ಮುಳಬಾಗಿಲು: ತಾಲ್ಲೂಕಿನ ಅಂಬ್ಲಿಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಲುವಹಳ್ಳಿ ಗ್ರಾಮದಲ್ಲಿ ಸುಮಾರು ಒಂದು ವರ್ಷದಿಂದ ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟು ನಿಂತಿದ್ದು ಗ್ರಾಮಸ್ಥರು ಕುಡಿಯುವ ನೀರಿಗಾಗಿ ಪರದಾಡುತ್ತಿದ್ದಾರೆ ಎಂಬ ವರದಿ ಪ್ರಜಾವಾಣಿಯಲ್ಲಿ ಪ್ರಕಟವಾದ ಒಂದು ದಿನದಲ್ಲೇ ಅಧಿಕಾರಿಗಳು ಸ್ಪಂದಿಸಿ ಘಟಕವನ್ನು ದುರಸ್ತಿಗೊಳಿಸಿದ್ದಾರೆ.
ಬುಧವಾರ ಪ್ರಜಾವಾಣಿಯಲ್ಲಿ ‘ಕುಡಿಯುವ ನೀರಿನ ಘಟಕ ದುರಸ್ತಿಗೆ ಆಗ್ರಹ’ ಎಂಬ ಶೀರ್ಷಿಕೆ ಅಡಿಯಲ್ಲಿ ಸುದ್ದಿ ಪ್ರಕಟವಾಗಿತ್ತು. ಸುದ್ದಿಗೆ ಸ್ಪಂದಿಸಿದ ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ಡಾ.ಸರ್ವೇಶ್ ಅವರು ನೀರು ಸರಬರಾಜು ಇಲಾಖೆಯ ಎಂಜಿನಿಯರ್ ರಾಜೇಶ್ ಅವರಿಗೆ ಸೂಚನೆ ನೀಡಿದ್ದು, ಆದೇಶದ ಮೇರೆಗೆ ರಾಜೇಶ್ ಗುರುವಾರ ಗ್ರಾಮಕ್ಕೆ ಭೇಟಿ ನೀಡಿ ಘಟಕ ದುರಸ್ತಿಗೊಳಿಸಿದ್ದು, ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರು ದೊರೆಯುವಂತೆ ಮಾಡಿದ್ದಾರೆ.
ಯಂತ್ರ ತಾಂತ್ರಿಕ ಸಮಸ್ಯೆಯಿಂದ ನೀರು ನಿಂತು ಹೋಗಿತ್ತು, ಅದನ್ನು ಸರಿಪಡಿಸಲಾಗಿದೆ. ಈ ಸುದ್ದಿ ಪ್ರಕಟಿಸಿ ಅಧಿಕಾರಿಗಳ ಗಮನಕ್ಕೆ ತಂದ ಪ್ರಜಾವಾಣಿ ಪತ್ರಿಕೆಗೆ ಧನ್ಯವಾದಗಳು ಎಂದು ರಾಜೇಶ್ ಅವರು ತಿಳಿಸಿದರು.
ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ಡಾ.ಸರ್ವೇಶ್ ಮಾತನಾಡಿ, ತಾಲ್ಲೂಕಿನಲ್ಲಿ ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಲಾಗುತ್ತಿದ್ದು, ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದರೆ ಸ್ಥಳೀಯ ಗ್ರಾಮ ಪಂಚಾಯತಿ ಅಥವಾ ತನ್ನ ಗಮನಕ್ಕೆ ಬಂದ ಕೂಡಲೇ ಸಮಸ್ಯೆ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.