ADVERTISEMENT

ನಾನು ಸುಪ್ರೀಂ ಕೋರ್ಟ್‌ಗಿಂತ ದೊಡ್ಡವನಲ್ಲ: ಕೆ.ಆರ್‌.ರಮೇಶ್‌ಕುಮಾರ್‌ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 16 ಜುಲೈ 2019, 13:35 IST
Last Updated 16 ಜುಲೈ 2019, 13:35 IST
   

ಕೋಲಾರ: ‘ಅತೃಪ್ತ ಶಾಸಕರ ಅರ್ಜಿಗೆ ಸಂಬಂಧಿಸಿದ ಸುಪ್ರೀಂ ಕೋರ್ಟ್‌ನ ಅಭಿಪ್ರಾಯವನ್ನು ವ್ಯಾಖ್ಯಾನಿಸುವುದಿಲ್ಲ. ನ್ಯಾಯಾಲಯದಲ್ಲಿ ಅರ್ಜಿಯ ವಿಚಾರಣೆ ನಡೆದಿದ್ದು, ಅಂತಿಮ ತೀರ್ಪು ಬಂದ ನಂತರ ಪ್ರತಿಕ್ರಿಯಿಸುತ್ತೇನೆ’ ಎಂದು ವಿಧಾನಸಭಾಧ್ಯಕ್ಷ ಕೆ.ಆರ್‌.ರಮೇಶ್‌ಕುಮಾರ್‌ ಹೇಳಿದರು.

ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಅಡ್ಡಗಲ್‌ ಗ್ರಾಮದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ನಾನು ಯಾರಿಗೂ ಸವಾಲು ಹಾಕಿಲ್ಲ. ಸುಪ್ರೀಂ ಕೋರ್ಟ್‌ಗಿಂತ ನಾನು ದೊಡ್ಡವನಲ್ಲ’ ಎಂದರು.

‘ನನಗೆ ಕೊಟ್ಟಿರುವ ಜವಾಬ್ದಾರಿ ನಿರ್ವಹಿಸಿದ್ದೇನೆ. ಅತೃಪ್ತ ಶಾಸಕರ ರಾಜೀನಾಮೆ ಸಂಬಂಧ ಸ್ವಾತಂತ್ರ್ಯ ಹೋರಾಟಗಾರ ಎಸ್‌.ಎಸ್‌.ದೊರೆಸ್ವಾಮಿ, ಸಾಹಿತಿ ದೇವನೂರ ಮಹಾದೇವ, ಕೆಲ ಸಂಘ ಸಂಸ್ಥೆಗಳ ಸದಸ್ಯರು ಹಾಗೂ ಸಾರ್ವಜನಿಕರು ನನ್ನ ಕಚೇರಿಗೆ ದೂರು ಸಲ್ಲಿಸಿದ್ದಾರೆ. ಈ ದೂರುಗಳ ವಿಚಾರಣೆ ನಡೆಸಬೇಕಿದ್ದು, ಸಂವಿಧಾನಬದ್ಧವಾಗಿ ಕೆಲಸ ಮಾಡುತ್ತೇನೆ’ ಎಂದು ತಿಳಿಸಿದರು.

ADVERTISEMENT

‘ಐಎಂಎ ವಂಚನೆ ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡದ (ಎಸ್‌ಐಟಿ) ಅಧಿಕಾರಿಗಳು ಶಾಸಕ ಆರ್‌.ರೋಷನ್‌ ಬೇಗ್‌ ಅವರನ್ನು ಸೋಮವಾರ ರಾತ್ರಿ ವಶಕ್ಕೆ ಪಡೆದ ನಂತರ ನನ್ನ ಕಚೇರಿಗೆ ಮಾಹಿತಿ ನೀಡಿದ್ದಾರೆ. ವಿಧಾನಸಭಾಧ್ಯಕ್ಷರ ಪೂರ್ವಾನುಮತಿ ಪಡೆದು ಶಾಸಕರನ್ನು ವಶಕ್ಕೆ ತೆಗೆದುಕೊಳ್ಳಬೇಕೆಂಬ ನಿಯಮವಿಲ್ಲ. ಶಾಸಕರನ್ನು ವಶಕ್ಕೆ ಪಡೆದ 24 ತಾಸಿನೊಳಗೆ ಆ ಬಗ್ಗೆ ವಿಧಾನಸಭಾಧ್ಯಕ್ಷರಿಗೆ ಮಾಹಿತಿ ನೀಡಬಹುದು. ಎಸ್‌ಐಟಿ ಅಧಿಕಾರಿಗಳು ಇದೇ ಕೆಲಸ ಮಾಡಿದ್ದಾರೆ’ ಎಂದು ವಿವರಿಸಿದರು.

ಇನ್ನಷ್ಟು...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.