ADVERTISEMENT

ದೇಶದ ಸರ್ವತೋಮುಖ ಅಭಿವೃದ್ಧಿಗೆ ಸಾಕ್ಷರತೆ ಅಗತ್ಯ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2022, 4:35 IST
Last Updated 16 ಸೆಪ್ಟೆಂಬರ್ 2022, 4:35 IST
ಶ್ರೀನಿವಾಸಪುರದಲ್ಲಿ ಬುಧವಾರ ಅಂತರರಾಷ್ಟ್ರೀಯ ಸಾಕ್ಷರತಾ ದಿನ ಆಚರಿಸಲಾಯಿತು
ಶ್ರೀನಿವಾಸಪುರದಲ್ಲಿ ಬುಧವಾರ ಅಂತರರಾಷ್ಟ್ರೀಯ ಸಾಕ್ಷರತಾ ದಿನ ಆಚರಿಸಲಾಯಿತು   

ಶ್ರೀನಿವಾಸಪುರ: ‘ದೇಶದ ಸರ್ವತೋಮುಖ ಅಭಿವೃದ್ಧಿಗೆ ಸಾಕ್ಷರತೆ ಅಗತ್ಯ. ಅನ್ನ ಮತ್ತು ಅಕ್ಷರ ಆದ್ಯತಾ ವಿಷಯವಾಗಬೇಕು. ವಿದ್ಯಾವಂತ ಸಮುದಾಯ ಸಮಾಜದಲ್ಲಿ ಅಕ್ಷರದ ಮಹತ್ವ ಸಾರಬೇಕು’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವಿ. ಉಮಾದೇವಿ ಹೇಳಿದರು.

ಪಟ್ಟಣದ ಕ್ಷೇತ್ರ ಸಂಪನ್ಮೂಲ ಕೇಂದ್ರದ ಆವರಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಬುಧವಾರ ಏರ್ಪಡಿಸಿದ್ದ ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆಯಲ್ಲಿ ಅವರು ಮಾತನಾಡಿದರು.

ಓದುವ ಮತ್ತು ಬರೆಯುವ ಸಾಮರ್ಥ್ಯ ಬದುಕನ್ನು ಬದಲಾವಣೆ ಮಾಡುತ್ತದೆ ಎಂದು ಹೇಳಿದರು.

ADVERTISEMENT

ಬಿಆರ್‌ಪಿ ಕೆ.ಸಿ. ವಸಂತ ಮಾತನಾಡಿ, ವಿದ್ಯಾವಂತ ಸಮುದಾಯ ಕಲಿಯುವ, ಕಲಿಸುವ ಹಾಗೂ ಬದುಕು ಉತ್ತಮ ಪಡಿಸಿಕೊಳ್ಳುವ ಪ್ರತಿಜ್ಞೆ ಕೈಗೊಳ್ಳಬೇಕು. ಭೂಮಿಗೆ ಬಿದ್ದ ಬೀಜ ಮತ್ತು ಎದೆಗೆ ಬಿದ್ದ ಅಕ್ಷರ ಎಂದೂ ವ್ಯರ್ಥವಾಗುವುದಿಲ್ಲ ಎಂಬುದನ್ನು ಅರಿಯಬೇಕು. ಅಕ್ಷರದ ಬೆಳಕಲ್ಲಿ ಬದುಕು ಕಟ್ಟಿಕೊಳ್ಳಲು ಪ್ರಯತ್ನಿಸಬೇಕು ಎಂದು ಹೇಳಿದರು.

ಪ್ರತಿ ದಿನಾಚರಣೆಯ ಹಿಂದೆ ಮಹತ್ವವೊಂದು ಅಡಗಿರುತ್ತದೆ. ಆದ್ದರಿಂದ ಯಾವುದೇ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು. ಉದ್ದೇಶ ಸಫಲತೆಗೆ ಪೂರಕವಾಗಿ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು.

ಸಂಪನ್ಮೂಲ ವ್ಯಕ್ತಿಗಳಾದ ಜಿ.ವಿ. ಚಂದ್ರಪ್ಪ, ನಾಗರಾಜು, ಕೃಷ್ಣಮೂರ್ತಿ ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆಯ ಮಹತ್ವ ಕುರಿತು ಮಾತನಾಡಿದರು. ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಹಾಗೂ ಶಿಕ್ಷಕರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.