ಕೋಲಾರ: ‘ಶಾಲೆಗಳಲ್ಲಿ ಶೈಕ್ಷಣಿಕ ವರ್ಷ ಮುಗಿದ ನಂತರ 2 ತಿಂಗಳ ಕಾಲ ಸರ್ಕಾರ ಬೇಸಿಗೆ ರಜೆ ನಿಗದಿಪಡಿಸಿದೆ. ಈ ಸಮಯದಲ್ಲಿ ಮಕ್ಕಳಿಗಾಗಿ ಬೇಸಿಗೆ ಶಿಬಿರ ಆಯೋಜಿಸಲಾಗಿದ್ದು, ಪೋಷಕರು ಮಕ್ಕಳನ್ನು ಶಿಬಿರಕ್ಕೆ ಕಳುಹಿಸಬೇಕು’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಎಂ.ಜಿ.ಪಾಲಿ ಮನವಿ ಮಾಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬಾಲಭವನ ಸೊಸೈಟಿ ಸಹಯೋಗದಲ್ಲಿ 5 ವರ್ಷದಿಂದ 16 ವರ್ಷದೊಳಗಿನ ಮಕ್ಕಳಿಗೆ ಇಲ್ಲಿ ಬುಧವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಬೇಸಿಗೆ ಶಿಬಿರ ಉದ್ಘಾಟಿಸಿ ಮಾತನಾಡಿದರು.
‘ಕಳೆದ 2 ವರ್ಷಗಳಿಂದ ಕೋವಿಡ್ ನಿರ್ಬಂಧದ ಕಾರಣಕ್ಕೆ ಬೇಸಿಗೆ ಶಿಬಿರ ನಡೆಸಲು ಸಾಧ್ಯವಾಗಿರಲಿಲ್ಲ. ಈ ಬಾರಿ ಶಿಬಿರ ಆಯೋಜಿಸಿದ್ದು, ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಬೇಸಿಗೆ ಸಮಯದಲ್ಲಿ ಮಕ್ಕಳಿಗೆ ಸಿಗುವ ರಜೆಯನ್ನು ವ್ಯಕ್ತಿತ್ವ ರೂಪಿಸಿಕೊಳ್ಳುವ ಸದಾವಕಾಶವಾಗಿ ಬಳಸಿಕೊಳ್ಳಬೇಕು. 10 ದಿನ ಶಿಬಿರ ನಡೆಯಲಿದ್ದು, ಸಮಾರೋಪದ ದಿನ ಪ್ರವಾಸ ಆಯೋಜಿಸಲಾಗುತ್ತದೆ’ ಎಂದು ಹೇಳಿದರು.
‘ಸರ್ಕಾರಿ ಶಾಲೆಗಳಲ್ಲಿ ಈಗಾಗಲೇ ಬೇಸಿಗೆ ರಜೆ ನೀಡಲಾಗಿದೆ. ಈ ಸಮಯದಲ್ಲಿ ಸರ್ಕಾರದಿಂದ ಬೇಸಿಗೆ ಶಿಬಿರ ನಡೆಸಲಾಗುತ್ತಿದ್ದು, ಮಕ್ಕಳಿಗೆ ಉಚಿತ ಪ್ರವೇಶವಿದೆ. ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲೂ ಬೇಸಿಗೆ ಶಿಬಿರ ನಡೆಯಲಿದೆ. ಈ ಶಿಬಿರದಲ್ಲಿ ಮಕ್ಕಳು ಭಾಗವಹಿಸುವುದರಿಂದ ಹೊಸ ವಿಚಾರ ತಿಳಿದುಕೊಳ್ಳುತ್ತಾರೆ’ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಮೇಶ್ ಅಭಿಪ್ರಾಯಪಟ್ಟರು.
ಶಿಬಿರದಲ್ಲಿ ಮಕ್ಕಳಿಗೆ ಕಲಿಕಾ ಕಿಟ್ ವಿತರಿಸಲಾಯಿತು. ಜಿಲ್ಲೆಯ ಎಲ್ಲಾ ಶಿಶು ಅಭಿವೃದ್ಧಿ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿಬ್ಬಂದಿ ಪಾಲ್ಗೊಂಡರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.