ಕೋಲಾರ: ‘ಆಧುನಿಕತೆ ಬೆಳೆದಂತೆ ಬೃಹತ್ ಕಟ್ಟಡಗಳು ನಿರ್ಮಾಣಗೊಳುತ್ತಿವೆ. ಅರಿವಿನ ಕೊರತೆಯಿಂದ ಮನುಷ್ಯ ಪರಿಸರದ ಮೇಲೆ ದಾಳಿ ನಡೆಸುತ್ತಿದ್ದು, ಇದರಿಂದ ಪ್ರಾಕೃತಿಕ ಅಸಮತೋಲನವಾಗುತ್ತಿದೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ನಾಗರಾಜ್‌ಗೌಡ ಕಳವಳ ವ್ಯಕ್ತಪಡಿಸಿದರು.
ತಾಲ್ಲೂಕಿನ ಹುತ್ತೂರು ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಶುಕ್ರವಾರ ನಡೆದ ಪ್ಲಾಸ್ಟಿಕ್ ತ್ಯಾಜ್ಯ ಮುಕ್ತ ಅಭಿಯಾನದಲ್ಲಿ ಮಾತನಾಡಿ, ‘ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ. ಆದರೆ, ಇತ್ತೀಚಿನ ವರ್ಷಗಳಲ್ಲಿ ಮನುಷ್ಯನ ದುರಾಸೆಯ ಫಲವಾಗಿ ಪರಿಸರ ನಾಶವಾಗಿದೆ’ ಎಂದು ವಿಷಾದಿಸಿದರು.
ಕೇಂದ್ರ ಸರ್ಕಾರವು ಸ್ವಚ್ಛ ಭಾರತಕ್ಕಾಗಿ ಸ್ವಚ್ಛತಾ ಆಂದೋಲನ ಜಾರಿಗೊಳಿಸಿದೆ. ಜತೆಗೆ ಪರಿಸರದ ಮೇಲೆ ದುಷ್ಪರಿಣಾಮ ಬೀರುತ್ತಿರುವ ಪ್ಲಾಸ್ಟಿಕ್ ನಿಷೇಧಿಸಿದೆ. ಪ್ಪಾಸ್ಟಿಕ್ ವಸ್ತುಗಳ ದುಷ್ಪರಿಣಾಮದ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು’ ಎಂದು ಸಲಹೆ ನೀಡಿದರು.
ಮನುಷ್ಯನಿಗೆ ಅಗತ್ಯವಾಗಿ ಬೇಕಿರುವ ಮೂಲಸೌಕರ್ಯವನ್ನು ನಿಸರ್ಗ ಕಲ್ಪಿಸಿದೆ. ಒಂದು ಮರ ದಿನಕ್ಕೆ ಒಂದು ಕೆ.ಜಿ ಆಮ್ಲಜನಕ ಉತ್ಪಾದನೆ ಮಾಡುತ್ತದೆ, ಮರಗಳ ನಾಶದಿಂದ ಪರಿಸರದ ಮೇಲಾಗುವ ದುಷ್ಪರಿಣಾಮ ಅರಿತು ಅರಣ್ಯ ಸಂಪತ್ತು ಉಳಿಸಿ’ ಎಂದು ಕಿವಿಮಾತು ಹೇಳಿದರು.
ನಿರುಪಯುಕ್ತ ಪ್ಲಾಸ್ಟಿಕ್ ಬಾಟಲಿ ಅಥವಾ ಡಬ್ಬ ರಸ್ತೆಗೆ ಬಿಸಾಡಬಾರದು. ತರಕಾರಿ ಕಸವನ್ನು ಗೊಬ್ಬರವಾಗಿ ಪರಿವರ್ತಿಸಿ ಮನೆಯಂಗಳದಲ್ಲಿ ಪ್ಲಾಸ್ಟಿಕ್ ಬಾಟಲಿ ಬಳಸಿಕೊಂಡು ಗಿಡ ಬೆಳೆಸಬಹುದು. ಆಹಾರ ಪದಾರ್ಥ ಅಥವಾ ತರಕಾರಿ ಖರೀದಿಗಾಗಿ ಮಾರುಕಟ್ಟೆಗೆ ಹೋಗುವಾಗ ಜತೆಯಲ್ಲಿ ಬಟ್ಟೆ ಅಥವಾ ಸೆಣಬಿನ ಕೈ ಚೀಲ ಕೊಂಡೊಯ್ಯಬೇಕು. ಸಾಧ್ಯವಾದಷ್ಟು ಪ್ಲಾಸ್ಟಿಕ್ ಕವರ್ ಬಳಕೆ ಕಡಿಮೆ ಮಾಡಬೇಕು’ ಎಂದರು.
ಪರಿಸರವಾದಿ ಕೆ.ಎನ್.ತ್ಯಾಗರಾಜು, ಪ್ಲಾಸ್ಟಿಕ್ ತ್ಯಾಜ್ಯ ಮುಕ್ತ ಅಭಿಯಾನದ ಸಂಚಾಲಕ ಮಹೇಶ್‌ರಾವ್ ಕದಂ, ಹುತ್ತೂರು ಸರ್ಕಾರಿ ಪ್ರೌಢ ಶಾಲೆ ಮುಖ್ಯ ಶಿಕ್ಷಕಿ ಎನ್.ಮಂಜುಳಾ, ಶಿಕ್ಷಕರಾದ ನಾಗಮುನೇಂದ್ರ, ಜಯಮ್ಮ, ನಾಗರತ್ನಮ್ಮ, ಸುಷ್ಮಾ, ಸುಚಿತ್ರಾ, ಸಣ್ಣ ರಂಗಪ್ಪ, ನರೇಶ್‌ಕುಮಾರ್ ಪಾಲ್ಗೊಂಡರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.