ADVERTISEMENT

ಶಿವಕುಮಾರ ಸ್ವಾಮೀಜಿ ಮನುಕುಲಕ್ಕೆ ಮಾದರಿ

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಗನಂದ ಕೆಂಪರಾಜ್ ಸ್ಮರಣೆ

​ಪ್ರಜಾವಾಣಿ ವಾರ್ತೆ
Published 21 ಜನವರಿ 2021, 14:24 IST
Last Updated 21 ಜನವರಿ 2021, 14:24 IST
ಕೋಲಾರದಲ್ಲಿ ಗುರುವಾರ ನಡೆದ ಶಿವಕುಮಾರ ಸ್ವಾಮೀಜಿ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ವಿವಿಧ ಸಂಘಟನೆಗಳ ಸದಸ್ಯರು ಶ್ರೀಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಕೋಲಾರದಲ್ಲಿ ಗುರುವಾರ ನಡೆದ ಶಿವಕುಮಾರ ಸ್ವಾಮೀಜಿ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ವಿವಿಧ ಸಂಘಟನೆಗಳ ಸದಸ್ಯರು ಶ್ರೀಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.   

ಕೋಲಾರ: ‘ತ್ರಿವಿಧ ದಾಸೋಹದ ಮೂಲಕ ದೇಶದಲ್ಲಿ ಬಸವ ತತ್ವ ಭಿತ್ತಿ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ದಾಖಲಿಸುವಂತಹ ಸಾಧನೆ ಮಾಡಿರುವ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳು ಮನುಕುಲಕ್ಕೆ ಮಾದರಿ’ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಗನಂದ ಕೆಂಪರಾಜ್ ಬಣ್ಣಿಸಿದರು.

ಇಲ್ಲಿ ಗುರುವಾರ ನಡೆದ ಶಿವಕುಮಾರ ಸ್ವಾಮೀಜಿಗಳ 2ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ‘ಶಿವಕುಮಾರ ಸ್ವಾಮೀಜಿಯು ಇಡೀ ಜೀವತಾವಧಿಯನ್ನು ಸಮಾಜಕ್ಕೆ ಮೀಸಲಿಟ್ಟರು. ಶ್ರೀಗಳು ಜಾತಿ, ಧರ್ಮ ಬೇಧ ಮರೆತು ಸಮಾಜದ ಎಲ್ಲರಿಗೂ ವಿದ್ಯೆ ನೀಡಿದರು. ಅನ್ನ, ವಸತಿ, ಶಿಕ್ಷಣಕ್ಕೆ ಒತ್ತು ಕೊಟ್ಟು ಸ್ವಸ್ಥ ಸಮಾಜಕ್ಕೆ ಬುನಾದಿ ಹಾಕಿದರು’ ಎಂದು ಸ್ಮರಿಸಿದರು.

‘ಶಿವಕುಮಾರ ಸ್ವಾಮೀಜಿಯು ಹಸಿದು ಬಂದ ಅತಿಥಿಗಳಿಗೆ ದಾಸೋಹ ಸೇವೆ ಸಲ್ಲಿಸಿದ ಮಹಾನ್ ವ್ಯಕ್ತಿ. ನಡೆದಾಡುವ ದೇವರು, ಅಭಿನವ ಬಸವಣ್ಣ, ತ್ರಿವಿಧ ದಾಸೋಹಿ ಎಂದೇ ಹೆಸರಾಗಿದ್ದ ಅವರು 111 ವರ್ಷಗಳ ತುಂಬು ಜೀವನ ನಡೆಸಿದರು. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಶಿಕ್ಷಣ, ಆರೋಗ್ಯ ಮತ್ತು ವಸತಿ ಸೌಕರ್ಯ ಕಲ್ಪಿಸಿದರು’ ಎಂದು ಹೇಳಿದರು.

ADVERTISEMENT

‘ಜಾಗತಿಕವಾಗಿ ಅಸಂಖ್ಯಾತ ಭಕ್ತರನ್ನು ಹೊಂದಿರುವ ಶ್ರೀಗಳು 1930ರಲ್ಲಿ ಸಿದ್ಧಗಂಗಾ ಮಠದ ಜವಾಬ್ದಾರಿ ಹೊತ್ತು ನಿರಂತರವಾಗಿ ಶ್ರಮಿಸಿದ ಶ್ರಮಯೋಗಿ. ಯಾವುದೇ ಮತ, ಧರ್ಮಕ್ಕೆ ಸೀಮಿತವಾಗದೆ ಜಾತ್ಯಾತೀತವಾಗಿ ಬದುಕಿ ಬಸವಣ್ಣನ ಮಾದರಿಯಲ್ಲಿ ಸಮಾಜದಲ್ಲಿ ಸಮಾನತೆಯ ದೀವಿಗೆ ಬೆಳಗಿದ ಮಹಾನ್ ಆದರ್ಶವಾದಿ’ ಎಂದರು.

‘12ನೇ ಶತಮಾನದಲ್ಲಿ ಬಸವಣ್ಣರು ಸಾಮಾಜಿಕ ಕ್ರಾಂತಿ ಮಾಡಿದ ರೀತಿಯಲ್ಲಿ ಅಕ್ಷರ ಕ್ರಾಂತಿಗಾಗಿ ಬದುಕನ್ನೇ ಮುಡುಪಾಗಿಟ್ಟ ಶಿವಕುಮಾರ ಸ್ವಾಮೀಜಿಗಳು ಎಂದೆಂದಿಗೂ ಅಮರ. ಸಿದ್ಧಗಂಗಾ ಮಠದಲ್ಲಿ ಕಲಿತ ಲಕ್ಷಾಂತರ ವಿದ್ಯಾರ್ಥಿಗಳು ದೇಶ ವಿದೇಶದಲ್ಲಿ ಉನ್ನತ ಹುದ್ದೆ ಅಲಂಕರಿಸಿದ್ದಾರೆ’ ಎಂದು ತಿಳಿಸಿದರು.

ಅಪರೂಪದ ತಪಸ್ವಿ: ‘ಸ್ವಾಮೀಜಿಯು ಶಿಕ್ಷಣದ ಮಹತ್ವ ತಿಳಿದು ರಾಜ್ಯದಲ್ಲಿ ಅಕ್ಷರ ಕ್ರಾಂತಿ ಮಾಡಿದರು. ಸರಳ ಸಜ್ಜನಿಕೆಯ ಅವರು ವಿವಿಧ ಕ್ಷೇತ್ರಗಳ ಅಭಿವೃದ್ಧಿಗೂ ಕೊಡುಗೆ ನೀಡಿದ್ದಾರೆ. ಜಾತ್ಯಾತೀತ ತತ್ವ ಮೈಗೂಡಿಸಿಕೊಂಡಿದ್ದ ಶ್ರೀಗಳು ನಿಜಕ್ಕೂ ಪವಾಡ ಪುರುಷರು. ಬಸವಣ್ಣರ ತತ್ವಾದರ್ಶ ಕಾರ್ಯರೂಪಕ್ಕೆ ತಂದ ಅಪರೂಪದ ತಪಸ್ವಿ’ ಎಂದು ರಾಜ್ಯ ಕೈಗಾರಿಕಾ ಸರಬರಾಜು ಮತ್ತು ಮಾರಾಟ ಸಹಕಾರ ಮಹಾಮಂಡಳದ ಉಪಾಧ್ಯಕ್ಷ ವಿ.ಮುನಿರಾಜು ಹೇಳಿದರು.

‘ಬಸವಣ್ಣರ ಕಾಯಕವೇ ಕೈಲಾಸ ತತ್ವದಲ್ಲಿ ನಂಬಿಕೆಯಿಟ್ಟಿದ್ದ ಶ್ರೀಗಳು ತ್ರಿವಿಧ ದಾಸೋಹದಲ್ಲಿ ಧರ್ಮ, ಜಾತಿ, ಮತದ ಬೇಧವಿಲ್ಲದೆ ಮಕ್ಕಳಿಗೆ ಶಿಕ್ಷಣ ನೀಡಿ ಸಾವಿರಾರು ವಿದ್ಯಾರ್ಥಿಗಳ ಬಾಳಿಗೆ ಬೆಳಕಾದರು. ಲಕ್ಷಾಂತರ ಮಂದಿಯ ಹಸಿವು ನೀಗಿಸಿ ಸಮಾಜದ ಉಳಿವಿಗೆ ಜ್ಞಾನ ಗಂಗೆ ಹರಿಸಿದರು. ಅವರ ನಿಸ್ವಾರ್ಥ ಸೇವೆ ಎಲ್ಲರಿಗೂ ಮಾದರಿ’ ಎಂದು ಅಭಿಪ್ರಾಯಪಟ್ಟರು.

‘ಶ್ರೀಗಳು ದೈಹಿಕವಾಗಿ ದೂರವಾಗಿದ್ದರೂ ಮಾನಸಿಕವಾಗಿ ಜನರಿಂದ ದೂರವಾಗಲು ಎಂದಿಗೂ ಸಾಧ್ಯವಿಲ್ಲ. ಗಗನಕ್ಕೆ ಗಗನವೇ ಸಾಟಿ, ಸಾಗರಕ್ಕೆ ಸಾಗರವೇ ಉಪಮೆ ಎಂಬಂತೆ ಸೇವಾ ಕ್ಷೇತ್ರಕ್ಕೆ ಶಿವಕುಮಾರ ಸ್ವಾಮೀಜಿಯೊಬ್ಬರೇ ಸಾಟಿ’ ಎಂದರು.

ನೂತನ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರುದ್ರಪ್ಪ, ನಿವೃತ್ತ ಶಿಕ್ಷಕರಾದ ಬಸವರಾಜ್, ನಿವೃತ್ತ ಎಎಸ್ಐ ಬಸವರಾಜ್, ಜಿಲ್ಲಾ ಸರ್ಕಾರಿ ನೌಕರರ ಸಂಘದ ಸದಸ್ಯ ನಂದೀಶ್‌ಕುಮಾರ್, ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ರಾಜೇಶ್, ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ನಳಿನಿಗೌಡ ಪಾಲ್ಗೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.