ADVERTISEMENT

ಕೋಲಾರ: ಬೆಳೆ ಪರಿಹಾರ ವಿತರಣೆಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 24 ಡಿಸೆಂಬರ್ 2021, 11:36 IST
Last Updated 24 ಡಿಸೆಂಬರ್ 2021, 11:36 IST

ಕೋಲಾರ: ‘ಅಕಾಲಿಕ ಮಳೆಯಿಂದ ಆಗಿರುವ ಬೆಳೆ ನಷ್ಟಕ್ಕೆ ರೈತರಿಗೆ ಶೀಘ್ರವೇ ಪರಿಹಾರ ನೀಡಬೇಕು. ಜಿಲ್ಲೆಗೆ ಕುಡಿಯುವ ನೀರು ಒದಗಿಸುವ ಉದ್ದೇಶಕ್ಕೆ ಜಾರಿಗೊಳಿಸಿರುವ ಎತ್ತಿನಹೊಳೆ ಯೋಜನೆ ಕಾಮಗಾರಿಯನ್ನು ತ್ವರಿತಗೊಳಿಸಬೇಕು’ ಎಂದು ವಿಧಾನ ಪರಿಷತ್‌ ಸದಸ್ಯ ಗೋವಿಂದರಾಜು ವಿಧಾನ ಮಂಡಲ ಅಧಿವೇಶನದಲ್ಲಿ ಒತ್ತಾಯಿಸಿದರು.

ಶುಕ್ರವಾರ ಪರಿಷತ್‌ ಕಲಾಪದಲ್ಲಿ ಮಾತನಾಡಿ, ‘ರಾಜ್ಯದಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದ ಕೋಟ್ಯಂತರ ರೂಪಾಯಿ ಬೆಳೆ ನಷ್ಟವಾಗಿದೆ. ಬಡ್ಡಿ ಸಾಲ ಮಾಡಿ ಬೆಳೆ ಬೆಳೆದಿದ್ದ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಳೆ ನಷ್ಟದ ಸಮೀಕ್ಷೆ ಪೂರ್ಣಗೊಂಡಿದ್ದು, ರೈತರಿಗೆ ಶೀಘ್ರವೇ ಪರಿಹಾರದ ಹಣ ಬಿಡುಗಡೆ ಮಾಡಬೇಕು’ ಎಂದು ಆಗ್ರಹಿಸಿದರು.

‘ಎತ್ತಿನಹೊಳೆ ಯೋಜನೆ ಕಾಮಗಾರಿ ಆಮೆ ಗತಿಯಲ್ಲಿ ಸಾಗಿದೆ. ಕಾಮಗಾರಿ ಪೂರ್ಣಗೊಂಡು ಯೋಜನೆ ಅನುಷ್ಠಾನಗೊಂಡರೆ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯುತ್ತದೆ. ಸರ್ಕಾರ ಕಾಮಗಾರಿ ಚುರುಕುಗೊಳಿಸುವ ಬಗ್ಗೆ ಗಮನ ಹರಿಸಬೇಕು. ಕಾಮಗಾರಿಗೆ ಅಗತ್ಯವಿರುವ ಅನುದಾನವನ್ನು ಶೀಘ್ರವೇ ಬಿಡುಗಡೆ ಮಾಡಬೇಕು’ ಎಂದು ಮನವಿ ಮಾಡಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.