ADVERTISEMENT

ಕೊಪ್ಪಳ: ರಾಜಕಾಲುವೆಗಳ ಸರ್ವೆ ನಡೆಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 9 ಜುಲೈ 2024, 15:57 IST
Last Updated 9 ಜುಲೈ 2024, 15:57 IST
ಕೊಪ್ಪಳದಲ್ಲಿ ಮಂಗಳವಾರ ಪ್ರಗತಿಪರ ಸಂಘಟನೆಗಳ ಮುಖಂಡರು ಹೆಚ್ಚುವರಿ ಜಿಲ್ಲಾಧಿಕಾರಿ ಸಾವಿತ್ರಿ ಬಿ. ಕಡಿ ಅವರಿಗೆ ಮನವಿ ಸಲ್ಲಿಸಿದರು
ಕೊಪ್ಪಳದಲ್ಲಿ ಮಂಗಳವಾರ ಪ್ರಗತಿಪರ ಸಂಘಟನೆಗಳ ಮುಖಂಡರು ಹೆಚ್ಚುವರಿ ಜಿಲ್ಲಾಧಿಕಾರಿ ಸಾವಿತ್ರಿ ಬಿ. ಕಡಿ ಅವರಿಗೆ ಮನವಿ ಸಲ್ಲಿಸಿದರು   

ಕೊಪ್ಪಳ: ‘ನಗರ ಹಾಗೂ ಭಾಗ್ಯನಗರದ ರಾಜ ಕಾಲುವೆಗಳ ಸರ್ವೆ ನಡೆಸಿ ಹದ್ದುಬಸ್ತು ನಿಗದಿ ಮಾಡಬೇಕು. ಮಳೆಬಂದಾಗ ಜನರಿಗೆ ಆಗುವ ತೊಂದರೆ ತಪ್ಪಿಸಲು ತಡೆಗೋಡೆ ನಿರ್ಮಿಸಬೇಕು’ ಎಂದು ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಮುಖಂಡರು ಮಂಗಳವಾರ ಹೆಚ್ಚುವರಿ ಜಿಲ್ಲಾಧಿಕಾರಿ ಸಾವಿತ್ರಿ ಬಿ. ಕಡಿ ಅವರಿಗೆ ಮನವಿ ಸಲ್ಲಿಸಿದರು.

‘ಕೆಲವರು ರಾಜಕಾಲುವೆಗಳನ್ನು ಅತಿಕ್ರಮಿಸಿ ಕಟ್ಟಡ ನಿರ್ಮಿಸಿಕೊಂಡಿದ್ದಾರೆ. ಈ ಕಾರಣದಿಂದ ಮಳೆ ನೀರು ಸರಾಗವಾಗಿ ಹರಿದು ಹೋಗುತ್ತಿಲ್ಲ. ನೀರು ಹರಿವು ದಿಕ್ಕು ತಪ್ಪಿದ್ದರಿಂದ ಜನ ವಾಸಿಸುವ ಮನೆಗಳಿಗೆ ನೀರು ನುಗ್ಗುತ್ತಿವೆ. ಹಲವು ದಿನಗಳ ಹಿಂದೆ ದೊಡ್ಡ ಮಳೆಯಾದಾಗ ಕಲ್ಯಾಣ ನಗರ, ಕುವೆಂಪು ನಗರ ಹಾಗೂ ಇತರೆ ಪ್ರದೇಶ ಮನೆಗಳಿಗೆ ನೀರು ನುಗ್ಗಿ ಅನಾಹುತ ಉಂಟಾಗಿತ್ತು’ ಎಂದಿದ್ದಾರೆ.

ಹೋರಾಟಗಾರ ಅಲ್ಲಮಪ್ರಭು ಬೆಟ್ಟದೂರು, ಕರ್ನಾಟಕ ರೈತ ಸಂಘ (ಎಐಕೆಕೆಎಸ್) ರಾಜ್ಯಾಧ್ಯಕ್ಷ ಡಿ.ಎಚ್. ಪೂಜಾರ, ಅಖಿಲ ಭಾರತ ಕಾರ್ಮಿಕ ಸಂಘಟನೆಗಳ ಒಕ್ಕೂಟ (ಎಐಟಿಯುಸಿ) ಜಿಲ್ಲಾಧ್ಯಕ್ಷ ಬಸವರಾಜ ಶೀಲವಂತರ, ರಾಜ್ಯ ರೈತ ಸಂಘ ಜಿಲ್ಲಾಧ್ಯಕ್ಷ ಬಸವರಾಜ ನರೇಗಲ್, ಅಲೆಮಾರಿ ಸಂಘಟನೆಯ ಜಿಲ್ಲಾಧ್ಯಕ್ಷ ಸಂಜಯದಾಸ್ ಕೌಜಗೇರಿ, ಭಾರತೀಯ ಭೀಮ ಸೇನೆಯ ಜಿಲ್ಲಾಧ್ಯಕ್ಷ ಕಾಶಪ್ಪ ಚಲವಾದಿ, ಕೊಳಚೆ ನಿರ್ಮೂಲನಾ ವೇದಿಕೆಯ ಜಿಲ್ಲಾ ಸಂಚಾಲಕ ತುಕಾರಾಮ್ ಬಿ. ಪಾತ್ರೋಟಿ, ಜನಪರ ಸಂಘಟನೆಗಳ ಒಕ್ಕೂಟದ ಜಿಲ್ಲಾ ಸಂಚಾಲಕ ಎಸ್.ಎ. ಗಫಾರ್ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.