ಮುಳಬಾಗಿಲು: ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳ ಮೇಲೆ ಕೆಲವು ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ದಬ್ಬಾಳಿಕೆ ನಡೆಸುತ್ತಿದ್ದು, ಅಂತಹವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಪಿಡಿಒ ಸಂಘ ಹಾಗೂ ಗ್ರಾಮ ಪಂಚಾಯಿತಿ ನೌಕರರು ಶುಕ್ರವಾರ ತಾಲ್ಲೂಕು ಪಂಚಾಯಿತಿ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದರು.
ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ಕೆಲಸ ಮಾಡುವ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ಕಂಪ್ಯೂಟರ್ ಆಪರೇಟರ್‌ಗಳು ಹಾಗೂ ಬಿಲ್ ಕಲೆಕ್ಟರ್‌ಗಳ ಮೇಲೆ ವಿನಾಕಾರಣ ದೌರ್ಜನ್ಯ, ದಬ್ಬಾಳಿಕೆ ಮಾಡುತ್ತಿದ್ದಾರೆ. ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಕೆಲಸಗಾರರಿಗೆ ರಕ್ಷಣೆ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಗುರುವಾರ ತಾಲ್ಲೂಕಿನ ಅಂಬ್ಲಿಕಲ್ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯ ಮೇಲೆ ಅಂಬ್ಲಿಕಲ್ ಪಂಚಾಯಿತಿ ಜನಪ್ರತಿನಿಧಿಗಳು ಹಾಗೂ ಕೆಲವು ಸಾರ್ವಜನಿಕರು ಜೀವ ಬೆದರಿಕೆ ಹಾಕಿದ್ದಾರೆ. ಇದು ಖಂಡನೀಯ. ಇಂತಹ ಘಟನೆಗಳು ಮರುಕಳಿಸಬಾರದು ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಂಘದ ತಾಲ್ಲೂಕು ಅಧ್ಯಕ್ಷ ಸಿ.ಪಿ.ಅಶ್ವಥ್ ನಾರಾಯಣ ತಿಳಿಸಿದರು.
ಇತ್ತೀಚಿಗೆ ತಾಲ್ಲೂಕಿನ ರಾಜೇಂದ್ರ ಹಳ್ಳಿ ಗ್ರಾಮ ಪಂಚಾಯತಿ ಪಿಡಿಒ ಮೇಲೆ ಮತ್ತು ಗುಮ್ಮಕಲ್ಲು ಗ್ರಾಮ ಪಂಚಾಯತಿ ಬಿಲ್ ಕಲೆಕ್ಟರ್ ಮೇಲೆ ಕೆಲವರು ಹಲ್ಲೆ ನಡೆಸಿರುವ ಉದಾಹರಣೆಗಳೂ ಇವೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣವೂ ದಾಖಲಾಗಿತ್ತು ಎಂದು ಹೇಳಿದರು.
ಅಂಬ್ಲಿಕಲ್ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ತುಳಸಿರಾಮ ಶೆಟ್ಟಿ ಮಾತನಾಡಿ, ಅಂಬ್ಲಿಕಲ್ ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಕೆಲವು ಸದಸ್ಯರು ಕಾಯಕ ಮಿತ್ರ ಹುದ್ದೆ, ಇ- ಸ್ವತ್ತುಗಳ ವಿಚಾರದಲ್ಲಿ ಗುಂಪು ಕಟ್ಟಿಕೊಂಡು ಬಂದು ನನ್ನ ಮೇಲೆ ಹಲ್ಲೆ ನಡೆಸಿ, ಪ್ರಾಣ ಬೆದರಿಕೆ ಹಾಕಿದ್ದಾರೆ ಎಂದು ದೂರಿದರು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ.ಸರ್ವೇಶ್ ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿದರು. ಸಿಬ್ಬಂದಿಯ ಮೇಲೆ ದಬ್ಬಾಳಿಕೆ ನಡೆಸುತ್ತಿರುವ ಬಗ್ಗೆ ದೂರು ಬಂದಿವೆ. ಇದನ್ನು ಮೇಲಾಧಿಕಾರಿಗಳ ಗಮನಕ್ಕೆ ತಂದು, ಕ್ರಮಕ್ಕೆ ಒತ್ತಾಯಿಸಲಾಗುವುದು ಎಂದರು. ಪಿಡಿಒ ಸಂಘದ ಮಾಜಿ ಅಧ್ಯಕ್ಷ ರಮೇಶ್, ನಿರ್ದೇಶಕಿ ಸರಿತಾ ಹಾಗೂ ತಾಲ್ಲೂಕಿನ ಎಲ್ಲಾ ಪಿಡಿಒಗಳು ಹಾಗೂ ಪಂಚಾಯತಿ ಸಿಬ್ಬಂದಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.