ಗಂಗಾವತಿ: ಇಲ್ಲಿನ ತಾಲ್ಲೂಕು ಪಂಚಾಯಿತಿ ಮಂಥನ ಸಭಾಂಗಣದಲ್ಲಿ ತಾಲ್ಲೂಕು ಆಡಳಿತದಿಂದ ಮತದಾರ ಪಟ್ಟಿ ಪರಿಷ್ಕರಣೆ ಕುರಿತು ಈಚೆಗೆ ಅಂಗನವಾಡಿ ಕಾರ್ಯಕರ್ತೆಯರಿಗೆ ತರಬೇತಿ ಕಾರ್ಯಾಗಾರ ನಡೆಯಿತು.
ಚುನಾವಣೆ ವಿಭಾಗದ ಶಿರಸ್ತೇದಾರ ರವಿಕುಮಾರ ನಾಯಕವಾಡಿ ಮಾತನಾಡಿ, ‘ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಮತದಾರರಿಗೆ ಅವರದೇ ಆದ ಸ್ಥಾನವಿದ್ದು, ದೇಶದ ಅಭಿವೃದ್ಧಿ, ಭದ್ರತೆ ವಿಚಾರದಲ್ಲಿ ಜನಪ್ರತಿನಿಧಿಗಳ ಆಯ್ಕೆಗೆ ಇವರ ಮತಗಳೇ ಅಂತಿಮ ನಿರ್ಧಾರವಾಗಲಿವೆ. ಹಾಗಾಗಿ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಿಸಿಕೊಳ್ಳಬೇಕು. ಸದ್ಯ ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ 3,250 ಯುವ ಮತದಾರರು ಹೆಸರು ನೋಂದಾಯಿಸಿಕೊಂಡಿದ್ದು,ಇದರಲ್ಲಿ 1,789 ಪುರುಷರು, 1,451 ಮಹಿಳೆಯರು ಇದ್ದಾರೆ’ ಎಂದರು.
‘ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ನವೆಂಬರ್ 28 ಕೊನೆಯ ದಿನಾಂಕವಾಗಿದೆ. ಅಂಗನವಾಡಿ ಕಾರ್ಯಕರ್ತೆಯರು ಈ ಬಗ್ಗೆ ಯುವ ಮತದಾರರಿಗೆ ಜಾಗೃತಿ ಮೂಡಿಸಬೇಕು.ಯಾವುದೇ ಕಾರಣಕ್ಕೂ ಕೆಲಸದಲ್ಲಿ ನಿರ್ಲಕ್ಷ್ಯ ತೋರುವಂತಿಲ್ಲ’ ಎಂದರು.
ನಂತರ ಅಂಗನವಾಡಿ ಕಾರ್ಯಕರ್ತೆಯರಿಗೆ ತರಬೇತಿ ಕಾರ್ಯಾಗಾರ ನಡೆಸಲಾಯಿತು. ಅಂಗನವಾಡಿ ಕೇಂದ್ರಗಳ ಮೇಲ್ವಿಚಾರಕಿ ಲಕ್ಷ್ಮೀದೇವಿ ಗೋಟೂರು, ಈರಮ್ಮ ಮತ್ತಿತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.