ಕೋಲಾರ: ‘ನಿರುದ್ಯೋಗ ಸಮಸ್ಯೆ ನಿವಾರಣೆಗಾಗಿ ಜಿಲ್ಲೆಯ ಕೆಜಿಎಫ್‌ನ 7 ಸಾವಿರ ಎಕರೆ ಪ್ರದೇಶದಲ್ಲಿ ವಿಶೇಷ ಆರ್ಥಿಕ ವಲಯ (ಎಸ್‌ಇಝಡ್) ಸ್ಥಾಪಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದು, ಸರ್ಕಾರ ಸಮ್ಮತಿಸುವ ನಿರೀಕ್ಷೆಯಿದೆ’ ಎಂದು ಸಂಸದ ಎಸ್.ಮುನಿಸ್ವಾಮಿ ಹೇಳಿದರು.
ಶಿಕ್ಷಕರ ಗೆಳೆಯರ ಬಳಗ, ಜಿಲ್ಲಾ ಸರ್ಕಾರಿ ನೌಕರರ ಸಂಘ, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹಾಗೂ ಮುಖ್ಯ ಶಿಕ್ಷಕರ ಸಂಘದ ಸಹಯೋಗದಲ್ಲಿ ಇಲ್ಲಿ ಶನಿವಾರ ಹಮ್ಮಿಕೊಂಡಿದ್ದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮತ್ತು ಶಿಕ್ಷಕರ ಪ್ರತಿಭಾವಂತ ಮಕ್ಕಳ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು.
‘ಕೆಜಿಎಫ್ ಇಡೀ ಜಗತ್ತಿಗೆ ಚಿನ್ನ ನೀಡಿದೆ. ಅಲ್ಲಿ ಗಣಿ ಮುಚ್ಚಿದ ನಂತರ ಕಾರ್ಮಿಕರ ಪರಿಸ್ಥಿತಿ ಅತಂತ್ರವಾಗಿದೆ. ಕೆಜಿಎಫ್‌ನಲ್ಲಿ ಎಸ್‍ಇಝಡ್ ಸ್ಥಾಪನೆ ಹಾಗೂ ಜಿಲ್ಲೆಗೆ ಶಾಶ್ವತ ನೀರಾವರಿ ಯೋಜನೆ ಒದಗಿಸುವ ಕುರಿತು ಕೇಂದ್ರ ಜಲ ಸಂಪನ್ಮೂಲ ಸಚಿವರಿಗೆ ಮನವಿ ಮಾಡಿದ್ದು, ಸೂಕ್ತ ಸ್ಪಂದನೆ ಸಿಕ್ಕಿದೆ. ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರತ್ಯೇಕ ಜಲ ಸಚಿವಾಲಯ ಸ್ಥಾಪಿಸಿದ್ದು, ಪ್ರತಿ ಮನೆಗೂ ಶುದ್ಧ ಕುಡಿಯುವ ನೀರು ಕೊಡುವ ಸಂಕಲ್ಪ ಮಾಡಿದೆ’ ಎಂದು ತಿಳಿಸಿದರು.
‘ಜಿಲ್ಲೆಯ ಗ್ರಾಮೀಣ ಪ್ರದೇಶದ ಶಿಕ್ಷಕರ ಸಮಸ್ಯೆಗಳನ್ನು ಪಟ್ಟಿ ಮಾಡಿಕೊಟ್ಟರೆ ಸಮಸ್ಯೆ ಪರಿಹರಿಸುತ್ತೇವೆ. ಗ್ರಾಮಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಬೇಕು ಮತ್ತು ಗಿಡ ಮರ ಬೆಳೆಸುವ ಮೂಲಕ ಪರಿಸರ ಸಂರಕ್ಷಣೆ ಮಾಡಬೇಕು. ಶಾಲೆಗಳ ಅಭಿವೃದ್ಧಿಗೆ ಸಿಎಸ್‍ಆರ್ ನಿಧಿ ಬಳಸಲಾಗುತ್ತದೆ’ ಎಂದು ಭರವಸೆ ನೀಡಿದರು.
ಅಭಿವೃದ್ಧಿ ಕುಂಠಿತ: ‘ಜಿಲ್ಲೆಯಲ್ಲಿ ಈ ಹಿಂದೆ ಸಂಸದರಾಗಿ ಅಧಿಕಾರ ನಡೆಸಿದವರ ಸ್ವಾರ್ಥದಿಂದ ಕೋಲಾರದಲ್ಲಿ ಅಭಿವೃದ್ಧಿ ಕುಂಠಿತಗೊಂಡಿದೆ. ಮಾಜಿ ಸಂಸದ ಕುಟುಂಬ ರಾಜಕಾರಣದಿಂದ ಜಿಲ್ಲೆಯ ರಾಜಕೀಯ ವ್ಯವಸ್ಥೆ ಕಲುಷಿತಗೊಂಡಿದೆ’ ಎಂದು ಪರೋಕ್ಷವಾಗಿ ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ವಿರುದ್ದ ವಾಗ್ದಾಳಿ ನಡೆಸಿದರು.
‘ಜನಪರ ಕೆಲಸ ಮಾಡಲು ಹೃದಯ ವೈಶಾಲ್ಯತೆ ಬೇಕು. ಈ ಹಿಂದೆ 7 ಬಾರಿ ಸಂಸದರಾಗಿ ಕೇಂದ್ರ ಸಚಿವ ಸ್ಥಾನ ಅಲಂಕರಿಸಿದವರು ಏನೂ ಮಾಡಲಿಲ್ಲ. ಸದಾನಂದಗೌಡ ಅವರು ಮುಖ್ಯಮಂತ್ರಿಯಾಗಿದ್ದಾಗ ಭಗೀರಥರಂತೆ ಜಿಲ್ಲೆಗೆ ಕೆ.ಸಿ ವ್ಯಾಲಿ ಯೋಜನೆ ಜಾರಿಗೊಳಿಸಲು ಮಂಜೂರಾತಿ ನೀಡಿದರು. ನಂತರ ಶಾಸಕ ರಮೇಶ್‌ಕುಮಾರ್ ಅವರು ಸರ್ಕಾರದ ಹಿಂದೆ ಬಿದ್ದು ಯೋಜನೆ ಕಾರ್ಯ ರೂಪಕ್ಕೆ ಬರುವಲ್ಲಿ ಪ್ರಮುಖ ಪಾತ್ರ ವಹಿಸಿದರು’ ಎಂದರು.
‘ಜಿಲ್ಲೆಯ ಅಭಿವೃದ್ಧಿಗೆ ಕೈಜೋಡಿಸಬೇಕಾದವರೆ ಕೆ.ಸಿ ವ್ಯಾಲಿ ಯೋಜನೆಗೆ ಅಡ್ಡಗಾಲು ಹಾಕಿದರು. ಈ ತಪ್ಪಿಗೆ ಜಿಲ್ಲೆಯ ಜನ ಅವರಿಗೆ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಿದ್ದಾರೆ. ಮಾಜಿ ಸಂಸದರು ಇನ್ನಾದರೂ ಕುತಂತ್ರ ಬಿಟ್ಟು ಜನಪರವಾಗಿ ನಡೆದುಕೊಳ್ಳಲಿ’ ಎಂದು ವ್ಯಂಗ್ಯವಾಡಿದರು.
ಶಿಕ್ಷಕರ ಭವನ ನಿರ್ಮಿಸಿ: ‘ಜಿಲ್ಲಾ ಕೇಂದ್ರದಲ್ಲಿ ಶಿಕ್ಷಕರ ಭವನ ನಿರ್ಮಾಣ ಕಾರ್ಯ ನನೆಗುದಿಗೆ ಬಿದ್ದಿದೆ. ಸಂಸದರ ಅವಧಿಯಲ್ಲಿ ಶಿಕ್ಷಕರ ಭವನ ನಿರ್ಮಾಣವಾಗಬೇಕು. ಗೆಳೆಯರ ಬಳಗವು ಸರ್ಕಾರಿ ಶಾಲೆಗಳ ಅಭಿವೃದ್ದಿಗೆ ಅಪಾರ ಕೊಡುಗೆ ನೀಡಿದೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ನಾಗರಾಜಗೌಡ ಹೇಳಿದರು.
17 ಶಿಕ್ಷಕರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಶಿಕ್ಷಕರ ಪ್ರತಿಭಾವಂತ ಮಕ್ಕಳನ್ನು ಪುರಸ್ಕರಿಸಲಾಯಿತು. ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಬಿ.ಅಶೋಕ್, ಪ್ರಧಾನ ಕಾರ್ಯದರ್ಶಿ ವಿ.ಮುರಳಿಮೋಹನ್, ಶಿಕ್ಷಕ ಗೆಳೆಯರ ಬಳಗದ ಅಧ್ಯಕ್ಷ ಎಸ್.ನಾರಾಯಣಸ್ವಾಮಿ, ಕಾರ್ಯದರ್ಶಿ ವೀರಣ್ಣಗೌಡ, ಖಜಾಂಚಿ ಚಂದ್ರಪ್ಪ, ಕ್ಷೇತ್ರ ಸಮನ್ವಯಾಧಿಕಾರಿ ರಾಮಕೃಷ್ಣಪ್ಪ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.