಬೇಕು: ‘ಡಿಎಚ್‌ಒ ಅಕ್ರಮದ ಸಂಬಂಧ ಸಮಗ್ರ ತನಿಖೆ ನಡೆಸಬೇಕು. ನಕಲಿ ವೈದ್ಯರನ್ನು ಬಂಧಿಸಬೇಕು. ಕೆಲಸದ ಅವಧಿಯಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಕಾರ್ಯ ನಿರ್ವಹಿಸುವ ವೈದ್ಯರನ್ನು ಸೇವೆಯಿಂದ ಅಮಾನತು ಮಾಡಬೇಕು. ಸರ್ಕಾರಿ ಆಸ್ಪತ್ರೆಗಳಲ್ಲಿನ ಮೂಲಸೌಕರ್ಯ ಸಮಸ್ಯೆ ಪರಿಹರಿಸಬೇಕು’ ಎಂದು ಒತ್ತಾಯಿಸಿದರು.

ಸಂಘಟನೆ ಜಿಲ್ಲಾ ಘಟಕದ ಸಂಚಾಲಕ ಕೆ.ಶ್ರೀನಿವಾಸಗೌಡ, ರೈತ ಸಂಘ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀನಿವಾಸ್‌, ತಾಲ್ಲೂಕು ಘಟಕದ ಅಧ್ಯಕ್ಷ ಮಂಜುನಾಥ್, ಸದಸ್ಯರಾದ ಹರಿಕುಮಾರ್‌, ವೆಂಕಟೇಶಪ್ಪ, ಆಂಜಿನಪ್ಪ, ವೆಂಕಿ, ಆನಂದರೆಡ್ಡಿ, ಗಣೇಶ್ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.