ADVERTISEMENT

ಗೂಂಡಾ ಕಾಯ್ದೆ ಜಾರಿಗೆ ಮನವಿ

ರಾಯಚೂರು ಜಿಲ್ಲೆಯ ಗ್ರಾಮ ಲೆಕ್ಕಿಗ ಸಾಹೇಬ್‌ ಪಟೇಲ್‌ ಕೊಲೆ ಪ್ರಕರಣ

​ಪ್ರಜಾವಾಣಿ ವಾರ್ತೆ
Published 25 ಡಿಸೆಂಬರ್ 2018, 17:22 IST
Last Updated 25 ಡಿಸೆಂಬರ್ 2018, 17:22 IST
ಗ್ರಾಮ ಲೆಕ್ಕಿಗ ಸಾಹೇಬ್‌ ಪಟೇಲ್‌ ಕೊಲೆ ಪ್ರಕರಣದ ಆರೋಪಿಗಳ ವಿರುದ್ಧ ಗೂಂಡಾ ಕಾಯ್ದೆಯಡಿ ದೂರು ದಾಖಲಿಸುವಂತೆ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸದಸ್ಯರು ಕೋಲಾರದಲ್ಲಿ ಮಂಗಳವಾರ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರಾಜೇಂದ್ರಕುಮಾರ್‌ ಅವರಿಗೆ ಮನವಿ ಸಲ್ಲಿಸಿದರು.
ಗ್ರಾಮ ಲೆಕ್ಕಿಗ ಸಾಹೇಬ್‌ ಪಟೇಲ್‌ ಕೊಲೆ ಪ್ರಕರಣದ ಆರೋಪಿಗಳ ವಿರುದ್ಧ ಗೂಂಡಾ ಕಾಯ್ದೆಯಡಿ ದೂರು ದಾಖಲಿಸುವಂತೆ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸದಸ್ಯರು ಕೋಲಾರದಲ್ಲಿ ಮಂಗಳವಾರ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರಾಜೇಂದ್ರಕುಮಾರ್‌ ಅವರಿಗೆ ಮನವಿ ಸಲ್ಲಿಸಿದರು.   

ಕೋಲಾರ: ರಾಯಚೂರು ಜಿಲ್ಲೆಯ ಗ್ರಾಮ ಲೆಕ್ಕಿಗ ಸಾಹೇಬ್‌ ಪಟೇಲ್‌ ಕೊಲೆ ಪ್ರಕರಣದ ಆರೋಪಿಗಳ ವಿರುದ್ಧ ಗೂಂಡಾ ಕಾಯ್ದೆಯಡಿ ದೂರು ದಾಖಲಿಸಬೇಕೆಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸದಸ್ಯರು ಇಲ್ಲಿ ಮಂಗಳವಾರ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರಾಜೇಂದ್ರಕುಮಾರ್‌ ಅವರಿಗೆ ಮನವಿ ಸಲ್ಲಿಸಿದರು.

‘ಗ್ರಾಮ ಲೆಕ್ಕಿಗ ಸಾಹೇಬ್‌ ಪಟೇಲ್‌ರ ಹತ್ಯೆಯು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಸ್ಪಷ್ಟ ಉದಾಹರಣೆ. ಸರ್ಕಾರ ಹಾಗೂ ಪೊಲೀಸ್‌ ಇಲಾಖೆಯು ಪ್ರಾಮಾಣಿಕ ಅಧಿಕಾರಿಗಳಿಗೆ ರಕ್ಷಣೆ ನೀಡುವಲ್ಲಿ ವಿಫಲವಾಗಿದೆ. ಅಧಿಕಾರಿಗಳಿಗೆ ರಕ್ಷಣೆ ಇಲ್ಲದಿದ್ದರೆ ಜನಸಾಮಾನ್ಯರ ಗತಿ ಏನು?’ ಎಂದು ಸಂಘಟನೆ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು.

‘ರಾಜ್ಯದಲ್ಲಿ ಮರಳು ದಂಧೆ ವ್ಯಾಪಕವಾಗಿದೆ. ಈ ದಂಧೆಯಿಂದ ಭ್ರಷ್ಟ ರಾಜಕಾರಣಿಗಳು ಹಾಗೂ ಹಿರಿಯ ಅಧಿಕಾರಿಗಳು ಜೇಬು ತುಂಬಿಸಿಕೊಳ್ಳುತ್ತಿದ್ದಾರೆ. ಆದರೆ, ದಕ್ಷ ಅಧಿಕಾರಿಗಳು ದಂಧೆಗೆ ಬಲಿಯಾಗುತ್ತಿದ್ದಾರೆ. ಜನಪ್ರತಿನಿಧಿಗಳ ಕುಮ್ಮಕ್ಕಿನಿಂದಲೇ ಮರಳು ದಂಧೆ ನಡೆಯುತ್ತಿದೆ’ ಎಂದು ಸಂಘಟನೆಯ ರಾಜ್ಯ ಘಟಕದ ಉಪಾಧ್ಯಕ್ಷ ಕೆ.ನಾರಾಯಣಗೌಡ ಆರೋಪಿಸಿದರು.

ADVERTISEMENT

‘ಮರಳು ದಂಧೆಗೆ ಕಡಿವಾಣ ಹಾಕಲು ಮುಂದಾಗುವ ಅಧಿಕಾರಿಗಳ ಮೇಲೆ ದೌರ್ಜನ್ಯ ನಡೆಯುತ್ತಿದೆ. ಸಾಹೇಬ್ ಪಟೇಲ್‌ರ ಹತ್ಯೆಯು ನಾಗರೀಕ ಸಮಾಜ ತಲೆ ತಗ್ಗಿಸುವ ವಿಚಾರ. ಈ ಪ್ರಕರಣದಿಂದ ಗ್ರಾಮ ಲೆಕ್ಕಿಗರು ಆತಂಕಗೊಂಡಿದ್ದಾರೆ. ಮತ್ತೊಂದೆಡೆ ಅಧಿಕಾರಿಗಳಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ’ ಎಂದು ಹೇಳಿದರು.

ಜೀವದೊಂದಿಗೆ ಚೆಲ್ಲಾಟ: ‘ಮರಳು ದಂಧೆ ತಡೆಯಬೇಕಾದ ಪೊಲೀಸರು ಕೈಚೆಲ್ಲಿದ್ದಾರೆ. ಸರ್ಕಾರ ಅಮಾಯಕ ಅಧಿಕಾರಿಗಳ ಜೀವದೊಂದಿಗೆ ಚೆಲ್ಲಾಟವಾಡುತ್ತಿದೆ. ಮರಳು ದಂಧೆ ತಡೆಯಲು ಮುಂದಾಗುವ ಅಧಿಕಾರಿಗಳನ್ನು ರಾಜಕೀಯ ಒತ್ತಡಕ್ಕೆ ಮಣಿದು ವರ್ಗಾವಣೆ ಮಾಡಲಾಗುತ್ತಿದೆ’ ಎಂದು ಧರಣಿನಿರತರು ದೂರಿದರು.

‘ಸಾಹೇಬ್‌ ಪಾಟೇಲ್‌ರ ಹತ್ಯೆ ಸಂಬಂಧ ಉನ್ನತ ತನಿಖೆ ನಡೆಸಬೇಕು. ಪ್ರಕರಣದ ಎಲ್ಲಾ ಆರೋಪಿಗಳನ್ನು ಶೀಘ್ರವೇ ಬಂಧಿಸಬೇಕು. ಭವಿಷ್ಯದಲ್ಲಿ ಇಂತಹ ಘಟನೆ ಮರುಕಳಿಸದಂತೆ ಸರ್ಕಾರ ಎಚ್ಚರಿಕೆ ವಹಿಸಬೇಕು. ಸಾಹೇಬ್‌ ಪಾಟೇಲ್‌ರ ಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ಸರ್ಕಾರ ವಹಿಸಿಕೊಳ್ಳಬೇಕು. ಮೃತರ ಕುಟುಂಬ ಸದಸ್ಯರಿಗೆ ಹೆಚ್ಚಿನ ಪರಿಹಾರ ನೀಡಬೇಕು’ ಎಂದು ಒತ್ತಾಯಿಸಿದರು.

ಸಂಘಟನೆಯ ಜಿಲ್ಲಾ ಘಟಕದ ಸಂಚಾಲಕ ಕೆ.ಶ್ರೀನಿವಾಸಗೌಡ, ರೈತ ಸಂಘ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀನಿವಾಸ್, ಹಸಿರು ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಹರಿಕುಮಾರ್, ಸದಸ್ಯರಾದ ರಾಜು, ಚಂದ್ರಪ್ಪ, ಹರೀಶ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.