ADVERTISEMENT

ಕೋಲಾರ ನಗರ ವ್ಯಾಪ್ತಿಯಲ್ಲಿ ಕೃಷಿಯೇತರ ಚಟುವಟಿಕೆ: ಕ್ರಮಕ್ಕೆ ಹೈಕೋರ್ಟ್‌ ನಿರ್ದೇಶನ

​ಪ್ರಜಾವಾಣಿ ವಾರ್ತೆ
Published 2 ಜುಲೈ 2024, 16:19 IST
Last Updated 2 ಜುಲೈ 2024, 16:19 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ಕೋಲಾರ ನಗರಸಭೆ ವ್ಯಾಪ್ತಿಯಲ್ಲಿ ಭೂ ಪರಿವರ್ತನೆ ಮಾಡದೆಯೇ ಕೃಷಿ ಜಮೀನಿನಲ್ಲಿ ಕೃಷಿಯೇತರ ಚಟುವಟಿಕೆ ನಡೆಸುತ್ತಿರುವ ಪ್ರಕರಣಗಳಲ್ಲಿ ಅಗತ್ಯ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶಿಸಿದೆ.

ಈ ಸಂಬಂಧ ಕೋಲಾರದ ಅಂಬೇಡ್ಕರ್‌ ನಗರದ ಕೆ.ರಮೇಶ್‌ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್‌.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ‘ಕೋಲಾರ ನಗರಸಭೆ ವ್ಯಾಪ್ತಿಯಲ್ಲಿನ ಕೃಷಿ ಭೂಮಿಯಲ್ಲಿ ಭೂ ಪರಿವರ್ತನೆ ಮಾಡದೇ ಇದ್ದರೂ ಅನಧಿಕೃತ ಕಟ್ಟಡ ನಿರ್ಮಾಣ ಮಾಡಲಾಗಿದೆ. ಮದ್ಯದ ಮಳಿಗೆಗಳನ್ನು ತೆರೆಯಲಾಗಿದೆ. ಇದಕ್ಕೆ ಕಂದಾಯ ಅಧಿಕಾರಿಗಳು ಅನುಮತಿ ನೀಡುತ್ತಿದ್ದಾರೆ’ ಎಂದು ದೂರಿದರು.

ADVERTISEMENT

‘ಈ ಕುರಿತಂತೆ ಅರ್ಜಿದಾರರು ಹಾಗೂ ಸ್ಥಳೀಯರು ದಾಖಲಿಸಿದ್ದ ದೂರಿನ ವಿಚಾರಣೆ ನಡೆಸಿದ ಜಿಲ್ಲಾಧಿಕಾರಿ, 976 ಪ್ರಕರಣಗಳಲ್ಲಿ ಕೃಷಿ ಜಮೀನಿನಲ್ಲಿ ವಾಣಿಜ್ಯ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ ಎಂದು ತಿಳಿಸಿ 2023ರ ನವೆಂಬರ್ 15ರಂದು ಪೌರಾಡಳಿತ ನಿರ್ದೇಶನಾಲಯಕ್ಕೆ ವರದಿ ಸಲ್ಲಿಸಿದ್ದಾರೆ. ಈ ಪ್ರಕರಣಗಳನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಬೇಕಿದೆ’ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಎಲ್ಲೆಲ್ಲಿ ಕೃಷಿ ಭೂಮಿಯಲ್ಲಿ ಕೃಷಿಯೇತರ ಚಟುವಟಿಕೆ ನಡೆಸಲಾಗುತ್ತಿದೆ ಎಂಬ ಬಗ್ಗೆ ಅರ್ಜಿದಾರರು ನಿರ್ದಿಷ್ಟ ಮಾಹಿತಿ ನೀಡಿ ಸಕ್ಷಮ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಬೇಕು. ಸಕ್ಷಮ ಪ್ರಾಧಿಕಾರವು ಈ ಮನವಿಯನ್ನು ಪರಿಗಣಿಸಿ ಅಗತ್ಯ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಸೂಚಿಸಿದೆ.

‘ಕೋಲಾರ ನಗರಸಭೆ ವ್ಯಾಪ್ತಿಯಲ್ಲಿನ ಕೃಷಿ ಭೂಮಿಯಲ್ಲಿ ಅನಧಿಕೃತವಾಗಿ ಕಟ್ಟಡ ನಿರ್ಮಾಣ, ಮದ್ಯದಂಗಡಿ ಸೇರಿದಂತೆ ಇತರೆ ವಾಣಿಜ್ಯ ಚಟುವಟಿಕೆ ನಡೆಸಲು ಕಂದಾಯ ವಿಭಾಗದ ಅಧಿಕಾರಿಗಳು ಅನುಮತಿ ನೀಡುತ್ತಿದ್ದಾರೆ. ಕೃಷಿ ಭೂಮಿಯಲ್ಲಿ ಕೃಷಿಯೇತರ ಚಟುವಟಿಕೆಗಳಿಗೆ ನಡೆಸುವುದು ಕಾನೂನು ಬಾಹಿರ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ. ಈ ಆರೋಪಗಳು ಗಂಭೀರ ಸ್ವರೂಪದಿಂದ ಕೂಡಿದ್ದು, ಕೃಷಿ ಜಮೀನಿನ ರಕ್ಷಣೆಯ ಅರ್ಜಿದಾರರ ಕಾಳಜಿ ಸೂಕ್ತವಾಗಿದೆ’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.